HD Deve Gowda: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು: ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಗುಡುಗಿದ ಹೆಚ್.ಡಿ.ದೇವೇಗೌ
ನವದೆಹಲಿ, ಫೆಬ್ರವರಿ 07: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಿನೇದಿನೆ ನೀರಿನ ಸಮಸ್ಯೆ ಬಿಗಡಾಯಿಸುತ್ತಿದೆ. ನಗರದ ಜನಸಂಖ್ಯೆ 1.45 ಕೋಟಿ ದಾಟಿದೆ. ನಗರಕ್ಕೆ ಕಾವೇರಿ ನ್ಯಾಯಮಂಡಳಿಯು 20 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದ್ದು, ಅಷ್ಟು ಪ್ರಮಾಣದ ನೀರು ಏನೇನಕ್ಕೂ ಸಾಲದು. ಕನಿಷ್ಠ 50 ಟಿಎಂಸಿ ಅಡಿ ನೀರು ಹಂಚಿಕೆ ಮಾಡಬೇಕು ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಒತ್ತಾಯ ಮಾಡಿದರು.
ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಅವರು ಮಾತನಾಡಿದ ಅವರು, ಬೆಂಗಳೂರಿನ ನೀರಿನ ಸಮಸ್ಯೆ ಬಗೆಹರಿಸಲು ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮನವಿ ಮಾಡಿದ್ದೆ. ಆಗ ಮಲ್ಲಿಕಾರ್ಜುನ ಖರ್ಗೆ ಸಚಿವರಾಗಿದ್ದರು. ಆದರೆ ಸಿಂಗ್ ಅವರು ಕೈ ಚೆಲ್ಲಿದ್ದರು. ಆದರೆ, ಈ ನೀರಿನ ಬಿಕ್ಕಟ್ಟನ್ನು ಬಗೆಹರಿಸಲು ಮೋದಿ ಅವರಿಂದ ಸಾಧ್ಯ. ಇದು ನನ್ನ ಬಲವಾದ ನಂಬಿಕೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಹೇಳಿದರು.

ಕೇಂದ್ರ ಬಿಜೆಪಿ ಸರಕಾರದ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯರ ಆಕ್ಷೇಪಗಳಿಗೆ ತಿರುಗೇಟು ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಲವಾಗಿ ಸಮರ್ಥಿಸಿಕೊಂಡರು.
ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು; ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್ ನಾಯಕರು ಲೇವಡಿ ಮಾಡುತ್ತಿದ್ದಾರೆ. ಆದರೆ, ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದುಕೊಂಡಿದೆ. ಅದರಿಂದ ಉಪಯೋಗವೇನು? ಎಂದು ಅವರು ಖಾರವಾಗಿ ಪ್ರಶ್ನಿಸಿದರು.
ಆ ಪಕ್ಷದ ಸರಕಾರ ಯಾವ ರೀತಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ ಎಂಬುದು ಎಲ್ಲರಿಗೂ ಗೊತ್ತು. ಅಲ್ಲಿರುವುದು ಕಡು ಭ್ರಷ್ಟ ಸರಕಾರ ಎಂದು ಅವರು ಕಿಡಿಕಾರಿದರು. ಪ್ರಗತಿಶೀಲ ರಾಜ್ಯ ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. ಯಾವುದೇ ಅಂಜಿಕೆ ಇಲ್ಲದೆ ಭ್ರಷ್ಟಾಚಾರದಲ್ಲಿ ತೊಡಗಿರುವ ಈ ಸರಕಾರದ ಕೆಟ್ಟ ಆಡಳಿತದಿಂದ ಅನೇಕ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡರು ಎಂದು ದೇವೇಗೌಡರು ಗುಡುಗಿದರು.
ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮಾತಿಗೆ ಬೆಂಬಲ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು; ಕಾಂಗ್ರೆಸ್ ಪಕ್ಷದ ಬಗ್ಗೆ 'ಶೇಮ್ ಶೇಮ್' ಎಂದು ಘೋಷಣೆಗಳನ್ನು ಕೂಗಿದರು. ಕಾಂಗ್ರೆಸ್ ಸರಕಾರದ ಸಚಿವರ ಕಾರ್ಯವೈಖರಿ ಬಗ್ಗೆಯೂ ಮಾಜಿ ಪ್ರಧಾನಿಗಳು ತಮ್ಮ ಅಸಮಾಧಾನವನ್ನು ಹೊರಹಾಕಿದರು. ಸಚಿವರ ಕಾರ್ಯವೈಖರಿ ಬಗ್ಗೆ ಸ್ವತಃ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತ ಪತ್ರಿಕಾ ವರದಿಗಳನ್ನು ನಾನು ಈ ಸದನದಲ್ಲಿ ಓದಲೇ? ಎಂದು ಅವರು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ಮಾಜಿ ಪ್ರಧಾನಿಗಳ ಭಾಷಣಕ್ಕೆ ಅಡ್ಡಿಪಡಿಸಲು ಯತ್ನಿಸಿದರು.












Click it and Unblock the Notifications