ಬಿಜೆಪಿಗೆ ಗುಡ್ ಬೈ ಹೇಳಿದ ಲಕ್ಷ್ಮಣ್ ಸವದಿ: ಬೊಮ್ಮಾಯಿ ಕಾಂಗ್ರೆಸ್ ಸೇರುವುದನ್ನು ತಪ್ಪಿಸಿದ್ದೇ ನಾನು ಎಂದ ಮಾಜಿ ಡಿಸಿಎಂ
ಬೆಳಗಾವಿ, ಏಪ್ರಿಲ್ 12: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ( Karnataka Assembly Elections ) ಬಿಜೆಪಿ ( BJP ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಕೇಸರಿ ಪಾಳಯದಲ್ಲಿ ಬಂಡಾಯದ ಬೆಂಕಿ ಹೊತ್ತಿಕೊಂಡಿದೆ. ರಾಜ್ಯದ ಪ್ರಮುಖ ನಾಯಕರಿಗೆ ಬಿಜೆಪಿ ಟಿಕೆಟ್ ನೀಡದೇ ಇರುವುದು ಈ ಬೆಳವಣಿಗೆಗೆ ಕಾರಣವಾಗಿದೆ.
ಟಿಕೆಟ್ ಕೈತಪ್ಪುವ ಆತಂಕದಿಂದ ಮಂಗಳವಾರ ಶಿವಮೊಗ್ಗ ಶಾಸಕ ಹಾಗೂ ಪಕ್ಷದ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

ಇದಾದ ಕೆಲ ಸಮಯದ ಬಳಿಕ ಹುಬ್ಬಳ್ಳಿ ಶಾಸಕ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಹೈ ಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ತಮಗೆ ಟಿಕೆಟ್ ನಿರಾಕರಿಸಲಾಗಿದೆ. ಆದರೆ, ನಾನು ಚುನಾವಣೆಗೆ ನಿಲ್ಲುವುದಂತೂ ಪಕ್ಕಾ ಎಂದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಈ ಬೆಳವಣಿಗೆ ನಡುವೆಯೇ ಬಿಜೆಪಿ ಎಂಎಲ್‌ಸಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ ಕೈತಪ್ಪಿದೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಲಕ್ಷ್ಮಣ ಸವದಿ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 'ಬಿಜೆಪಿಯಲ್ಲಿ ತತ್ವ ಸಿದ್ದಾಂತಗಳು ಉಳಿದಿಲ್ಲ. ಬಿಜೆಪಿ ನಾಯಕರು ಟಿಕೆಟ್ ಕೊಡಿಸುವುದಾಗಿ ನನಗೆ ಆಶ್ವಾಸನೆ ನೀಡಿದ್ದರು. ಆದರೆ, ಕೊಟ್ಟ ಮಾತಿಗೆ ಅವರು ನಡೆದುಕೊಂಡಿಲ್ಲ' ಎಂದು ಹೇಳಿದ್ದಾರೆ. ನಾಳೆ ( ಗುರುವಾರ ) ಕ್ಷೇತ್ರದ ಜನರ ಅಭಿಪ್ರಾಯವನ್ನು ಕೇಳಿ ಮುಂದಿನ ತೀರ್ಮಾನವನ್ನು ಕೈಗೊಳ್ಳುತ್ತೇನೆ ಎಂದು ಸವದಿ ತಿಳಿಸಿದ್ದಾರೆ.
ಕಾಂಗ್ರೆಸ್ ಸೇರಲಿದ್ದಾರಾ ಸವದಿ?
ಬಿಜೆಪಿಗೆ ರಾಜೀನಾಮೆ ನೀಡಿರುವ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಗೊಳ್ಳಬಹುದು ಎಂಬ ಮಾತುಗಳು ದಟ್ಟವಾಗಿವೆ. ಒಂದು ವೇಳೆ, ಸವದಿ ಕಾಂಗ್ರೆಸ್ ಸೇರ್ಪಡೆಗೊಂಡರೆ ಅಥಣಿ ಕ್ಷೇತ್ರದ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿದೆ. ಕಾರಣ, ಅಥಣಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಆಗಿಲ್ಲ.

ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಹೇಳಿದ್ದೇನು?
ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರುವ ಬಗ್ಗೆ ಪಕ್ಷದಲ್ಲಿ ಇದುವರೆಗೆ ಯಾವುದೇ ಚರ್ಚೆ ನಡೆದಿಲ್ಲ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹೇಳಿದ್ದಾರೆ.
ಹಿರಿಯ ನಾಯಕರ ಮಟ್ಟದಲ್ಲಿ ಈ ರೀತಿಯ ಚರ್ಚೆ ನಡೆದಿದೆಯೋ ಇಲ್ಲವೋ ಗೊತ್ತಿಲ್ಲ ಎಂದೂ ಜಾರಕಿಹೊಳಿ ತಿಳಿಸಿದ್ದಾರೆ.
'ಲಕ್ಷ್ಮಣ ಸವದಿ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎಂಬ ಸುದ್ದಿ ಕೇಳಿ ಬಂದಿದೆ. ಆದರೆ, ನನ್ನ ಬಳಿ ಈ ವಿಷಯದ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಕಳೆದ ಕೆಲವು ದಿನಗಳಿಂದ ಬಿಜೆಪಿ ಎಂಎಲ್‌ಸಿ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರಬಹುದು ಎಂಬ ವದಂತಿ ಹಬ್ಬಿದೆ. ಅಥಣಿಯಿಂದ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಬಿಜೆಪಿ ಹೈಕಮಾಂಡ್ ಮೇಲೆ ಅವರು ಒತ್ತಡ ಹೇರಿದ್ದರು. ಈಗ ಅದು ಹುಸಿಯಾಗಿದೆ ಎಂದು ತಿಳಿಸಿದ್ದಾರೆ' ಎಂದು ಅವರು ಹೇಳಿದ್ದಾರೆ.
ಲಕ್ಷ್ಮಣ ಸವದಿ ಬದಲಿಗೆ ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ನೀಡಿದೆ. ಮಹೇಶ್ ಕುಮಟಳ್ಳಿ ಅವರು ರಮೇಶ್ ಜಾರಕಿಹೊಳಿ ಆಪ್ತರು. ಅವರಿಗೆ ಟಿಕೆಟ್ ನೀಡಲೇಬೇಕೆಂದು ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ನಾಯಕರಿಗೆ ದುಂಬಾಲು ಬಿದ್ದಿದ್ದರು. ಈಗ ತಮ್ಮ ಆಪ್ತರಾದ ಮಹೇಶ್ ಕುಮಟಳ್ಳಿ ಹಾಗೂ ಶ್ರೀಮಂತ ಪಾಟೀಲ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಅವರು ಸಫಲರಾಗಿದ್ದಾರೆ.












Click it and Unblock the Notifications