ಕಾಂಗ್ರೆಸ್ ನತ್ತ ವಿ ಸೋಮಣ್ಣ?: ಕೈ ಪಡೆ ಸೇರುವ ಕುರಿತು ಪ್ರತ್ಯೇಕ ಸಭೆಯಲ್ಲಿ ನಿರ್ಧಾರ!
ಬೆಂಗಳೂರು, ನವೆಂಬರ್ 16: ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರನ್ನ ಬಿಜೆಪಿ ಹೈಕಮಾಂಡ್ ನೇಮಕ ಮಾಡಿದ್ದು, ಬಿಜೆಪಿ ಹಿರಿಯ ನಾಯಕ ವಿ ಸೋಮಣ್ಣ ಅವರ ಅಸಮಾಧಾನಕ್ಕೆ ಕಾರಣವಾಗಿದ್ದು, ಪಕ್ಷ ಬಿಡಲು ವಿ ಸೋಮಣ್ಣ ಮುಂದಾಗಿದ್ದಾರೆ.
ಹೌದು, ಬಿಜೆಪಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಬಿಜೆಪಿ ನಾಯಕ ವಿ.ಸೋಮಣ್ಣ ಅವರು ಸದ್ಯವೇ ಗೋವಿಂದರಾಜನಗರ ಕ್ಷೇತ್ರದ ತಮ್ಮ ಬೆಂಬಲಿಗರ ಸಭೆ ಕರೆದು ಮುಂದಿನ ನಡೆಯನ್ನು ತೀರ್ಮಾನಿಸಲಿದ್ದಾರೆ ಎಂದು ಹೇಳಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಕಂಡ ವಿ ಸೋಮಣ್ಣ ಅವರು, ನಮ್ಮ ಪಕ್ಷದವರೇ ನನ್ನ ಸೋಲಿಸಲು ಕೆಲಸ ಮಾಡಿದ್ದಾರೆ ಎಂದು ಬಹಿರಂಗವಾಗಿ ಅಸಮಾಧಾನವನ್ನ ಹೊರಹಾಕಿದ್ರು, ಇದೀಗ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಿರುವುದು ಇನ್ನಷ್ಟು ಬೇಸರಕ್ಕೆ ಕಾರಣವಾಗಿದೆ. ಅಲ್ಲದೇ ಬಿಜೆಪಿ ಕೆಲ ನಾಯಕರೊಂದಿಗೆ ಮುನಿಸಿಕೊಂಡಿರುವ ವಿ ಸೋಮಣ್ಣ ಬಿಜೆಪಿ ಹೈಕಮಾಂಡ್ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಇನ್ನೂ ಕಾಂಗ್ರೆಸ್ ಸೇರ್ಪಡೆ ಕುರಿತು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಸದ್ಯದಲ್ಲೇ ಗೋವಿಂದರಾಜನಗರ ಕ್ಷೇತ್ರದ ತಮ್ಮ ಬೆಂಬಲಿಗರ ಜೊತೆ ಸಭೆ ಕರೆದು ಮುಂದಿನ ನಡೆಯನ್ನು ಮಾಜಿ ಸಚಿವ ವಿ ಸೋಮಣ್ಣ ಅವರು ತೀರ್ಮಾನಿಸಲಿದ್ದಾರೆ. ಇನ್ನೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೂ ಮುನ್ನ ಡಿಸೆಂಬರ್ 6ರಂದು ತುಮಕೂರಿನಲ್ಲಿ ರಾಜಕೀಯ ಶಕ್ತಿ ಪ್ರದರ್ಶನ ಮಾಡಿ ಹೈಕಮಾಂಡ್ ಗೆ ಸಂದೇಶ ರವಾನಿಸಲು ವಿ ಸೋಮಣ್ಣ ಸಜ್ಜಾಗಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಪಕ್ಷದಿಂದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಅಥವಾ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಯಕೆ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಕಾಂಗ್ರೆಸ್ ನಾಯಕರು ಸಹ ಬೆಂಗಳೂರು-ದಕ್ಷಿಣ ಲೋಕಸಭೆಯನ್ನು ಬಲಪಡಿಸಲು ವಿ ಸೋಮಣ್ಣ ಅವರನ್ನು ನಿಯೋಜಿಸಲು ಪ್ಲಾನ್ ಹಾಕಿಕೊಂಡಿದ್ದಾರೆ ಎನ್ನಲಾಗಿದೆ.
ಇನ್ನೂ ಹಳೇ ಮೈಸೂರು ಭಾಗದಲ್ಲಿ ವೀರಶೈವ ಲಿಂಗಾಯತ ನಾಯಕರ ಕೊರತೆಯನ್ನ ಕಾಂಗ್ರೆಸ್ ಎದುರಿಸುತ್ತಿದ್ದು, ವಿ.ಸೋಮಣ್ಣ ಅವರನ್ನು ಪಕ್ಷಕ್ಕೆ ಕರೆತರುವ ಮೂಲಕ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡಗೆ ಟಿಕೆಟ್ ನೀಡುವ ಸಾಧ್ಯತೆಗಳಿವೆ. ಅಲ್ಲದೇ ಮೈತ್ರಿ ಲೆಕ್ಕಾಚಾರದಲ್ಲಿ ಜೆಡಿಎಸ್‌ಗೆ ಕ್ಷೇತ್ರದಿಂದ ಒಕ್ಕಲಿಗರನ್ನ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಾಗಿದ್ದು, ಮೈತ್ರಿ ಅಭ್ಯರ್ಥಿ ವಿರುದ್ಧವಾಗಿ ವಿ ಸೋಮಣ್ಣ ಅವರನ್ನ ಕಣಕ್ಕಿಳಿಸಲು ಕಾಂಗ್ರೆಸ್ ಲೆಕ್ಕಾಚಾರವನ್ನ ಹಾಕಿಕೊಂಡಿದೆ ಎನ್ನಲಾಗಿದೆ.












Click it and Unblock the Notifications