ದೇವನಹಳ್ಳಿ: ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ನಿಧನ
ಬೆಂಗಳೂರು, ಏಪ್ರಿಲ್ 15: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನ ಮಾಜಿ ಶಾಸಕ ವೆಂಕಟಸ್ವಾಮಿ (53) ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ವಿಧಿವಶರಾಗಿದ್ದಾರೆ.
ಮಾಜಿ ಶಾಸಕ ವೆಂಕಟಸ್ವಾಮಿಯ ಅವರಿಗೆ ಒಂದೇ ತಿಂಗಳಲ್ಲಿ ಮೂರು ಬಾರಿ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಮೃತರು ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದು, ಸ್ವಗ್ರಾಮ ಸಾದಹಳ್ಳಿಯ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ವೆಂಕಟಸ್ವಾಮಿ ಅವರು 2008ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಮೂಲಕ ಜನರ ಮೆಚ್ಚುಗೆ ಗಳಿಸಿದ್ದ ಅವರು 2013ರ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದರು. ಆದರೆಪಕ್ಷದ ಮುಖಂಡರ ಒಳ ಜಗಳದಿಂದ ಜೆಡಿಎಸ್ ಅಭ್ಯರ್ಥಿ ಪಿಳ್ಯ ಮುನಿಶಾಮಪ್ಪ ಮುಂದೆ ಸೋಲು ಕಂಡಿದ್ದರು.
ಮೊದಲ ಬಾರಿ ಸೋಲು ಕಂಡಿದ್ದ ವೆಂಕಟಸ್ವಾಮಿ ಅವರು ತೆರ ಮರೆಗೆ ಸರಿಯದೇ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿ 2018ರ ಚುನಾವಣೆಯಲ್ಲಿ ಪುನಃ ಸ್ಪರ್ಧಿಸಿದ್ದರು. ಆದರೆ ಜೆಡಿಎಸ್ ಅಭ್ಯರ್ಥಿ ಎಲ್.ಎನ್ ನಾರಾಯಣ ಸ್ವಾಮಿ ವಿರುದ್ಧ ಸುಮಾರು ಹದಿನೇಳು ಸಾವಿರ ಮತಗಳ ಅಂತದಲ್ಲಿ ಸೋಲು ಕಂಡಿದ್ದರು.
ಈ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸಲು ವೆಂಕಟಸ್ವಾಮಿ ಕಾಂಗ್ರೆಸ್ ಪಕ್ಷದ ಟಿಕೆಟ್‍ಗಾಗಿ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಮಾರ್ಚ್ 21 ರಂದು ಪ್ರಚಾರ ಮುಗಿಸಿ ಮನೆಗೆ ಬಂದಾಗ ಅವರಿಗೆ ಮೊದಲ ಬಾರಿಗೆ ಹೃದಯಾಘಾತವಾಗಿತ್ತು. ಬಳಿಕ ಮತ್ತೆ ಎರಡು ಬಾರಿ ಹೃದಯಾಘಾತವಾಗಿದ್ದು, ತಡರಾತ್ರಿ ಎರಡು ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.












Click it and Unblock the Notifications