ಮಾಲೂರು ಶಾಸಕ ನಂಜೇಗೌಡರಿಗೆ ಹೈಕೋರ್ಟ್ ಸಮನ್ಸ್
ಬೆಂಗಳೂರು, ಆಗಸ್ಟ್ 29: ವಿಧಾನಸಭೆ ಚುನಾವಣೆಯಲ್ಲಿ ಕೋಲಾರದ ಮಾಲೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‌ನ ಕೆ. ವೈ. ನಂಜೇಗೌಡರನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಹೂಡಲಾಗಿದೆ.
ಅರ್ಜಿ ಸಂಬಂಧ ಶಾಸಕ ನಂಜೇಗೌಡ ಸೇರಿ ಎಲ್ಲ ಪ್ರತಿವಾದಿಗಳಿಗೂ ಹ್ಯಾಂಡ್ ಸಮನ್ಸ್ ಜಾರಿ ಮಾಡಲು ಅರ್ಜಿದಾರರಿಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿ ಆದೇಶಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಕೆ. ವೈ. ನಂಜೇಗೌಡ 50955 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

ಬಿಜೆಪಿ ಪರಾಜಿತ ಅಭ್ಯರ್ಥಿ ಕೆ. ಎಸ್. ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಅವರ ಪೀಠ ಈ ಆದೇಶ ಮಾಡಿದೆ. ಕೆ. ಎಸ್. ಮಂಜುನಾಥ್ ಗೌಡ ಚುನಾವಣೆಯಲ್ಲಿ 50707 ಮತಗಳನ್ನು ಪಡೆದು ಸೋಲು ಕಂಡಿದ್ದರು.
ವಿಚಾರಣೆ ವೇಳೆ ಅರ್ಜಿದಾರ ಪರ ಹಿರಿಯ ವಕೀಲರು, ಅರ್ಜಿಯಲ್ಲಿ ಶಾಸಕ ಕೆ. ವೈ. ನಂಜೇಗೌಡ ಮತ್ತು ಚುನಾವಣೆಗೆ ಸ್ಪರ್ಧಿಸಿದ್ದ ಇತರೆ 13 ಮಂದಿ ಪ್ರತಿವಾದಿಗಳಿದ್ದಾರೆ. ಆ ಪೈಕಿ ಅನೇಕ ಪ್ರತಿವಾದಿಗಳಿಗೆ ಅರ್ಜಿ ಸಂಬಂಧ ಈ ಹಿಂದೆ ಹೈಕೋರ್ಟ್ ಜಾರಿ ಮಾಡಿದ್ದ ನೋಟಿಸ್/ ಸಮನ್ಸ್ ತಲುಪಿಲ್ಲ. ಅದರಂತೆ ಪ್ರತಿವಾದಿಗಳಿಗೆ ನೋಟಿಸ್/ ಹ್ಯಾಂಡ್ ಸಮನ್ಸ್ ಜಾರಿ ಮಾಡಲು ಅನುಮತಿ ನೀಡಬೇಕು ಎಂದು ಕೋರಿದರು.
ಆ ಮನವಿ ಪುರಸ್ಕರಿಸಿದ ನ್ಯಾಯಪೀಠ, ಈವರೆಗೂ ಸಮನ್ಸ್ ಜಾರಿಯಾಗದ ಪ್ರತಿವಾದಿಗಳಿಗೆ ಹ್ಯಾಂಡ್ ಸಮನ್ಸ್ ಜಾರಿ ಮಾಡಲು ಅರ್ಜಿದಾರರ ಪರ ವಕೀಲರು ಒಂದು ವಾರದಲ್ಲಿ ಅಗತ್ಯ ಕ್ರಮ ಜರುಗಿಸಬೇಕು. ಮೊದಲ ಪ್ರತಿವಾದಿಯಾಗಿರುವ ಶಾಸಕ ಕೆ. ವೈ. ನಂಜೇಗೌಡ ಅವರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಸೆ.11ಕ್ಕೆ ಮುಂದೂಡಿತು.
ನಿಯಮಗಳ ಉಲ್ಲಂಘನೆ: ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಕೆ. ವೈ. ನಂಜೇಗೌಡ ಗೆಲುವು ಸಾಧಿಸಿದ್ದರು. ಇದನ್ನು ಪ್ರಶ್ನಿಸಿರುವ ಅರ್ಜಿದಾರರು, ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ 15 ಮಂದಿ ಸ್ಪರ್ಧಿಗಳ ಏಜೆಂಟ್‌ಗಳಿಗೆ ಮತ ಎಣಿಕೆ ಕೇಂದ್ರದಲ್ಲಿ ಸಮರ್ಪಕ ವ್ಯವಸ್ಥೆ ಮಾಡಿರಲಿಲ್ಲ. ಒಂದೇ ಕೊಠಡಿಯಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಬೇಕಿದ್ದು, ಎರಡು ಪ್ರತ್ಯೇಕ ಕೊಠಡಿಯಲ್ಲಿ ಮತ ಎಣಿಕೆ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಅಲ್ಲದೆ, ಜನಪ್ರತಿನಿಧಿಗಳ ಕಾಯ್ದೆಯ ನಿಯಮಗಳು ಮತ್ತು ಚುನಾವಣಾ ಆಯೋಗ ಪ್ರಕಟಿಸಿದ್ದ ನಿಯಮಗಳ ಉಲ್ಲಂಘಿಸಲಾಗಿದೆ. ಆದ್ದರಿಂದ ನಂಜೇಗೌಡ ಅವರನ್ನು ವಿಜೇತ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಚುನಾವಣಾ ಆಯೋಗದ ಕ್ರಮ ರದ್ದುಪಡಿಸಬೇಕು. ಮತಗಳ ಮರು ಎಣಿಕೆಗೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.












Click it and Unblock the Notifications