ಕಬ್ಬು ಬೆಳೆ ನಿಗದಿಗೆ ರೈತರ ಆಗ್ರಹ: ಪಿಎಂ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ರೈತರು ಉಗ್ರ ಹೋರಾಟ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ರೈತರ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆಯು ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ಇಂದು 9ನೇ ದಿನಕ್ಕೆ ಕಾಲಿಟ್ಟಿದೆ. ರೈತರು ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ನಿಗದಿಮಾಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೇ ಕಬ್ಬು ಬೆಳೆಗಾರರು ಬೆಳಗಾವಿಯ ವಿವಿಧ ತಾಲ್ಲೂಕುಗಳಲ್ಲಿ ಸರ್ಕಾರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಈ ರೀತಿ ಇರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿದ್ದಾರೆ.
ಪ್ರಧಾನಿ ಮೋದಿಗೆ ಸಿಎಂ ಸಿದ್ದು ಪತ್ರ
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದು, ಮಧ್ಯಪ್ರವೇಶ ಮಾಡುವಂತೆ ಮನವಿ ಮಾಡಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಅದರಲ್ಲೂ ಬೆಳಗಾವಿ, ಬಾಗಲಕೋಟೆ, ವಿಜಯಪುರ, ವಿಜಯನಗರ, ಬೀದರ್, ಬಾಗಲಕೋಟೆ, ಗದಗ, ಹುಬ್ಬಳ್ಳಿ-ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪಕ್ಕೆ ತಿರುಗಿದೆ. ಈ ಗಂಭೀರ ಸಮಸ್ಯೆಯ ಕುರಿತು ನಿಮ್ಮೊಂದಿಗೆ ಚರ್ಚಿಸಲು ತುರ್ತು ಅವಕಾಶ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಚರ್ಚಿಸಿ ಸಂಧಾನಕ್ಕೆ ರಾಜ್ಯ ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ. ಆದರೆ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ಕಟಾವು ಮತ್ತು ಸಾರಿಗೆ ವೆಚ್ಚಗಳನ್ನು ಕಡಿತಗೊಳಿಸಿದ ನಂತರ ರೈತರಿಗೆ ಸಿಗುವ ಲಾಭ ಕಡಿಮೆ ಆಗಿದ್ದು, ಪ್ರತಿ ಟನ್‌ಗೆ 800 ರಿಂದ 900 ರೂ. ವರೆಗೆ ವೆಚ್ಚ ಆಗುತ್ತಿದೆ. ರೈತರಿಗೆ ಸಿಗುತ್ತಿರುವ ಮೊತ್ತವು ಕೇವಲ ಪ್ರತಿ ಟನ್‌ಗೆ 2,600 ರಿಂದ 3 ಸಾವಿರ ರೂಪಾಯಿ ಮಾತ್ರ. ಹೀಗಾಗಿ ಕೇಂದ್ರ ಸರ್ಕಾರವು ರೈತರ ನೆರವಿಗೆ ಬರಬೇಕು ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಕಬ್ಬು