ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ವಿರುದ್ಧ ಎಫ್‌ಐಆರ್
ಬೆಂಗಳೂರು, ಜನವರಿ 21 : ಕಂಪ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಜೆ.ಎನ್.ಗಣೇಶ್ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪವನ್ನು ಅವರು ಎದುರಿಸುತ್ತಿದ್ದಾರೆ.
ಸೋಮವಾರ ರಾಮನಗರ ಜಿಲ್ಲೆಯ ಬಿಡದಿ ಪೊಲೀಸರು ಜೆ.ಎನ್.ಗಣೇಶ್ ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಆನಂದ್ ಸಿಂಗ್ ಹೇಳಿಕೆ ದಾಖಲು ಮಾಡಿಕೊಂಡ ಬಳಿಕ ಎಫ್‌ಐಆರ್ ದಾಖಲು ಮಾಡಲಾಗಿದೆ.
ಜನವರಿ 19ರ ಶನಿವಾರ ರಾತ್ರಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಮತ್ತು ಆನಂದ್ ಸಿಂಗ್ ನಡುವೆ ಈಗಲ್ಟನ್ ರೆಸಾರ್ಟ್‌ನಲ್ಲಿ ಹೊಡೆದಾಟ ನಡೆದಿತ್ತು. ಜನವರಿ 20ರ ಭಾನುವಾರ ಬೆಳಗ್ಗೆ ಆನಂದ್ ಸಿಂಗ್ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆನಂದ್ ಸಿಂಗ್ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಘಟನೆ ನಡೆದಿರುವುದು ರಾಮನಗರ ಜಿಲ್ಲೆಗೆ ಸೇರುವ ಬಿಡದಿ ಠಾಣೆ ವ್ಯಾಪ್ತಿಯಲ್ಲಿ. ಆದ್ದರಿಂದ ಬಿಡದಿ ಪೊಲೀಸರು ಶಾಸಕರ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ.

ಯಾವ-ಯಾವ ಪ್ರಕರಣಗಳು
ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜೆ.ಎನ್.ಗಣೇಶ್ ಮೊದಲ ಆರೋಪಿಯಾಗಿದ್ದಾರೆ. ಐಪಿಸಿ ಸೆಕ್ಷನ್ 323, 324, 307, 504 ಹಾಗೂ 506ರ ಅಡಿ ಪ್ರಕರಣವನ್ನು ಪೊಲೀಸರು ದಾಖಲು ಮಾಡಿದ್ದಾರೆ. ಮಾರಣಾಂತಿಕ ಹಲ್ಲೆ ನಡೆಸಿದ್ದರಿಂದ ಕೊಲೆ ಯತ್ನ ಪ್ರಕರಣ ದಾಖಲು ಮಾಡಲಾಗಿದೆ.

ವಿಚಾರಣೆ ಸಾಧ್ಯತೆ
ಎಫ್‌ಐಆರ್ ದಾಖಲಾದರೂ ಜೆ.ಎನ್.ಗಣೇಶ್ ಅವರನ್ನು ಬಂಧಿಸುವ ಸಾಧ್ಯತೆ ಕಡಿಮೆ ಇದೆ. ಶಾಸಕರ ವಿರುದ್ಧ 323 (ಹಲ್ಲೆ), 324 (ದೊಣ್ಣೆಯಿಂದ ಹಲ್ಲೆ), 307 (ಕೊಲೆಯತ್ನ), 504 (ಉದ್ದೇಶ ಪೂರ್ವಕ ಶಾಂತಿ ಕದಡುವುದು), 506 (ಜೀವ ಬೆದರಿಕೆ) ಪ್ರಕರಣಗಳನ್ನು ದಾಖಲಿಸಲಾಗಿದೆ. ಶಾಸರಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಜೆ.ಎನ್.ಗಣೇಶ್ ಅಮಾನತು
ಮತ್ತೊಂದು ಕಡೆ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಆದೇಶದ ಮೇರೆಗೆ ಜೆ.ಎನ್.ಗಣೇಶ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಲು ವಿಚಾರಣಾ ಸಮಿತಿ ರಚನೆ ಮಾಡಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ
ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಆನಂದ್ ಸಿಂಗ್ ಹೇಳಿಕೆ ಪಡೆದುಕೊಂಡ ಬಳಿಕ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ. ಘಟನೆಯನ್ನು ಪ್ರತ್ಯಕ್ಷವಾಗಿ ಕಂಡ ಇತರ ಶಾಸಕರ ಹೇಳಿಕೆಗಳನ್ನು ಸಂಗ್ರಹ ಮಾಡುವ ಸಾಧ್ಯತೆ ಇದೆ.












Click it and Unblock the Notifications