ಜೆಡಿಎಸ್ ಪಕ್ಷ ಸೇರಿದ ನಿವೃತ್ತ ಐಪಿಎಸ್ ಅಧಿಕಾರಿ!
ಬೆಂಗಳೂರು, ಫೆಬ್ರವರಿ 05: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಕಾವು ಏರುತ್ತಿದೆ. ವಿವಿಧ ಪಕ್ಷಗಳನ್ನು ಸೇರುವ ನಾಯಕರ ಸಂಖ್ಯೆಯೂ ಹೆಚ್ಚಾಗುತ್ತಿದೆ. ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರು ಜೆಡಿಎಸ್ ಪಕ್ಷವನ್ನು ಸೇರಿದ್ದಾರೆ.
ಸೋಮವಾರ ನಿವೃತ್ತ ಐಪಿಎಸ್ ಅಧಿಕಾರಿ ಬಿ. ಜಿ. ಜ್ಯೋತಿ ಪ್ರಕಾಶ್ ಮಿರ್ಜಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರಿದರು. ಜ್ಯೋತಿ ಪ್ರಕಾಶ್ ಮಿರ್ಜಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.

ಜ್ಯೋತಿ ಪ್ರಕಾಶ್ ಮಿರ್ಜಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪಕ್ಷದ ಮಾಜಿ ಅಧ್ಯಕ್ಷ ಹೆಚ್. ಕೆ. ಕುಮಾರಸ್ವಾಮಿ, ಶಾಸಕ ನೇಮಿರಾಜ್ ನಾಯಕ್, ಮಾಜಿ ಸಚಿವ ಅನಿಲ್ ಲಾಡ್ ಮುಂತಾದವರು ಉಪಸ್ಥಿತರಿದ್ದರು.
ಯಡಿಯೂರಪ್ಪ ಆಪ್ತರು; ಐಪಿಎಸ್ ಅಧಿಕಾರಿಯಾಗಿದ್ದ ಬಿ. ಜಿ. ಜ್ಯೋತಿ ಪ್ರಕಾಶ್ ಮಿರ್ಜಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಪ್ತರು. ಲಿಂಗಾಯತ ಸಮುದಾಯಕ್ಕೆ ಸೇರಿದ ಅವರು ವಿಶ್ವ ವೀರಶೈವ ಲಿಂಗಾಯತ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷರೂ ಹೌದು.
ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬಿ. ಜಿ. ಜ್ಯೋತಿ ಪ್ರಕಾಶ್ ಮಿರ್ಜಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದರು. 2019ರಲ್ಲಿ ಯಡಿಯೂರಪ್ಪ ಮತ್ತೆ ಸಿಎಂ ಆದಾಗ ಬಿ. ಜಿ. ಜ್ಯೋತಿ ಪ್ರಕಾಶ್ ಮಿರ್ಜಿ ಅವರ ಸಲಹೆಗಾರರಾಗಿ ನೇಮಕವಾಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.
2018ರ ವಿಧಾನಸಭೆ ಚುನಾವಣೆ ಸಮಯದಲ್ಲಿ ಲಿಂಗಾಯ ಸಮುದಾಯದ ನಾಯಕರಿಗೆ ಟಿಕೆಟ್ ನೀಡಬೇಕು ಎಂದು ಬಿ. ಜಿ. ಜ್ಯೋತಿ ಪ್ರಕಾಶ್ ಮಿರ್ಜಿ ಮೂರು ಪಕ್ಷಗಳ ನಾಯಕರನ್ನು ಒತ್ತಾಯಿಸಿದ್ದರು.
ಬಿ. ಜಿ. ಜ್ಯೋತಿ ಪ್ರಕಾಶ್ ಮಿರ್ಜಿ ಚುನಾವಣೆಗೆ ನಿಲ್ಲುತ್ತಾರೆಯೇ? ಎಂದು ಕೇಳಿದಾಗ, "ನಾನು ಯಾವುದೇ ಚುನಾವಣೆಗೆ ಸ್ಪರ್ಧಿಸುವ ಚಿಂತನೆ ಇಲ್ಲ. ಪ್ರಶ್ನೆ ಕೇಳಿ ಕೇಳಿ ನಿಲ್ಲುವಂತೆ ಮಾಡಿದರೆ ನಾನೇನು ಮಾಡಲಿಕ್ಕೆ ಆಗುವುದಿಲ್ಲ. ವಿಧಾನಸಭೆ, ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರ ಮಾಡಿಲ್ಲ" ಎಂದು 2018ರ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೇಳಿದ್ದರು.
"ಸಮಯದಾಯದ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ. ವಿಧಾನಸಭೆ, ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರ ಮಾಡಿದ್ದರೆ ಒಂದೇ ಕ್ಷೇತ್ರಕ್ಕೆ ಸೀಮಿತವಾಗಿ ಇರುತ್ತಿದ್ದೆ" ಎಂದು ಬಿ. ಜಿ. ಜ್ಯೋತಿ ಪ್ರಕಾಶ್ ಮಿರ್ಜಿ ಸ್ಪಷ್ಟಪಡಿಸಿದ್ದರು.
"ನಾನು ಹುಟ್ಟಿದಾಗಿನಿಂದಲೂ ಹುಲಿ. ಪೊಲೀಸ್ ಇಲಾಖೆಯಲ್ಲಿ ಇದ್ದಾಗ ಫೈರಿಂಗ್, ಲಾಠಿ ಚಾರ್ಜ್ ಮಾಡಿದ್ದೇನೆ. ದುಬೈನಲ್ಲಿ ಅಡಗಿದ್ದ ದಾವುದ್ ಇಬ್ರಾಹಿಂ ಸಹಚರನನ್ನು ಹಿಡಿದು ತಂದಿದ್ದೇನೆ. ಇಲಾಖೆಯಿಂದ ನಿವೃತ್ತಿಯಾದ ಬಳಿಕವೂ ಹುಲಿಯಾಗಿಯೇ ಇದ್ದೇನೆ" ಎಂದು ತಿಳಿಸಿದ್ದರು.
"ಎಲ್ಲಾ ಕ್ಷೇತ್ರಗಳಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡಿ ಎಂದು ಮೂರು ಪಕ್ಷಗಳಿಗೂ ಬೇಡಿಕೆ ಇಡಲಾಗಿದೆ. ಚುನಾವಣೆಯಲ್ಲಿ ಯಾರನ್ನು ಬೆಂಬಲಿಸಬೇಕು ಎಂದು ಸಭೆ ನಡೆಸಿ ತೀರ್ಮನ ಮಾಡುತ್ತೇವೆ" ಎಂದು ಬಿ. ಜಿ. ಜ್ಯೋತಿ ಪ್ರಕಾಶ್ ಮಿರ್ಜಿ ಹೇಳಿದ್ದರು.
ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಆಪ್ತರಾದ ಅವರು ಜೆಡಿಎಸ್ ಸೇರಿರುವುದು ಕುತೂಹಲಕ್ಕೆ ಕಾರಣವಾಗಿದೆ. ಜೆಡಿಎಸ್ ಪಕ್ಷ ಈಗಾಗಲೇ ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಣೆ ಮಾಡಿದೆ. ಬಿಜೆಪಿ ಜೊತೆ ಸೀಟು ಹಂಚಿಕೆ ಮಾಡಿಕೊಂಡು ರಾಜ್ಯದಲ್ಲಿ ಚುನಾವಣೆಯನ್ನು ಎದುರಿಸುತ್ತಿದೆ.












Click it and Unblock the Notifications