ಬೀದರ್ ನಲ್ಲಿ ಬಿಜೆಪಿಗೆ ಸೆಡ್ಡು ಹೊಡೆದ ನಾಗಮಾರಪಲ್ಲಿ
ಬೆಂಗಳೂರು, ಮಾ. 25 : ನಾಮಪತ್ರ ಸಲ್ಲಿಸಲು ಎರಡು ದಿನಗಳು ಮಾತ್ರ ಬಾಕಿ ಉಳಿದಿದ್ದು, ಮಂಗಳವಾರ ಮತ್ತು ಬುಧವಾರ ಹಲವಾರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಜಾಫರ್ ಷರೀಫ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಕರ್ನಾಟಕದ ಇತರ ಚುನಾವಣಾ ಸುದ್ದಿಗಳು ಇಲ್ಲಿವೆ.
4 ಗಂಟೆ : ಮುತಾಲಿಕ್ ಪಕ್ಷೇತರರಾಗಿ ಸ್ಪರ್ಧೆ : ಬಿಜೆಪಿಗೆ ಮರಳಿ ಕೆಲವೇ ಗಂಟೆಗಳಲ್ಲಿ ಪಕ್ಷದಿಂದ ಹೊರಬಂದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಧಾರವಾಡ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ತೀರ್ಮಾನ ಕೈಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ವಿರುದ್ಧವಾಗಿ ಅವರು ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. [ಮುತಾಲಿಕ್ ಹೇಳಿದ್ದೇನು?]
2 ಗಂಟೆ : ಚಿಕ್ಕಬಳ್ಳಾಪುರದಿಂದ ಎಚ್ಡಿಕೆ ಸ್ಪೆರ್ಧೆ : ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಮ್ಮತಿ ಸೂಚಿಸಿದ್ದು, ಬುಧವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸಲಿದ್ದಾರೆ. ಇದರಿಂದ ಚಿಕ್ಕಬಳ್ಳಾಪುರದಲ್ಲಿ ಇಬ್ಬರು ಮಾಜಿ ಸಿಎಂಗಳು ಸ್ಪರ್ಧೆಗೆ ಇಳಿದಂತಾಗಿದೆ. ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ವೀರಪ್ಪ ಮೊಯ್ಲಿ ನಾಮಪತ್ರ ಸಲ್ಲಿಸಿದ್ದಾರೆ.
12.30 : ಕಾಂಗ್ರೆಸ್ ನಲ್ಲೇ ಇರುವೆ ಕು.ಬಂಗಾರಪ್ಪ : ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಕುಮಾರ್ ಬಂಗಾರಪ್ಪ ತಿಳಿಸಿದರು. ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದರಿಂದ ಕುಮಾರ್ ಬಂಗಾರಪ್ಪ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತಯಾರಿ ನಡೆಸಿದ್ದರು. ಆದರೆ, ಕಾಂಗ್ರೆಸ್ ನಾಯಕರ ಸಂಧಾನದಿಂದಾಗಿ, ಚುನಾವಣೆಗೆ ಸ್ಪರ್ಧಿಸದಿರಲು ಅವರು ಒಪ್ಪಿದ್ದಾರೆ. [ಕುಮಾರ್ ಬಂಗಾರಪ್ಪ ಪತ್ರಿಕಾಗೋಷ್ಠಿ]
11.30 : ಬಿಜೆಪಿಗೆ ಮರಳಿದ ಬೇಳೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದ ಸಾಗರ ಕ್ಷೇತ್ರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ತವರು ಪಕ್ಷ ಬಿಜೆಪಿಗೆ ಮರಳಿದ್ದಾರೆ. ಮಂಗಳವಾರ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬೇಳೂರು ಗೋಪಾಲಕೃಷ್ಣ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
11 ಗಂಟೆ : ಬಿಜೆಪಿಗೆ ಸೆಡ್ಡು ಹೊಡೆದ ನಾಗಮಾರಪಲ್ಲಿ : ಬೀದರ್ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಪುತ್ರ ಸೂರ್ಯಕಾಂತ್ ನಾಗಮಾರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ. ಬುಧವಾರ ಬೆಳಗ್ಗೆ 11.30ಕ್ಕೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಅವರು ಘೋಷಿಸಿದ್ದಾರೆ. ಈಗಾಗಲೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಭಗವಂತ ಖೂಬಾ ನಾಮಪತ್ರ ಸಲ್ಲಿಸಿದ್ದಾರೆ. ಇದರಿಂದ ಬೀದರ್ ಬಿಜೆಪಿ ಘಟಕದಲ್ಲಿ ಬಂಡಾಯದ ಕಹಳೆ ಮೊಳಗಿದೆ.

10 ಗಂಟೆ : ಷರೀಫ್ ಸ್ಪರ್ಧೆ ಇಲ್ಲ : ಹಿರಿಯ ಕಾಂಗ್ರೆಸ್ ಮುಖಂಡ ಸಿ.ಕೆ.ಜಾಫರ್ ಷರೀಫ್ ಜೆಡಿಎಸ್ ಅಭ್ಯರ್ಥಿಯಾಗಿ ಮೈಸೂರು ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಷರೀಫ್ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಮೈಸೂರು ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಕುಮಾರಸ್ವಾಮಿ ತಿಳಿಸಿದರು. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
9 ಗಂಟೆ : ಕೈ ಹಿಡಿದ ಹರೀಶ್ : ಹರಿಹರ ಕ್ಷೇತ್ರದ ಮಾಜಿ ಶಾಸಕ ಮತ್ತು ಬಿಎಸ್ ಯಡಿಯೂರಪ್ಪ ಅವರ ಬಂಟ ಬಿ.ಪಿ.ಹರೀಶ್ ಕೆಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದ ಬಳಿಕ ಕಾಂಗ್ರೆಸ್ ಸೇರುತ್ತಿರುವುದಾಗಿ ಅವರು ಘೋಷಿಸಿದ್ದಾರೆ. ಇದರಿಂದ ಯಡಿಯೂರಪ್ಪ ಬೆಂಬಲಿಗರಾದ ಮತ್ತೊಬ್ಬರು ಕಾಂಗ್ರೆಸ್ ಸೇರಿದಂತಾಗಿದೆ.












Click it and Unblock the Notifications