9 ಮತ್ತು 11ನೇ ತರಗತಿ ಪರೀಕ್ಷೆಗಳು ಸರ್ಕಾರದ ಆದೇಶ, ಷರತ್ತುಗಳು
ಬೆಂಗಳೂರು, ಸೆಪ್ಟೆಂಬರ್ 24; ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ 2 ಪರೀಕ್ಷೆಯನ್ನು ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವ ಕುರಿತು ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎಸ್. ಪ್ರಕಾಶ್ ಸರ್ಕಾರದ ಅಧೀನ ಕಾರ್ಯದರ್ಶಿ (ಪ್ರೌಢ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದಾರೆ.

2023-24ನೇ ಸಾಲಿನಿಂದ ರಾಜ್ಯ ಪಠ್ಯಕ್ರಮದ ಸರ್ಕಾರಿ ಅನುದಾನಿತ, ಅನುದಾನ ರಹಿತ ಶಾಲಾ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಹಾಗೂ 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸುವ ಬಗ್ಗೆ ಎಂಬ ವಿಷಯವನ್ನು ಆದೇಶ ಒಳಗೊಂಡಿದೆ.
ಆದೇಶದ ವಿವರಗಳು; ಪ್ರಸ್ತಾವನೆಯಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬೆಂಗಳೂರು, ಈಗಾಗಲೇ 10 ಮತ್ತು 12ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆಗಳನ್ನು ಹಾಗೂ 5 ಮತ್ತು 8ನೇ ತರಗತಿಗಳಿಗೆ ಮೌಲ್ಯಾಂಕನವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ ನಡೆಸಲಾಗುತ್ತಿದೆ ಎಂದು ಹೇಳಿದೆ.
9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಮಂಡಲಿಯಿಂದಲೇ ನಡೆಸಿದಲ್ಲಿ ಎಲ್ಲಾ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಪರಿಶೀಲಿಸುವ ಮೂಲಕ ವಿದ್ಯಾರ್ಥಿಗಳ ಕಲಿಕಾ ಪ್ರಗತಿಯನ್ನು ಬಲವರ್ಧನೆಗೊಳಿಸಬಹುದು ಎಂದು ಅಭಿಪ್ರಾಯಿಸಿರುತ್ತಾರೆ.
1966ರ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಾಯಿದೆ ಮತ್ತು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿದ್ದುಪಡಿ ಅಧಿನಿಯಮ 2022 ರ ನಿಯಮ 15 (A) (IV) ರಲ್ಲಿ Any other Examination which the State Government may from time to time by motification specify ಎಂದಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳ ಜೊತೆಗೆ ಇತರೆ ಪರೀಕ್ಷೆಗಳನ್ನು ನಡೆಸಲು ಸರ್ಕಾರಿ ಆದೇಶವನ್ನು ಹೊರಡಿಸಬೇಕಿರುತ್ತದೆ.
ಈ ಸಂಬಂಧ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮತ್ತು IIನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ ನಡೆಸುವ ಕುರಿತು ಪರಿಶೀಲಿಸಿ ಈ ಆದೇಶ ನೀಡಲಾಗಿದೆ ಎಂದು ವಿವರಿಸಲಾಗಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಹಿನ್ನೆಲೆಯಲ್ಲಿ 2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ವತಿಯಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನುಈ ಕೆಳಕಂಡ ಷರತ್ತುಗಳಿಗೊಳಪಟ್ಟು ಸರ್ಕಾರವು ಅನುಮತಿ ನೀಡಿದೆ.
ಷರತ್ತುಗಳು
* 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ವತಿಯಿಂದ ಶಾಲಾ ಮತ್ತು ಕಾಲೇಜು ಹಂತದಲ್ಲಿಯೇ ನಡೆಸುವುದು.
* 9ನೇ ತರಗತಿಯ ಸಂಕಲನಾತ್ಮಕ ಮೌಲ್ಯಮಾಪನ-2 ಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ. ವತಿಯಿಂದ ರಾಜ್ಯಮಟ್ಟದಲ್ಲಿ ಸಿದ್ದಪಡಿಸಿ ಸಂಬಂಧಿಸಿದ ಕ್ಷೇತ್ರಶಿಕ್ಷಣಾಧಿಕಾರಿಗಳ ಲಾಗಿನ್‌ನಲ್ಲಿ ಲಭ್ಯ ಮಾಡುವುದು.
* 11ನೇ ತರಗತಿಯ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಶ್ನೆ ಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಪಿಯು ಪರೀಕ್ಷಾ ವಿಭಾಗದಿಂದ ರಾಜ್ಯಮಟ್ಟದಲ್ಲಿ ಸಿದ್ಧಪಡಿಸಿ ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವಿಭಾಗದವರ ಲಾಗಿನ್‌ನಲ್ಲಿ ಲಭ್ಯ ಮಾಡುವುದು.