ತೂಕ, ಇಳುವರಿ, ಕಟಾವು ಮತ್ತು ಬಿಲ್ ಪಾವತಿಗಳಿಗೆ ಸಂಬಂಧಪಟ್ಟಂತೆ ಪರಿಶೀಲನೆಗೆ ಸಮಿತಿಗಳನ್ನು ರಚನೆ ಮಾಡಲಾಗಿದೆ. ಸರ್ಕಾರವು ಎಪಿಎಂಸಿಗಳಲ್ಲಿ ಸ್ಥಾಪಿಸಿರುವ ತೂಕದ ಯಂತ್ರಗಳಲ್ಲಿ ಉಚಿತವಾಗಿ ತೂಕ ಮಾಡಿಕೊಡುವ ವ್ಯವಸ್ಥೆ ಮಾಡಿದ್ದೇವೆ. ಈ ಕ್ರಮಗಳ ಹೊರತಾಗಿಯೂ, ರೈತರು ಅತೃಪ್ತರಾಗಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ ಎಂದೂ ಸಿಎಂ ಸಿದ್ದರಾಮಯ್ಯ ಅವರು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ನಿವ್ವಳ 3, 500 ರೂಪಾಯಿ ಬೆಂಬಲ ಬೆಲೆ ಕೊಡುವಂತೆ ಮನವಿ
ರೈತರು ಕಾಲಮಿತಿಯೊಳಗೆ ಪ್ರತಿ ಟನ್ ಕಬ್ಬಿಗೆ ನ್ಯಾಯಸಮ್ಮತ ಮತ್ತು ಲಾಭದಾಯಕ ದರ (ಎಫ್‌ಆರ್‌ಪಿ) ನಿವ್ವಳ 3,500 ರೂಪಾಯಿ ಕೊಡುವಂತೆ ಕೇಳುತ್ತಿದ್ದಾರೆ. ರೈತರು ನ್ಯಾಯಯುತ, ಪಾರದರ್ಶಕ ಮತ್ತು ಜಾರಿಗೊಳಿಸಬಹುದಾದ ಬೆಲೆ ನಿಗದಿ ವಿಧಾನಕ್ಕೆ ಆಗ್ರಹಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಕೂಡಲೇ ಪ್ರತಿ ಟನ್ ಕಬ್ಬಿಗೆ ನಿವ್ವಳ 3,500 ರೂಪಾಯಿ ಕೊಡಬೇಕು. ಅಲ್ಲದೇ ರಿಕವರಿ ಪ್ರಮಾಣವನ್ನು ಇಳಿಸುವುದು, ಎಫ್.ಆರ್.ಪಿ. ದರ ಪರಿಷ್ಕರಿಸುವುದು, ಬಾಕಿ ಶೀಘ್ರ ಪಾವತಿ, ಸಕ್ಕರೆ ರಫ್ತು, ಎಥನಾಲ್ ಖರೀದಿ ಪ್ರಮಾಣ ಹೆಚ್ಚಳಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು ಎಂದೂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.
2025 ಮತ್ತು 2026 ಹಂಗಾಮಿಗೆ ಕೇಂದ್ರ ಸರ್ಕಾರ ನಿಗದಿಪಡಿಸಿದ್ದ ನ್ಯಾಯಸಮ್ಮತ ಮತ್ತು ಲಾಭದಾಯಕ ದರ (ಎಫ್‌ಆರ್‌ಪಿ) ಕ್ವಿಂಟಲ್‌ಗೆ 355 ರೂಪಾಯಿ (ಪ್ರತಿ ಟನ್‌ಗೆ 23,550) ಆಗಿದ್ದು, ರಿಕವರಿ ದರ 10.25% ಆಗಿದೆ. ಆದರೆ ಪ್ರತಿ ಟನ್‌ಗೆ 800 ರಿಂದ 900 ರೂ. ರವರೆಗೆ ಕಟಾವು ಮತ್ತು ಸಾಗಣೆ ವೆಚ್ಚ ಕಡಿತಗೊಳಿಸಿದ ನಂತರ, ರೈತರಿಗೆ ಪ್ರತಿ ಟನ್‌ಗೆ ಸಿಗುವುದು ಕೇವಲ 2,600-3,000 ಮಾತ್ರ. ಅಲ್ಲದೆ ರಸಗೊಬ್ಬರ, ಕೂಲಿ, ನೀರಾವರಿ ಮತ್ತು ಸಾರಿಗೆ ವೆಚ್ಚಗಳಲ್ಲಿನ ತೀವ್ರ ಹೆಚ್ಚಳದಿಂದಾಗಿ ರೈತರು ನಷ್ಟ ಎದುರಿಸುವಂತಾಗಿದೆ ಎಂದಿದ್ದಾರೆ.












Click it and Unblock the Notifications