ಬಿಜೆಪಿಗೆ ಗುಡ್‌ಬೈ ಹೇಳಿದ ಕರಾವಳಿಯ ಪ್ರಬಲ ನಾಯಕ: ಜಯಪ್ರಕಾಶ್ ಹೆಗ್ಡೆ ಇಂದೇ ಕಾಂಗ್ರೆಸ್ ಸೇರ್ಪಡೆ
ಉಡುಪಿ, ಮಾರ್ಚ್ 12: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕರಾವಳಿಯ ಪ್ರಬಲ ನಾಯಕ ಬಿಜೆಪಿಗೆ ಗುಡ್‌ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಳ್ಳಲು ಸಜ್ಜಾಗಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಇಂದು(ಮಾರ್ಚ್ 12) ಅಧೀಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡ ಸಮ್ಮುಖದಲ್ಲಿ ಮಾಜಿ ಸಚಿವ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಜಯಪ್ರಕಾಶ್ ಹೆಗ್ಡೆ ಪಕ್ಷಾಂತರಗೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಜಯಪ್ರಕಾಶ್ ಹೆಗ್ಡೆ ಈ ಬಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಾಗುತ್ತಿದೆ.
ಕಳೆದ ಬಾರಿಗಿಂತ ಈ ಬಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚಿತ್ರಣ ಬದಲಾಗಿದೆ. ಕಳೆದ ಎರಡು ಅವಧಿಗಳಲ್ಲಿ ಪ್ರಧಾನಿ ಮೋದಿ ಅಲೆಯಿಂದ ರಾಜ್ಯದ ಬಿಜೆಪಿ ನಾಯಕರಿಗೆ ಗೆಲುವು ಸುಲಭ ಮಾರ್ಗವಾಗಿತ್ತು. ಆದರೆ ಈ ಬಾರಿ ಬಿಜೆಪಿ ಗೆಲುವಿನ ಹಾದಿ ಅಷ್ಟು ಸುಲಭವಾಗಿಲ್ಲ. ಒಂದು ವೇಳೆ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್‌ನಿಂದ ಲೋಕಸಭಾ ಚುನಾವಣಾ ಅಭ್ಯರ್ಥಿಯಾಗಿ ಕಣಕ್ಕಿಳಿದರೆ, ತಮ್ಮ ವೈಯಕ್ತಿಕ ವರ್ಚಸ್ಸಿನಿಂದ ಅವರಿಗೆ ಬಿಜೆಪಿ ವಿರುದ್ಧ ಗೆಲುವಿನ ಹಾದಿ ಸುಲಭವಾಗುತ್ತದೆ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಪ್ರಕಾಶ್ ಹೆಗ್ಡೆ ಜನತಾದಳದ ಮೂಲಕ ರಾಜ್ಯದ ರಾಜಕೀಯ ರಂಗಕ್ಕೆ ಪ್ರವೇಶಿಸುತ್ತಾರೆ. 1994ರಲ್ಲಿ ಬ್ರಹ್ಮಾವರ ಕ್ಷೇತ್ರದಲ್ಲೇ ಮೊದಲ ಬಾರಿ ಜಯಗಳಿಸುವ ಮೂಲಕ ರಾಜ್ಯ ವಿಧಾನಸಭೆಯನ್ನು ಪ್ರವೇಶಿಸಿದ್ದರು. ಬಳಿಕ 2004ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಸತತ 11 ವರ್ಷ ಈ ಕ್ಷೇತ್ರವನ್ನು ಪ್ರತಿನಿಧಿಸಿ ಮೀನುಗಾರಿಕಾ ಸಚಿವರಾಗಿ ಕೂಡ ಸೇವೆ ಸಲ್ಲಿಸಿದ್ದರು.
2008ರ ವಿಧಾನಸಭಾ ಚುನಾವಣೆಯಲ್ಲಿ ಹಾಗೂ ಲೋಕಸಭಾ ಚುನಾವಣೆ ಸೋಲಿನ ಬಳಿಕ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು. ಜಯಪ್ರಕಾಶ್ ಹೆಗ್ಡೆ ಬಿಜೆಪಿಗೆ ಬಂದರೂ ಸಹ ಬಿಜೆಪಿಯ ಕೆಲ ಸಿದ್ಧಾಂತಗಳನ್ನು ಅವರು ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಹೀಗಾಗಿ ಅವರು ಈ ಬಾರಿಯ ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಮತ್ತೆ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುತ್ತಿದ್ದಾರೆ.












Click it and Unblock the Notifications