ಎಸ್‌ಎಸ್‌ಎಲ್‌ಸಿ-ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಕೊಟ್ಟ ಸಚಿವ ಮಧು ಬಂಗಾರಪ್ಪ
ಮುಂಬರುವ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪರೀಕ್ಷಾ ಪ್ರಕ್ರಿಯೆ, ಭದ್ರತೆ ಮತ್ತು ವಿದ್ಯಾರ್ಥಿಗಳ ಆತಂಕ ದೂರ ಮಾಡುವ ಕುರಿತು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಭದ್ರತೆ ಹೆಚ್ಚಳ
ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆಯಲ್ಲಿ ಯಾವುದೇ ರೀತಿಯ ಲೋಪದೋಷವಾಗದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ, ಎಸ್‌ಪಿ ಅವರಿಗೆ ಪೂರ್ಣ ಜವಾಬ್ದಾರಿ ನೀಡಲಾಗಿದೆ. ಕಳೆದ ವರ್ಷ ಮಂಡ್ಯದಲ್ಲಿ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ ಹಾಗೆ ಈ ಬಾರಿಯೂ ಎಲ್ಲ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ
ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ಹಾಲ್‌ಟಿಕೆಟ್ ತೋರಿಸಿದರೆ ಬಿಎಂಟಿಸಿ ಮತ್ತು ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿದೆ. ಬಸ್‌ಗಳ ಲಭ್ಯತೆ ಮತ್ತು ಸಮಯದ ಬಗ್ಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳ ಬಳಕೆ: ಪ್ರಶ್ನೆ ಪತ್ರಿಕೆಗಳ ಸ್ವರೂಪದ ಬಗ್ಗೆ ಮಾಹಿತಿ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಗುರುತಿಸಿ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಈ ತರಬೇತಿಯು ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಸಹಾಯ ಮಾಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಗಣಿತ ಮತ್ತು ವಿಜ್ಞಾನದ ಭಯ
ಅನೇಕ ವಿದ್ಯಾರ್ಥಿಗಳಿಗೆ ಗಣಿತ ಅಥವಾ ವಿಜ್ಞಾನ ವಿಷಯಗಳ ಬಗ್ಗೆ ಇರುವ ಆತಂಕವನ್ನು ಗುರುತಿಸಿ ಅಂತಹ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ. ಕೇವಲ ಎರಡರಿಂದ ಮೂರು ಅಂಕಗಳ ವ್ಯತ್ಯಾಸದಲ್ಲಿ ಫೇಲ್ ಆಗುವ ಭೀತಿ ಇರುವವರನ್ನು ಗುರುತಿಸಿ ಅವರಿಗೆ ವಿಶೇಷ ಸಹಕಾರ ನೀಡಲು ಇಲಾಖೆ ಮುಂದಾಗಿದೆ. ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಆತಂಕ ಅಥವಾ ಗೊಂದಲಗಳನ್ನು ಪರಿಹರಿಸಲು ಸಚಿವರು ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಮೊದಲೇ ಅರಿತಿರುವುದರಿಂದ ಕರೆಗಳ ಸಂಖ್ಯೆ ಕಡಿಮೆಯಾಗುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ಸಹಾಯವಾಣಿ ಸಂಖ್ಯೆಗಳು:
080 - 23310075
080 - 23310076
"ಯುದ್ಧಕಾಲೇ ಶಸ್ತ್ರಾಭ್ಯಾಸ" ಎನ್ನುವಂತೆ ಕೊನೆಯ ಕ್ಷಣದ ಒತ್ತಡಕ್ಕೆ ಒಳಗಾಗದೆ ವಿದ್ಯಾರ್ಥಿಗಳು ಧೈರ್ಯವಾಗಿ ಪರೀಕ್ಷೆ ಬರೆಯಬೇಕು. ಪಿಯುಸಿ ಪರೀಕ್ಷೆಗಳು ಇನ್ನು ಹತ್ತು ದಿನಗಳಲ್ಲಿ ಶುರುವಾಗಲಿದ್ದು ಎಲ್ಲ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದ್ದಾರೆ.












Click it and Unblock the Notifications