ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ: ಮಹತ್ವದ ಅಪ್‌ಡೇಟ್ ಕೊಟ್ಟ ಈಶ್ವರ ಖಂಡ್ರೆ
ನವದೆಹಲಿ, ಮಾರ್ಚ್29: ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಈ ಪ್ರಕರಣ ಸರ್ವೋನ್ನತ ನ್ಯಾಯಾಲಯದಲ್ಲಿದ್ದು, ಪ್ರಸ್ತುತ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯವರೆಗೆ ನಿರ್ಬಂಧ ಜಾರಿಯಲ್ಲಿದೆ. ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ಬಾಂಧವ್ಯವನ್ನು ಗಮನದಲ್ಲಿಟ್ಟುಕೊಂಡು, ಎಲ್ಲರೊಂದಿಗೆ ಚರ್ಚಿಸಿ ಸೂಕ್ತವಾದ ತೀರ್ಮಾನ ಮಾಡಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಬೇರೆ ರಾಜ್ಯಗಳಲ್ಲಿನ ಹಾಲಿನ ದರಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ದರ ಕಡಿಮೆ ಇದೆ. ಜೊತೆಗೆ ಮೇವುನ ದರ ಮತ್ತು ಹೈನುಗಾರಿಕೆ ನಿರ್ವಹಣಾ ವೆಚ್ಚ ಅಧಿಕವಾಗಿದ್ದು ಇದಕ್ಕೆ ಹೋಲಿಸಿದರೆ ಹಾಲಿನ ದರ ಏರಿಕೆ ಮಾಡಿರುವುದು ಕಡಿಮೆಯೇ ಇದೆ. ಹೈನುಗಾರಿಕೆ ಮಾಡುವ ರೈತರಿಗೆ ನೆರವಾಗಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದರು. ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಅರಣ್ಯ ಇಲಾಖೆಯ ಅಭಿವೃದ್ಧಿ ಯೋಜನೆಗಳು, ಪ್ರಕೃತಿ ಪರಿಸರ ಉಳಿಸಲು ಆರಂಭಿಸಿರುವ ಕಾರ್ಯಕ್ರಮಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಗುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿದ್ದಾಗಿ ತಿಳಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಬೀದರ್ ಸಂಸತ್ ಸದಸ್ಯ ಸಾಗರ್ ಖಂಡ್ರೆ ಅವರೊಂದಿಗೆ ಭೇಟಿ ಮಾಡಿ, ರಾಜ್ಯದ ಮತ್ತು ಪಕ್ಷದ ವಿಧ್ಯಮಾನಗಳ ಬಗ್ಗೆ ಚರ್ಚಿಸಿದ್ದಾಗಿ ತಿಳಿಸಿದ ಅವರು, ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೇತೃತ್ವದಲ್ಲಿ ಉತ್ತಮ ಆಡಳಿತ ನೀಡುತ್ತಿದೆ ಎಂದು ತಿಳಿಸಿದರು. ರಾಷ್ಟ್ರೀಯ ನಾಯಕರು, ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗಲು ಸಂಘಟಿತ ಪ್ರಯತ್ನ ಮಾಡುವಂತೆ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಮಾಡಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ಜನತೆಗೆ ಮನವರಿಕೆ ಮಾಡಿಸಲು ಸೂಚಿಸಿದ್ದಾರೆ. ಈ ಕಾರ್ಯವನ್ನು ಮಾಡಲಾಗುವುದು ಎಂದರು.
ಸ್ಮಾರ್ಟ್ ಮೀಟರ್ ಕುರಿತು ಬಿಜೆಪಿ ಟೀಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ, ಸ್ಮಾರ್ಟ್ ಮೀಟರ್ ಖರೀದಿಯನ್ನು ಟೆಂಡರ್ ಪ್ರಕ್ರಿಯೆ ಮೂಲಕ ನಡೆಸಲಾಗಿದ್ದು, ಈ ಬಗ್ಗೆ ಇಂಧನ ಸಚಿವರು ಸದನದಲ್ಲೇ ಸ್ಪಷ್ಟೀಕರಣ ನೀಡಿದ್ದಾರೆ. ಬಿಜೆಪಿಯವರಿಗೆ ಯಾವುದೇ ವಿಷಯ ಇಲ್ಲ. ಹೀಗಾಗಿ ಅಪಪ್ರಚಾರದಲ್ಲಿ ತೊಡಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಅವರು ಆಕ್ರೋಶ ವ್ಯಕ್ತಪಡಿಸಿದರು.
ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ ಮಾಡಿದಂತೆ ಅಥವಾ ಅದಕ್ಕಿಂತ" ಎಂದು ಘನ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿರುವುದನ್ನು ಉಲ್ಲೇಖಿಸಿದ್ದಾರೆ.
ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ ವಿಧಿಸಿರುವ ವಿಚಾರದಲ್ಲಿ ಕರುಣೆ ತೋರುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿರುವುದನ್ನೂ ತಮ್ಮ ಟಿಪ್ಪಣಿಯಲ್ಲಿ ಉಲ್ಲೇಖಿಸಿರುವ ಸಚಿವರು, ಅಕ್ರಮ ಮರಗಳ ಕಡಿತಲೆಗೆ ವಿಧಿಸುವ ದಂಡದ ಪ್ರಮಾಣ ಹೆಚ್ಚಳದ ಅಗತ್ಯ ಪ್ರತಿಪಾದಿಸಿದ್ದಾರೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲುಗಳನ್ನು ಇಡೀ ವಿಶ್ವ ಎದುರಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ, ಇರುವ ಒಂದೇ ಭೂಮಿಯನ್ನು ರಕ್ಷಿಸಿ, ಸುರಕ್ಷಿತವಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಲು, ಪ್ರಕೃತಿ, ಪರಿಸರ ಉಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದೂ ತಿಳಿಸಿದ್ದಾರೆ.












Click it and Unblock the Notifications