2027ಕ್ಕೆ ಈ ಜಿಲ್ಲೆಗೆ ಎತ್ತಿನಹೊಳೆ ನೀರು: ಡಿಕೆ ಶಿವಕುಮಾರ್ ಮಹತ್ವದ ಮಾಹಿತಿ
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಎತ್ತಿನಹೊಳೆ ಯೋಜನೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. 2027ರ ಮಾರ್ಚ್ ಒಳಗಾಗಿ ಈ ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ಹರಿಸುವುದು ರಾಜ್ಯ ಸರ್ಕಾರದ ಗುರಿ ಎಂದು ಹೇಳಿದ್ದಾರೆ. ಎತ್ತಿನಹೊಳೆ ಯೋಜನೆ ಸಂಬಂಧ ಅವರು ಮಹತ್ವದ ಮಾಹಿತಿಯನ್ನು ಇಂದು ಹಂಚಿಕೊಂಡಿದ್ದಾರೆ. ಯಾವ ಯಾವ ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ಹರಿಯಲಿದೆ ಎಂದೂ ಅವರು ವಿವರಿಸಿದ್ದಾರೆ. ಎತ್ತಿನಹೊಳೆ ಯೋಜನೆಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಎತ್ತಿನಹೊಳೆ ಯೋಜನೆಯನ್ನು 2027ರ ಮಾರ್ಚ್ ಒಳಗಾಗಿ ಪೂರ್ಣಗೊಳಿಸಿ, ಬಯಲು ಸೀಮೆಯ 7 ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದು ನಮ್ಮ ರಾಜ್ಯ ಸರ್ಕಾರದ ಸಂಕಲ್ಪ. ಅರಣ್ಯ ಇಲಾಖೆಯೊಂದಿಗೆ ಬೈರಗೊಂಡಲು, ಲಕ್ಕೇನಹಳ್ಳಿ ಭಾಗದಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಏನು ಸಮಸ್ಯೆ ಇದೆ ಎಂಬುದನ್ನು ಸುದೀರ್ಘವಾಗಿ ಚರ್ಚಿಸಿದ್ದೇವೆ ಎಂದು ಹೇಳಿದ್ದಾರೆ.

ತುಮಕೂರಿನಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಲಾಗುವುದು. ನನ್ನ ಕಣ್ಣಾರೆ ಅಲ್ಲಿನ ಪರಿಸ್ಥಿತಿಯನ್ನು ವೀಕ್ಷಿಸಿ ವರದಿಯನ್ನು ಸಿದ್ಧಪಡಿಸುತ್ತೇನೆ. ಬಳಿಕ ಅದನ್ನು ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು. ಎತ್ತಿನಹೊಳೆ ಯೋಜನೆಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ನಿರ್ದೇಶನವನ್ನು ನೀಡಿದ್ದಾರೆ. 2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು ಹರಿಸುವುದು ನಮ್ಮ ಸರ್ಕಾರದ ಗುರಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಇದು ಕೆರೆ ತುಂಬಿಸುವ ಯೋಜನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆಯಷ್ಟೇ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ವಿವಿಧ ಅಂಶಗಳ ಬಗ್ಗೆ ಚರ್ಚಿಸಿದ್ದರು. ಎತ್ತಿನಹೊಳೆ ಕೇವಲ ನೀರಾವರಿ ಯೋಜನೆಯಲ್ಲ, ಕುಡಿಯುವ ನೀರಿನ ಮತ್ತು ಕೆರೆ ತುಂಬಿಸುವ ಯೋಜನೆ. ಈ ಯೋಜನಾ ವ್ಯಾಪ್ತಿಯ ಎಲ್ಲ 7 ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದು ನಮ್ಮ ಸರ್ಕಾರದ ಗುರಿ. ಎತ್ತಿನಹೊಳೆ ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಸರ್ಕಾರದ ಆದ್ಯತೆ ಎಂದಿದ್ದರು.
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ 14.056 ಟಿಎಂಸಿ ಕುಡಿಯುವ ನೀರು, 9.953 ಟಿಎಂಸಿ ನೀರು ಕೆರೆಯನ್ನು ತುಂಬಿಸಲು ಡಿಪಿಆರ್ ಮಾಡಲಾಗಿದ್ದು, ಯೋಜನೆಗೆ 23,251.66 ಕೋಟಿ ರೂಪಾಯಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇದುವರೆಗೆ 17,147 ಕೋಟಿ ರೂಪಾಯಿ ಈ ಯೋಜನೆಯ ವೆಚ್ಚವಾಗಿದೆ. ಒಂದನೇ ಹಂತದಲ್ಲಿ ನದಿ ಪಾತ್ರದ ಏತ ಕಾಮಗಾರಿಗಳಲ್ಲಿ 7 ಪ್ಯಾಕೇಜ್ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, ಹಂತ 2ರಲ್ಲಿ ಗುರುತ್ವ ಮುಖ್ಯ ಕಾಲುವೆ ಕಾಮಗಾರಿಗಳಲ್ಲಿ 33 ಪ್ಯಾಕೇಜ್‌ಗಳ ಪೈಕಿ 11 ಪ್ಯಾಕೇಜ್‌ಗಳನ್ನ ಪೂರ್ಣಗೊಳಿಸಿರುವುದಾಗಿ ಹೇಳಿದ್ದರು. ಇನ್ನೂ 16 ಕಿ.ಮೀ ವ್ಯಾಪ್ತಿಯ ಕಾಮಗಾರಿ ಪ್ರಾರಂಭಿಸಬೇಕಿದ್ದು, ಇದರಲ್ಲಿ 6 ಎಕರೆ ಅರಣ್ಯ ಪ್ರದೇಶ ಹಾಗೂ 10 ಕಿ.ಮೀ ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳಬೇಕಾಗಿದೆ. ಈ ಯೋಜನೆಯನ್ನು 2027ರ ಮಾರ್ಚ್ ಒಳಗಾಗಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಇದು ಗಡುವಿನೊಳಗೆ ಪೂರ್ಣಗೊಂಡರೆ ಉದ್ದೇಶಿತ ಏಳು ಜಿಲ್ಲೆಗಳಿಗೆ ನೀರಾವರಿ ಸೌಲಭ್ಯ ಸಿಗಲಿದೆ.












Click it and Unblock the Notifications