ಪ್ರವಾಹ; ಕಾಳಜಿ ಕೇಂದ್ರದಲ್ಲಿ ಕೋವಿಡ್ ಲಸಿಕೆ ಅಭಿಯಾನ
ಬೆಂಗಳೂರು, ಜುಲೈ 28; ಕಳೆದ ವಾರದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಕಾರಣ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಲಾವೃತ ಪ್ರದೇಶಗಳಲ್ಲಿ ಸಿಲುಕಿದ್ದ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.
ಆರೋಗ್ಯ ಇಲಾಖೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆಯೊಂದನ್ನು ಕಳಿಸಿದೆ. ನೆರೆಹಾವಳಿಗೆ ತುತ್ತಾದ ಜಿಲ್ಲೆಗಳ ಕಾಳಜಿ ಕೇಂದ್ರದ ನಿವಾಸಿಗಳಿಗೆ ಕೋವಿಡ್-19 ಪರೀಕ್ಷೆ ಮತ್ತು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ನಡೆಸಬೇಕು ಎಂದು ಸೂಚಿಸಲಾಗಿದೆ.
ಕಾಳಜಿ ಕೇಂದ್ರಗಳಲ್ಲಿರುವ ಜನರು ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ಸೂಚಿಸುವುದು ಮತ್ತು ಅದು ಪಾಲನೆಯಾಗುತ್ತಿರುವ ಕುರಿತು ಮೇಲ್ವಿಚಾರಣೆ ನಡೆಸಬೇಕು ಎಂದು ತಿಳಿಸಲಾಗಿದೆ.

ಯಾವುದೇ ವ್ಯಕ್ತಿಗೆ ಕೋವಿಡ್‌ನ ಲಕ್ಷಣಗಳು ಕಂಡು ಬಂದರೆ ಕೋವಿಡ್ ಪರೀಕ್ಷೆ ಮಾಡಿಸಬೇಕು. ಕಾಳಜಿ ಕೇಂದ್ರದಲ್ಲಿ ಎಲ್ಲಿರಿಗೂ ಲಸಿಕೆ ನೀಡಲು ಅಗತ್ಯವಾದ ಕ್ರಮವನ್ನು ಕೈಗೊಳ್ಳಬೇಕು ಎಂದು ಸುತ್ತೋಲೆ ಹೇಳಿದೆ.
ಅನುಭವಿ ಮತ್ತು ತರಬೇತಿ ಪಡೆದ ವೈದ್ಯರ ನೇತೃತ್ವದಲ್ಲಿ ಕಾಳಜಿ ಕೇಂದ್ರದಲ್ಲಿ ಲಸಿಕಾಕರಣ ಅಭಿಯಾನ ನಡೆಸಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ ಲಸಿಕೆ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ.
ಲಸಿಕಾ ಕೇಂದ್ರದಲ್ಲಿ ಪಿಪಿಐ ಕಿಟ್, ಮಾಸ್ಕ್ ಲಭ್ಯವಿರುವಂತೆ ಜಿಲ್ಲಾಡಳಿತ ನೋಡಿಕೊಳ್ಳಬೇಕು. ಕೇಂದ್ರದಲ್ಲಿರುವ ಮಕ್ಕಳು, ಗರ್ಭಿಣಿ ಮಹಿಳೆಯರ ಆರೋಗ್ಯದ ಬಗ್ಗೆಯೂ ಗಮನಹರಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ.
ಭಾರೀ ಮಳೆಯ ಕಾರಣ ಉತ್ತರ ಕನ್ನಡ, ಬೆಳಗಾವಿ, ಕೊಡಗು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಹಲವಾರು ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ.












Click it and Unblock the Notifications