ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಕುರಿತು ಮಹತ್ವದ ಹೇಳಿಕೆ ನೀಡಿದ ವಿ ಸೋಮಣ್ಣ
ಬೆಂಗಳೂರು, ಡಿಸೆಂಬರ್ 01: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ಅಧ್ಯಕ್ಷ ಸ್ಥಾನ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡು ಕಾಂಗ್ರೆಸ್ ಗೆ ಹೋಗುತ್ತಾರೆ ಅನ್ನೋ ಚರ್ಚೆ ರಾಜ್ಯ ರಾಜಕಾರಣದಲ್ಲಿ ಹೆಚ್ಚು ಸದ್ದು ಮಾಡಿತ್ತು. ಅಲ್ಲದೇ ಹೈಕಮಾಂಡ್ ಹಾಗೂ ರಾಜ್ಯ ನಾಯಕರ ವಿರುದ್ದ ಕಿಡಿಕಾರಿದ್ದು, ಅಂತರವನ್ನ ಕಾಯ್ದುಕೊಂಡಿದ್ರು, ಇದೀಗ ಕಾಂಗ್ರೆಸ್ ನಿಂದ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದ್ದಾರೆ.
ಹೌದು, ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂಬುದು ಇದು ಸುಳ್ಳು. ನಾನು ಯಾವುದೇ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿಲ್ಲ ಮತ್ತು ಲೋಕಸಭಾ ಟಿಕೆಟ್ ಕೇಳಿಲ್ಲ. ಯಾವುದೇ ಕಾರಣಕ್ಕೂ ನಾನು ಬಿಜೆಪಿ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ನನಗೆ ಪಕ್ಷದ ವರಿಷ್ಠರು ಏನು ಹೇಳುವರೋ ಅದನ್ನು ಮಾಡುತ್ತೇನೆ. ಒಂದು ವೇಳೆ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕು ಎಂದು ವರಿಷ್ಠರು ತೀರ್ಮಾನಿಸಿದರೆ ಅದಕ್ಕೆ ನಾನು ಬದ್ಧನಾಗಿದ್ದೇನೆ ಎಂದು ವಿ ಸೋಮಣ್ಣ ತಿಳಿಸಿದರು.
ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯಲ್ಲ. ಹೊಸ ವರ್ಷದ ಜನವರಿ 10ರೊಳಗೆ ಎಲ್ಲ ಗೊಂದಲಗಳೂ ಬಗೆಹರಿಯಲಿವೆ. ಜನವರಿ 7 ಅಥವಾ 8 ರಂದು ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ಉದ್ದೇಶವಿದೆ ಎಂದು ತಿಳಿಸಿದರು.












Click it and Unblock the Notifications