Ramya: ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಯಾಗಿ ನಟಿ ರಮ್ಯ ಕಣಕ್ಕೆ: ಮೈತ್ರಿ ನಾಯಕರ ವಿರುದ್ಧ ಡಿಕೆ ಬ್ರದರ್ಸ್ ಹೊಸ ಅಸ್ತ್ರ?
ಬೆಂಗಳೂರು, ಜುಲೈ 11: 2024 ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಹೋದರ ಡಿ ಕೆ ಸುರೇಶ್ ಸ್ಪರ್ಧೆ ನಡೆಸಿದ್ದು, ಹೀನಾಯವಾಗಿ ಸೋಲು ಅನುಭವಿಸಿದ್ದಾರೆ.
ಬಿಜೆಪಿ ಅಭ್ಯರ್ಥಿಯಾಗಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಅಳಿಯ ಡಾ.ಸಿ.ಎನ್.ಮಂಜುನಾಥ್ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಇದೀಗ ಮಂಡ್ಯದಿಂದ ಹೆಚ್ ಡಿ ಕುಮಾರಸ್ವಾಮಿ ಸ್ಪರ್ಧೆ ನಡೆಸಿ ಗೆಲುವು ಸಾಧಿಸಿದ್ದಾರೆ.

ಅಲ್ಲದೇ ತೆರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಹಾಗೂ ಮೈತ್ರಿ ನಾಯಕರು ಭರ್ಜರಿ ತಯಾರಿ ನಡೆಸಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಮೈತ್ರಿ ನಾಯಕರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಇತ್ತ ಡಿ ಕೆ ಬ್ರದರ್ಸ್ ಗೆ ಅಸ್ತಿತ್ವದ ಪ್ರಶ್ನೆಯಾಗಿದೆ.
ಸದ್ಯ ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ವೇದಿಕೆ ಸಜ್ಜಾಗುತ್ತಿದ್ದು, ಚನ್ನಪಟ್ಟಣ ಉಪಚುನಾವಣೆಗೆ ರಾಜಕೀಯ ಮದಗಜಗಳ ಹೋರಾಟದ ಜತೆಗೆ, ವದಂತಿಗಳ ಕೇಂದ್ರಬಿಂದವೂ ಆಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನ ಕಳೆದುಕೊಂಡ ಡಿ ಕೆ ಬ್ರದರ್ಸ್, ಚನ್ನಪಟ್ಟಣ ಕ್ಷೇತ್ರವನ್ನ ವಶಪಡಿಸಿಕೊಳ್ಳಲು ಅಚ್ಚರಿ ಅಭ್ಯರ್ಥಿಯ ಅಸ್ತ್ರ ಪ್ರಯೋಗಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯಗರಿಗಾಗಿ ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನ ನೀಡುವ ಮೂಲಕ ರಾಜ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು. ಇದೀಗ ಚನ್ನಪಟ್ಟಣ ಕ್ಷೇತ್ರವನ್ನ ವಶಪಡಿಸಿಕೊಳ್ಳುವ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ನಾಯಕರಿಗೆ ಠಕ್ಕರ್ ಕೊಡಲು ಡಿ ಕೆ ಬ್ರದರ್ಸ್ ಮಾಸ್ಟರ್ ಪ್ಲಾನ್ ನಡೆಸಿದ್ದಾರೆ.
ಚನ್ನಪಟ್ಟಣದಿಂದ ಡಿ ಕೆ ಸುರೇಶ್ ಅಥವಾ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ, ನಮ್ಮ ಕುಟುಂಬದಿಂದ ಯಾರು ಸಹ ಅಭ್ಯರ್ಥಿಯಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದು, ಪ್ರಭಾವಿ ಅಭ್ಯರ್ಥಿಯನ್ನ ಚನ್ನಪಟ್ಟಣದಿಂದ ಕಣಕ್ಕಿಳಿಸಲು ಕೈ ನಾಯಕರು ಭರ್ಜರಿ ಪ್ಲಾನ್ ನಡೆಸಿದ್ದಾರೆ.
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿ ನಾಯಕ ಸಿ ಪಿ ಯೋಗೇಶ್ವರ್ ಕಣಕ್ಕಿಳಿಯಲಿದ್ದು, ಸಿ ಪಿ ಯೋಗೇಶ್ವರ್ ಅವರ ವಿರುದ್ಧ ಪ್ರಬಲ ಅಭ್ಯರ್ಥಿಯಾಗಿ ಹಾಗೂ ಮಹಿಳೆಯರ ಮತಗಳನ್ನ ಸೆಳೆಯುವ ನಿಟ್ಟಿನಲ್ಲಿ ಮಾಜಿ ಸಂಸದೆ ಹಾಗೂ ನಟಿ ರಮ್ಯ ಅವರನ್ನ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ. ನಟಿ ರಮ್ಯ ಅವರನ್ನ ಕಣಕ್ಕಿಳಿಸುವ ನಿಟ್ಟಿನಲ್ಲಿ ಡಿ ಕೆ ಬ್ರದರ್ಸ್ ಈಗಾಗಲೇ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಒಕ್ಕಲಿಗ ಪ್ರಾಬಲ್ಯವಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಮತ್ತೊಂದು ಒಕ್ಕಲಿಗ ಮುಖವನ್ನು ಕಣಕ್ಕಿಳಿಸುವ ಮೂಲಕ ರಮ್ಯಾ ಅವರ ಮೂಲಕ ಡಿಕೆ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ನಡೆಸಿದ್ದಾರೆ ಎನ್ನಲಾಗಿದೆ. ನಟಿ ರಮ್ಯ ಅವರನ್ನ ಕಣಕ್ಕಿಳಿಸುವ ಮೂಲಕ ಚನ್ನಪಟ್ಟಣ ಕ್ಷೇತ್ರದಲ್ಲಿ ಸುಲಭವಾಗಿ ಗೆಲುವು ಸಾಧಿಸುಬಹುದು ಎಂಬ ಲೆಕ್ಕಾಚಾರವನ್ನ ಡಿ ಕೆ ಬ್ರದರ್ಸ್ ಹಾಕಿಕೊಂಡಿದ್ದಾರೆ.
ಇನ್ನೂ ರಮ್ಯ ಅವರಿಗೆ ಕಾಂಗ್ರೆಸ್ ನಲ್ಲಿ ಮಾತ್ರವಲ್ಲದೇ ಬಿಜೆಪಿ ಪಾಳಯದಲ್ಲೂ ರಮ್ಯಾಗೆ ಒಳ್ಳೆಯ ಸ್ನೇಹಿತರಿದ್ದಾರೆ. ರಮ್ಯ ಅವರು ಚನ್ನಪಟ್ಟಣದಿಂದ ಸ್ಪರ್ಧೆ ನಡೆಸಿದ್ರೆ, ಬಿಜೆಪಿಯ ಕೇಲವು ನಾಯಕರು ಸಹ ಆಂತರಿಕವಾಗಿ ಬೆಂಬಲ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ನಟಿ ರಮ್ಯ ಅವರನ್ನ ರಾಜ್ಯ ರಾಜಕಾರಣಕ್ಕೆ ಬರುವಂತೆ ರಾಜ್ಯ ಕಾಂಗ್ರೆಸ್ ನಾಯಕರು ಮನವೊಲಿಸುತ್ತಿದ್ದಾರೆ ಎಂದು ಹೇಳಲಾಗಿದೆ.












Click it and Unblock the Notifications