ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನ; ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು?
ಬೆಂಗಳೂರು, ಅಕ್ಟೋಬರ್ 23: ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಕುಮಾರ್ ತಮ್ಮ ಆಭರಣದಲ್ಲಿ ಹುಲಿಯ ಉಗುರುಗಳನ್ನು ಹಾಕಿಕೊಂಡಿದ್ದಾರೆ ಅಂತ ದೂರಿನ ಆಧಾರದ ಮೇಲೆ ಬಂಧಿಸಿದ್ದು, ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಟಿವಿಯಲ್ಲಿ ಪ್ರಸಾರವಾಗುತ್ತಿರುವ ರಿಯಾಲಿಟಿ ಶೋ ಬಿಗ್ ಬಾಸ್ ನಲ್ಲಿ ಹುಲಿಯ ಉಗುರಿನ ಸರ ಧರಿಸಿದ ವ್ಯಕ್ತಿಯಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತಿದೆ. ಇದು ಅಪರಾಧ. ಅರಣ್ಯ ಅಧಿಕಾರಿಗಳು ಅವರನ್ನು ಬಂಧಿಸುವ ಕಾರ್ಯ ಮಾಡಿದ್ದಾರೆ. ಕಾನೂನಿನ ಪ್ರಕಾರ ವನ್ಯಜೀವಿ ಸಂರಕ್ಷಣೆ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ.

ಕಾನೂನು ಅಡಿಯಲ್ಲಿ ಯಾರೇ ಆದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಕುಮಾರ್ ತಮ್ಮ ಆಭರಣದಲ್ಲಿ ಹುಲಿಯ ಉಗುರುಗಳನ್ನು ಹಾಕಿಕೊಂಡಿದ್ದಾರೆ ಅಂತ ದೂರು ಬಂದಿದೆ. ನಮ್ಮ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿದ್ದಾರೆ. ವನ್ಯಜೀವಿ ಸಂರಕ್ಷಣೆ ಕಾಯ್ದೆ ಅಡಿ ಕಾನೂನಿನ ಕ್ರಮ ಜರುಗಿಸಿದ್ದಾರೆ. ಈ ವಿಚಾರದ ಬಗ್ಗೆ ನಿನ್ನೆ ನಮ್ಮ ಅಧಿಕಾರಿಗಳು ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾನೂನು ರೀತಿಯ ಕ್ರಮ ಜರುಗಿಸಲು ನಾನು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ವರ್ತೂರ್ ಸಂತೋಷ್ ಬಂಧನವಾಗಿದ್ದು, ಈ ಬಗ್ಗೆ ಸಂಪೂರ್ಣವಾಗಿ ಅಧಿಕಾರಿಗಳು ತನಿಖೆ ಮಾಡುತ್ತಾರೆ, ಕಾನೂನು ರೀತಿಯ ಕ್ರಮ ತೆಗೆದುಕೊಳ್ತಾರೆ. ಇನ್ನೂ ಈ ಪ್ರಕರಣದ ಹಿಂದೆ ಯಾರೇ ಇದ್ದರೂ ಅವರ ವಿರುದ್ಧ ಕಠಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇನ್ನೂ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಹಾಗೂ ರಾಷ್ಟ್ರದಲ್ಲಿ ಅರಣ್ಯ, ವನ್ಯಜೀವಿ, ಪರಿಸರ ಸಂರಕ್ಷಣೆ ಕಾಯ್ದೆ ಇದೆ. ಇವೆಲ್ಲಾ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಕೆಲಸ ನಾವೇಲ್ಲಾ ಮಾಡಬೇಕಿದೆ. ವನ್ಯಜೀವಿಗಳ ಸಂರಕ್ಷಣೆ ಮಾಡಬೇಕಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರ ಕಾನೂನು ಕ್ರಮ ಪಾಲಿಸುತ್ತದೆ. ಹಲವು ಕಡೆ ಇನ್ನು ಕಳ್ಳ ಭೇಟೆ ನಡೆಯುತ್ತದೆ ಅನ್ನೋ ಮಾಹಿತಿ ಇದೆ. ಮೊನ್ನೆಯಷ್ಟೇ ದಾಂಡೇಲಿಯಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಈಗ ಕಾಡು ಪ್ರಾಣಿಗಳ ಬೇಟೆ ಸಾಕಷ್ಟು ಕಡಿಮೆಯಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.












Click it and Unblock the Notifications