ಮೊದಲು ನೀರು ಕೊಟ್ಟು ಆಮೇಲೆ ಚುನಾವಣಾ ಪ್ರಚಾರಕ್ಕೆ ಬನ್ನಿ
ಬೆಂಗಳೂರು, ಮಾರ್ಚ್ 24: ಕರ್ನಾಟಕದಲ್ಲಿ ಭೀಕರ ಬರದ ಛಾಯೆ ಆವರಿಸಿದೆ. ಸುಡುವ ಬಿಸಿಲಿನ ನಡುವೆಯೇ ಲೋಕಸಭೆ ಚುನಾವಣೆ 2024 ವೇಳಾಪಟ್ಟಿ ಪ್ರಕಟವಾಗಿದೆ. 28 ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ.
ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಇಂತಹ ಸಮಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯದಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಧ್ವನಿ ಎತ್ತಿದೆ.

ಈ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಅಧ್ಯಕ್ಷ ಟಿ. ಎ. ನಾರಾಯಣ ಗೌಡ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಈ ಪ್ರಕಟಣೆಯಲ್ಲಿ ಮೊದಲು ನೀರು ಕೊಟ್ಟು ಆಮೇಲೆ ಚುನಾವಣಾ ಪ್ರಚಾರಕ್ಕೆ ಬನ್ನಿ ಎಂದು ತಿಳಿಸಲಾಗಿದೆ.
ರಕ್ಷಣಾ ವೇದಿಕೆ ಆಗ್ರಹವೇನು?; ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಗಳಲ್ಲಿ ತೀವ್ರ ಬರಗಾಲದಿಂದ ಹನಿ ನೀರಿಗೂ ಜನರು ಪರದಾಡುತ್ತಿರುವಾಗ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿವೆ. ಮೊದಲು ಜನರಿಗೆ ನೀರು ಕೊಡಿ, ಆಮೇಲೆ ನಿಮ್ಮ ಪ್ರಚಾರ ಮಾಡಿಕೊಳ್ಳಿ, ಇಲ್ಲದೇ ಹೋದಲ್ಲಿ ಈ ಭಾಗದಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ, ಯಾದಗಿರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬರ ತಾಂಡವವಾಡುತ್ತಿದೆ. ನದಿ, ಕೆರೆ, ಹಳ್ಳ, ಬಾವಿಗಳು ಬತ್ತಿಹೋಗಿವೆ. ಜನರಿಗೆ ಕುಡಿಯಲು ನೀರಿಲ್ಲ, ಜಾನುವಾರುಗಳಿಗೂ ನೀರು, ಮೇವು ಇಲ್ಲ. ಇಂಥ ಸನ್ನಿವೇಶದಲ್ಲಿ ನಮ್ಮ ಜನಪ್ರತಿನಿಧಿಗಳು ಮೊದಲು ಜನರ ಕಣ್ಣೀರು ಒರೆಸುವ ಕೆಲಸ ಮಾಡಬೇಕು ಎಂದು ರಕ್ಷಣಾ ವೇದಿಕೆ ಒತ್ತಾಯಿಸಿದೆ.
ಬಚಾವತ್ ಆಯೋಗದ ತೀರ್ಪಿನ ಪ್ರಕಾರ ಮಹಾರಾಷ್ಟ್ರ ಸರ್ಕಾರ ರಾಜ್ಯದ ಪಾಲಿನ 15 ಟಿಎಂಸಿ ನೀರು ಕೊಟ್ಟಿಲ್ಲ. ಮಹಾರಾಷ್ಟ್ರದ ಜಲಾಶಯಗಳಲ್ಲಿ ನೀರಿದ್ದರೂ ಕೂಡ ನೀರು ಬಿಡುತ್ತಿಲ್ಲ. ಇಂಥ ಸಂದರ್ಭದಲ್ಲಿ ನಮ್ಮ ರಾಜ್ಯದ ಎಲ್ಲ ಪಕ್ಷಗಳ ನಾಯಕರೂ ಒಂದಾಗಿ ಮಹಾರಾಷ್ಟ್ರ ಸರ್ಕಾರದ ಮೇಲೆ ಒತ್ತಡ ಹೇರಿ, ನೀರು ಬಿಡುಗಡೆಯಾಗುವಂತೆ ನೋಡಬೇಕಿತ್ತು. ಆದರೆ ಆ ಕೆಲಸ ಆಗುತ್ತಿಲ್ಲ.
ಮಹಾರಾಷ್ಟ್ರದ ಕೊಯ್ಯಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಹಾಗು ಉಜ್ಜಿನಿ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರು ಬಿಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರಿಗೆ ಪತ್ರ ಬರೆದಿದ್ದಾರೆ. ಆದರೆ ಮಹಾರಾಷ್ಟ್ರ ಇದಕ್ಕೆ ಸ್ಪಂದಿಸುತ್ತಿಲ್ಲ ಎಂದು ಕರವೇ ಆರೋಪಿಸಿದೆ.
ಈ ಜಿಲ್ಲೆಗಳನ್ನು ಪ್ರತಿನಿಧಿಸುವ ಸಂಸತ್ ಸದಸ್ಯರಿಗೆ ಬಾಯಿ ಇಲ್ಲದಂತಾಗಿದೆ. ಅವರೆಲ್ಲ ಈಗ ಲೋಕಸಭಾ ಚುನಾವಣೆಯ ತಯಾರಿಯಲ್ಲಿ ತೊಡಗಿದ್ದಾರೆ. ರಾಜಕೀಯ ಪಕ್ಷಗಳ ಉನ್ನತ ನಾಯಕರು ಈ ಭಾಗದಿಂದಲೇ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಆದರೆ ಜನರ ಕುಡಿಯುವ ನೀರಿನ ಬವಣೆಯ ಕುರಿತು ಚಕಾರ ಎತ್ತುತ್ತಿಲ್ಲ.
ಇದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಒಂದಾಗಿ ಮೊದಲು ಈ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು. ಮಹಾರಾಷ್ಟ್ರದಿಂದ ನಮಗೆ ಬರಬೇಕಾಗಿರುವ ನೀರು ಬರುವಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜಕಾರಣಿಗಳು ಚುನಾವಣಾ ಪ್ರಚಾರಕ್ಕೆ ಬರದಂತೆ ತಡೆಯಬೇಕಾಗುತ್ತದೆ ಎಂದು ಎಚ್ಚರಿಸಿದೆ.
2023ನೇ ಸಾಲಿನಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದಲ್ಲಿ ಭೀಕರ ಬರ ಉಂಟಾಗಿದೆ. ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಜನರಿಗೆ ಕುಡಿಯುವ ನೀರು ಪೂರೈಕೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸರ್ಕಾರ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.
ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020 ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡ, ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿ ಸಮೀಕ್ಷೆಯ (Ground Truthing) ವರದಿಯನ್ವಯ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ 223 ತಾಲ್ಲೂಕುಗಳನ್ನು ಬರ ಪಿಡೀತ ತಾಲ್ಲೂಗಳೆಂದು ಸರ್ಕಾರವು ಘೋಷಣೆ ಮಾಡಿದೆ.












Click it and Unblock the Notifications