B.C. Nagesh Passes Away: ಆರ್‌ಎಸ್‌ಎಸ್‌ ಕಟ್ಟಾಳು, ಮಾಜಿ ಸಚಿವ ಬಿ.ಸಿ.ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ

B.C. Nagesh Passes Away: ಬಿಜೆಪಿ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ಬಿ.ಸಿ.ನಾಗೇಶ್ ಅವರ ಆಗಸ್ಟ್‌ 18ರ ಮಂಗಳವಾರ ಮೃತಪಟ್ಟಿದ್ದಾರೆ. ಬಿ.ಸಿ.ನಾಗೇಶ್ ಅವರಿಗೆ 67 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅವರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ಬೆಂಗಳೂರಿನಲ್ಲಿರುವ ಅವರ ಪುತ್ರಿಯ ನಿವಾಸದಲ್ಲಿ ನಾಗೇಶ್ ಅವರು ಮೃತಪಟ್ಟಿದ್ದು, ಬುಧವಾರ ತಿಪಟೂರಿನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಬಿ.ಸಿ.ನಾಗೇಶ್ ಅವರಿಗೆ ಹಲವರು ಸಂತಾಪ ಸೂಚಿಸಿದ್ದಾರೆ.

ಬಿಜೆಪಿ ಪಕ್ಷದ ಹಿರಿಯ ನಾಯಕರು, ಮಾಜಿ ಸಚಿವರು ಆದ ಬಿ.ಸಿ.ನಾಗೇಶ್ ಅವರ ನಿಧನವಾರ್ತೆ ನೋವುಂಟು ಮಾಡಿದೆ. ಸರಳತೆಯನ್ನು ಮೈಗೂಡಿಸಿಕೊಂಡಿದ್ದ ನಾಗೇಶ್ ಅವರು ಅಧಿಕಾರ, ಮಂತ್ರಿಗಿರಿ ಈ ಎಲ್ಲವೂ ಇದ್ದಾಗಲೂ ಆಡಂಬರದ ಬದುಕಿನಿಂದ ದೂರ ಉಳಿದು ಸಮಾಜಕ್ಕೆ ಮಾದರಿಯಾಗಿದ್ದವರು. ನಾಗೇಶ್ ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿ ಬಳಗಕ್ಕೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

B C Nagesh Passes Away

ಬಿ.ಸಿ.ನಾಗೇಶ್‌ಗೆ ಎದುರಾಗಿತ್ತು ಆ ಆರೋಗ್ಯ ಸಮಸ್ಯೆ

ಇನ್ನು ಬಿ.ಸಿ.ನಾಗೇಶ್ ಅವರು ಕಳೆದ ಒಂದು ವರ್ಷದ ಅವಧಿಯಿಂದಲೂ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದರು. ಅಲ್ಲದೆ ಅವರಿಗೆ ಎರಡು ಬಾರಿ ಶಸ್ತ್ರಚಿಕಿತ್ಸೆಯನ್ನು ಸಹ ಮಾಡಲಾಗಿತ್ತು. ದೀರ್ಘಕಾಲದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಬಿ.ಸಿ.ನಾಗೇಶ್ ಅವರು ಮಂಗಳವಾರ ಮೃತಪಟ್ಟಿದ್ದು, ನಾಳೆ ಅವರ ಸ್ವಕ್ಷೇತ್ರ ತಿಪಟೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

ಬಿ.ಇ. ಇಂಜಿನಿಯರಿಂಗ್ ಪದವೀಧರರಾಗಿದ್ದ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪೂರ್ಣಕಾಲಿಕ ಕಾರ್ಯಕರ್ತರಾಗುವ ಮೂಲಕ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು. ನಾಗೇಶ್ ಅವರಿಗೆ ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿ ಇದ್ದಾರೆ. ಬಿ.ಸಿ.ನಾಗೇಶ್ ಅವರು ತಿಪಟೂರು ಕ್ಷೇತ್ರದಿಂದ 2008 ಮತ್ತು 2018 ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಆಡಳಿತಾವಧಿಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದರು. ಆದರೆ, ಅವರ ಅಧಿಕಾರದ ಅವಧಿಯಲ್ಲಿ ಕೆಲವೊಂದು ವಿವಾದಗಳು ಸಹ ಸೃಷ್ಟಿಯಾಗಿದ್ದವು.

ಹಲವು ಗಣ್ಯರ ಸಂತಾಪ

ಬಿ.ಸಿ.ನಾಗೇಶ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಮಾಜಿ ಸಚಿವರು ಹಾಗೂ ಹಿರಿಯ ನಾಯಕರಾದ ಬಿ.ಸಿ. ನಾಗೇಶ್ ಅವರು ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಪಕ್ಷದ ಹಿರಿಯ ನಾಯಕರು, ತಿಪಟೂರು ಕ್ಷೇತ್ರದ ಮಾಜಿ ಶಾಸಕರು, ಮಾಜಿ ಸಚಿವರೂ ಆದ ಬಿ.ಸಿ.ನಾಗೇಶ್ ಅವರು ಅಕಾಲಿಕವಾಗಿ ವಿಧಿವಶರಾದ ಸುದ್ದಿ ತೀವ್ರ ಆಘಾತ ಹಾಗೂ ದುಃಖವನ್ನು ಉಂಟು ಮಾಡಿದೆ. ಸರಳತೆ, ವೈಚಾರಿಕ ಬದ್ಧತೆ, ನಿಷ್ಠೆ ಹಾಗೂ ಜನಪರ ಕಾಳಜಿಯ ವ್ಯಕ್ತಿತ್ವದಿಂದಲೇ ಹೆಸರಾಗಿದ್ದ ಅವರು, ಶಾಸಕರಾಗಿ ಹಾಗೂ ಸಚಿವರಾಗಿ ಮಾಡಿರುವ ಸೇವೆ, ಶಿಕ್ಷಣ ಕ್ಷೇತ್ರದಲ್ಲಿ ತಂದ ಸುಧಾರಣೆಗಳು ಮತ್ತು ಪಕ್ಷದ ಸಂಘಟನೆಗೆ ನೀಡಿದ ಕೊಡುಗೆ ಅಪಾರ. ಅವರ ನಿರ್ಗಮನದಿಂದ ನಮ್ಮ ಪಕ್ಷ ಹಾಗೂ ನಾಡು ಒಬ್ಬ ಸಜ್ಜನಿಕೆಯ ಜನಪ್ರತಿನಿಧಿ ಹಾಗೂ ಆದರ್ಶ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+