ಕೋವಿಡ್ ಅವ್ಯವಹಾರ ತನಿಖೆಗೆ SIT ಹಾಗೂ ಸಂಪುಟ ಉಪಸಮಿತಿ: ಕ್ಯಾಬಿನೆಟ್‌ನಲ್ಲಿ ತಿರ್ಮಾನ
ಬೆಂಗಳೂರು, ಅಕ್ಟೋಬರ್ 10: ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ) ರಾಜ್ಯ ಸಚಿವ ಸಂಪುಟ ಇಂದು(ಗುರುವಾರ) ನಿರ್ಧರಿಸಿದೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನ ತೆಗೆದುಕೊಳ್ಳಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ ರವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಸತ್ಯಸಂಶೋಧನಾ ವರದಿಯ ನಂತರ ಯಾರ ಪಾತ್ರ ಏನು ಎಂಬುದನ್ನು ತನಿಖೆ ಮಾಡಿ ಎಸ್.ಐ.ಟಿ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಕುನ್ಹಾ ಆಯೋಗವು 11 ಸಂಪುಟಗಳಲ್ಲಿ ವರದಿ ಸಲ್ಲಿಸಿದ್ದು, ರೂ.7223.64 ಕೋಟಿಗಳ ಮೊತ್ತದ ವೈದ್ಯಕೀಯ ಉಪಕರಣಗಳ ಖರೀದಿಯ ಅವ್ಯವಹಾರದ ಕುರಿತು ತನಿಖೆ ನಡೆಸಿದೆ. ರೂ.500.00 ಕೋಟಿಗಳ ಮೊತ್ತದ ವಸೂಲಾತಿ ಶಿಫಾರಸ್ಸು ಮಾಡಿದೆ. ಬಿ.ಬಿ.ಎಂ.ಪಿ 4 ವಲಯಗಳ ಮತ್ತು ರಾಜ್ಯದ ಎಲ್ಲಾ 31 ಜಿಲ್ಲೆಗಳ ವರದಿ ಸಲ್ಲಿಕೆ ಬಾಕಿಯಿದೆ. 55000 ಕಡತಗಳನ್ನು ಸಂಬಂಧಪಟ್ಟ ಇಲಾಖೆಗಳಿಂದ ಪಡೆದು ಪರಿಶೀಲಿಸಿ ಆಯೋಗವು ವರದಿ ಸಲ್ಲಿಸಿದೆ.
ಈ ತನಿಖೆ ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರಂತರವಾಗಿ ಮೇಲ್ವಿಚಾರಣೆ ನಡೆಸಲು ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ಸಚಿವ ಸಂಪುಟದ ಉಪಸಮಿತಿಯ ಸದಸ್ಯರನ್ನು ಅಂತಿಮಗೊಳಿಸಲು ಮುಖ್ಯಮಂತ್ರಿಯವರಿಗೆ ಅಧಿಕಾರ ನೀಡಲಾಗಿದೆ ಎಂದು ಮಾನ್ಯ ಸಚಿವರು ವಿವರಿಸಿದರು.
ರೂ.500.00 ಕೋಟಿಗಳ ಮೊತ್ತದ ವಸೂಲಾತಿ ಕುರಿತು ಪ್ರಕ್ರಿಯೆಯನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ವಿವರಿಸಿದರು. ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಸಾರ್ವಜನಿಕರ ಹಣದ ದುರುಪಯೋಗ ಮತ್ತು ಅಧಿಕಾರ ದುರುಪಯೋಗ ಬಗ್ಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿದ ವರದಿಯನ್ನು ದಿನಾಂಕ: 17.07.2023 ರಂದು 15ನೇ ವಿಧಾನಸಭೆಯಲ್ಲಿ ಮಂಡಿಸಲಾಗಿರುತ್ತದೆ. ಈ ವರದಿಯ ಆಧಾರದ ಮೇಲೆ ಸತ್ಯಸಂಶೋಧನೆ ಮಾಡಿ ವರದಿ ನೀಡಲು ಕುನ್ಹಾ ಆಯೋಗವನ್ನು ನೇಮಿಸಲಾಗಿತ್ತು. ಈ ಆಯೋಗವು 12 ವಿಶ್ಲೇಷಣಾ ವರದಿಗಳನ್ನು ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ ತಿಳಿಸಿದರು.
ಸಣ್ಣ ಕೈಗಾರಿಕೆಗಳ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ರಾಷ್ಟ್ರೀಯ ಸಣ್ಣ ಕೈಗಾರಿಕಾ ನಿಗಮ ಸಂಸ್ಥೆಗೆ ಹಂಚಿಕೆ ಮಾಡಲು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಪೀಣ್ಯ 1ನೇ ಹಂತದಲ್ಲಿರುವ ಕೈಗಾರಿಕಾ ವಸಾಹತುಗಳು ನಿವೇಶನ/ಮಳಿಗೆ ಸಂಖ್ಯೆ ಎ-180ನ್ನು 30 ವರ್ಷಗಳ ಕರಾರು ಅವಧಿಗೆ ವಾರ್ಷಿಕ ರೂ.1/- ಶುಲ್ಕದ ಆಧಾರದ ಮೇಲೆ ನೀಡಲು ತೀರ್ಮಾನಿಸಿದೆ.
ರಾಜ್ಯ ಕಾನೂನು ಆಯೋಗದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕಾನೂನು ಅಯೋಗದ ಹೊಸ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಲು ಮುಖ್ಯಮಂತ್ರಿಯವರಿಗೆ ಅಧಿಕಾರ ನೀಡಲಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರ ಸಚಿವ ಎಚ್.ಕೆ ಪಾಟೀಲ ರವರು ತಿಳಿಸಿದ್ದಾರೆ.












Click it and Unblock the Notifications