* 9ನೇ ತರಗತಿಯ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಹಾಗೂ 11ನೇ ತರಗತಿಯ ವಾರ್ಷಿಕ ಪರೀಕ್ಷೆಗೆ ಆಯಾ ಶಾಲಾ/ ಕಾಲೇಜುಗಳೇ ಪರೀಕ್ಷಾ ಕೇಂದ್ರಗಳಾಗಿರುತ್ತವೆ.
* 9ನೇ ತರಗತಿಯ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ನಡೆಯುವ ಸಂದರ್ಭದಲ್ಲಿ ಸಮೀಪದ ಶಾಲೆಗಳ ಶಿಕ್ಷಕರನ್ನು ಕೊಠಡಿ ಮೇಲ್ವಿಚಾರಕರನ್ನಾಗಿ ನೇಮಿಸುವುದು.
* 11ನೇ ತರಗತಿಯ ವಾರ್ಷಿಕ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಆಯಾ ಕಾಲೇಜಿನ ಉಪನ್ಯಾಸಕರನ್ನೇ ಕೊಠಡಿ ಮೇಲ್ವಿಚಾರಕರನ್ನಾಗಿ ನೇಮಿಸುವುದು.
* 9ನೇ ತರಗತಿಯ ಸಂಕಲನಾತ್ಮಕ ಮೌಲ್ಯಮಾಪನ-2ರ (SA-2) ಉತ್ತರ ಪತ್ರಿಕೆಗಳ ಮೌಲ್ಯ ಮಾಪನವನ್ನು ತಾಲ್ಲೂಕು ಹಂತದಲ್ಲಿ ಮತ್ತು 11ನೇ ತರಗತಿಯ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯ ಮಾಪನವನ್ನು ಸಂಬಂಧಿಸಿದ ಕಾಲೇಜುಗಳಲ್ಲಿಯೇ ನಿರ್ವಹಿಸುವುದು.
* ಮೌಲ್ಯಮಾಪನ ಪೂರ್ಣಗೊಂಡ ತಕ್ಷಣವೇ ವಿದ್ಯಾರ್ಥಿಗಳ ಫಲಿತಾಂಶವನ್ನು ಸಂಬಂಧಿಸಿದ ಮುಖ್ಯ ಶಿಕ್ಷಕರು ಪ್ರಾಂಶುಪಾಲರು ಎಸ್.ಎ.ಟಿ.ಎಸ್.ನಲ್ಲಿ ಅಪ್ಲೋಡ್ ಮಾಡುವುದು.
* 9ನೇ ತರಗತಿಯ ಸಂಕಲನಾತ್ಮಕ ಮೌಲ್ಯಮಾಪನ-2ರಲ್ಲಿ (SA-2) ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಮಾಡುವಂತಿಲ್ಲ (NO Detention) ಹಾಗೂ ಫಲಿತಾಂಶವನ್ನು ಸಂಬಂಧಿಸಿದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾತ್ರ ನೀಡುವುದು.
* 11ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣರಾದಲ್ಲಿ ಪೂರಕ ಪರೀಕ್ಷೆಯನ್ನು ಆಯಾ ಕಾಲೇಜು ಹಂತದಲ್ಲಿ ನಡೆಸುವುದು.
* 9ನೇ ತರಗತಿಯ ಸಂಕಲನಾತ್ಮಕ ಮೌಲ್ಯಮಾಪನ-2ಕ್ಕೆ (SA-2) ತಗಲುವ ವೆಚ್ಚವನ್ನು ಪ್ರಸಕ್ತ ವರ್ಷಕ್ಕೆ ಮಾತ್ರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಲ್ಲಿ ಲಭ್ಯವಿರುವ ಅನುದಾನದಲ್ಲಿ ಭರಿಸಲು ಅನುಮತಿ ನೀಡಲಾಗಿದೆ.
* 11ನೇ ತರಗತಿಯ ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ರಚನೆ ಮತ್ತು ಡಿ.ಟಿ.ಪಿ ಕಾರ್ಯಕ್ಕೆ ತಗಲುವ ವೆಚ್ಚವನ್ನು ಪ್ರಸಕ್ತ ವರ್ಷಕ್ಕೆ ಮಾತ್ರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಲ್ಲಿ ಲಭ್ಯವಿರುವ ಅನುದಾನದಲ್ಲಿ ಭರಿಸಲು ಅನುಮತಿಸಿದೆ.
2023-24ನೇ ಸಾಲಿನಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸುವ ನಿಟ್ಟಿನಲ್ಲಿ ವಿವಿಧ ಪ್ರಾಧಿಕಾರಗಳು ನಿರ್ವಹಿಸಬೇಕಾದ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ವಿವರಿಸಲಾಗಿದೆ. ಅದರಂತೆ ತಪ್ಪದೇ ಕ್ರಮವಹಿಸಲು ಸಂಬಂಧಪಟ್ಟ ಪ್ರಾಧಿಕಾರಿಗಳಿಗೆ ಸೂಚಿಸಿದೆ ಎಂದು ಆದೇಶ ಹೇಳಿದೆ.












Click it and Unblock the Notifications