Breaking: ಕರ್ನಾಟಕದಲ್ಲಿ 2 ದಿನ ಭಾರೀ ಮಳೆ, ರೆಡ್ ಅಲರ್ಟ್
ಬೆಂಗಳೂರು ಆಗಸ್ಟ್ 05: ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಭಾರೀ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ಶನಿವಾರ ಮತ್ತು ಭಾನುವಾರ ಧಾರಾಕಾರ ಮಳೆಯಾಗಲಿದೆ. ಈ ಪೈಕಿ ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು ಶಿವಮೊಗ್ಗಕ್ಕೆ ಶನಿವಾರ ರೆಡ್ ಅಲರ್ಟ್ ನೀಡಲಾಗಿದೆ. ಮರುದಿನ ಅದೇ ಮೂರು ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಕೊಡಲಾಗಿದೆ ಎಂದು ರಾಜ್ಯ ಹವಾಮಾನ ತಜ್ಞರು ತಿಳಿಸಿದ್ದಾರೆ
ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಚುರುಕಾಗಿದ್ದ ವರುಣ ಇದೀಗ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಆರ್ಭಟಿಸಲಿದ್ದಾನೆ. ಕಾರಣದಿಂದ ಮುಂದಿನ 48 ಗಂಟೆ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಭಾರಿ ಮಳೆ ಸುರಿಯಲಿದೆ.

ಈ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಎಚ್ಚರಿಕೆ ನೀಡಲಾಗಿದೆ. ಇದೇ ವೇಳೆ ಉಳಿದ ಜಿಲ್ಲೆಗಳಾದ ಕೊಪ್ಪಳ ಮತ್ತು ಬಾಗಲಕೋಟೆಗೆ ಸಾಧಾರಣದಿಂದ ಭಾರೀ ಮಳೆ ಬರಲಿದೆ ಎಂದು ಅಂದಾಜಿಸಲಾಗಿದೆ.
ಇನ್ನು ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಿಗೆ ಶನಿವಾರ 'ಆರೆಂಜ್ ಅಲರ್ಟ್' ಮರುದಿನ ಭಾನುವಾರು ಆ ಜಿಲ್ಲೆಗಳನ್ನು ಸೇರಿದಂತೆ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರಕ್ಕೆ 'ಯೆಲ್ಲೋ ಅಲರ್ಟ್' ಕೊಡಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
Recommended Video
ರಾಜ್ಯದಲ್ಲಿ ಸೋಮವಾರದಿಂದ ಮಳೆ ಕಡಿಮೆಯಾಗುವ ಲಕ್ಷಣಗಳು ಕಂಡು ಬಂದಿದ್ದು, ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆಗಳು ಇವೆ. ಸೋಮವಾರದವರೆಗೆ ಕರಾವಳಿ ಸಮುದ್ರ ತೀರ ಪ್ರದೇಶದಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ ಸುಮಾರು 60ಕಿ. ಮೀ. ವೇಗದಲ್ಲಿ ಬೀಸಲಿದೆ. ಹೀಗಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.












Click it and Unblock the Notifications