ಶಾಲೆ-ಕಾಲೇಜುಗಳಿಗೆ ಉಚಿತ ವಿದ್ಯುತ್; ಸರ್ಕಾರದ ಆದೇಶ, ವಿವರ
ಬೆಂಗಳೂರು, ಡಿಸೆಂಬರ್ 17; ಕರ್ನಾಟಕದ ಕಾಂಗ್ರೆಸ್ ಸರ್ಕಾರ 'ಗೃಹಜ್ಯೋತಿ' ಹೆಸರಿನಲ್ಲಿ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆ ಈಗಾಗಲೇ ಜಾರಿಗೊಳಿಸಿದೆ. ಸರ್ಕಾರಿ ಶಾಲೆ, ಕಾಲೇಜುಗಳಿಗೆ ಉಚಿತ ವಿದ್ಯುತ್ ನೀಡುವ ಕುರಿತು ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಬಿ. ಹೆಚ್. ಗಿರಿಜಾ ವಿಶೇಷಾಧಿಕಾರಿ ಮತ್ತು ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ (ಯೋಜನೆ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದಾರೆ.

ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸುವ ಕುರಿತು ಎಂಬ ವಿಷಯವನ್ನು ಆದೇಶ ಒಳಗೊಂಡಿದೆ. ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪತ್ರ 28/07/2023, 28/08/2023 ಮತ್ತು ಆರ್ಥಿಕ ಇಲಾಖೆಯ ಟಿಪ್ಪಣಿ 12/12/2023 ಉಲ್ಲೇಖಿಸಲಾಗಿದೆ.
ಪ್ರಸ್ತಾವನೆ, ಆದೇಶದ ವಿವರಗಳು; ಶಾಲೆಗಳು ಶಿಕ್ಷಣಕ್ಕೆ ಪ್ರಥಮ ವೇದಿಕೆಯಾಗಿದ್ದು, ರಾಜ್ಯದ ಬಡ, ಮಧ್ಯಮ ವರ್ಗದ ಕುಟುಂಬಗಳ ಮಕ್ಕಳು ವಿದ್ಯಾಭ್ಯಾಸ ಪಡೆಯಲು ಸರ್ಕಾರಿ ಶಾಲೆಗಳು ಪ್ರಮುಖ ಪಾತ್ರವಹಿಸುತ್ತಿದ್ದು, ಸರ್ಕಾರಿ ಶಾಲೆಗಳ ಉನ್ನತೀಕರಣ ಹಾಗೂ ಅವುಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು 'ಗೃಹ ಜ್ಯೋತಿ' ಯೋಜನೆಯಡಿ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ಒದಗಿಸುತ್ತಿರುವ ರೀತಿಯಲ್ಲಿಯೇ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೂ ಸಹ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯ ಒದಗಿಸುವುದರಿಂದ, ಸರ್ಕಾರಿ ಶಾಲೆಗಳಲ್ಲಿ ಉಳಿಕೆಯಾಗುವ ನಿರ್ವಹಣಾ ಅನುದಾನದಿಂದ ಶಾಲೆಗಳ ಗುಣಮಟ್ಟ ಅಭಿವೃದ್ಧಿಪಡಿಸಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಬಹುದಾಗಿದೆ.
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಬಾಕಿಯಿರುವ ವಿದ್ಯುತ್ ಮತ್ತು ನೀರಿನ ಬಿಲ್ಲುಗಳನ್ನು ಪಾವತಿ ಮಾಡುವುದರಿಂದ ವಿನಾಯಿತಿ ನೀಡುವಂತೆ ಹಾಗೂ ಉಚಿತವಾಗಿ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಕೋರಿರುತ್ತಾರೆ ಎಂದು ಹೇಳಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನಕ್ಕೆ ಒಳಪಡುವ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ಆರ್ಥಿಕ ಇಲಾಖೆಯು ಸಹಮತಿ ನೀಡಿರುತ್ತದೆ. ಪ್ರಸ್ತಾವನೆಯನ್ನು ಪರಿಶೀಲಿಸಿ ಈ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದೆ.
ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ಸರ್ಕಾರವು ಹರ್ಷಿಸುತ್ತದೆ. 2023-24ನೇ ಆರ್ಥಿಕ ಸಾಲಿನ ಅಂತ್ಯದವರೆಗೆ, ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಬಳಕೆ ಮಾಡಲಾದ, ಮಾಡಲಾಗುವ ವಿದ್ಯುತ್ ಮತ್ತು ನೀರಿನ ಶುಲ್ಕ ಪಾವತಿಗಾಗಿ ಅಗತ್ಯವಿರುವ ಜಿಲ್ಲಾವಾರು ಅನುದಾನದ ವಿವರವಾದ ಪ್ರಸ್ತಾವನೆಯನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಹಾಗೂ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು, ಇವರು ಕೂಡಲೇ ಸರ್ಕಾರಕ್ಕೆ ಸಲ್ಲಿಸತಕ್ಕದ್ದು ಎಂದು ಆದೇಶ ಹೇಳಿದೆ.
2024-25ನೇ ಸಾಲಿನಿಂದ ನಿರಂತರವಾಗಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಮತ್ತು ನೀರು ಸರಬರಾಜು ಮಾಡಲು ವಾರ್ಷಿಕವಾಗಿ ಅಗತ್ಯವಿರುವ ಅನುದಾನದ ಪ್ರಸ್ತಾವನೆಯನ್ನು ಇಂಧನ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆಗಳು ನೇರವಾಗಿ ಆರ್ಥಿಕ ಇಲಾಖೆಗೆ ಸಲ್ಲಿಸಿ, ಅಗತ್ಯವಿರುವ ಅನುದಾನವನ್ನು ಪಡೆಯಲು ಸೂಕ್ತ ಕ್ರಮ ಕೈಗೊಳ್ಳತಕ್ಕದ್ದು ಎಂದು ಸ್ಪಷ್ಟಪಡಿಸಲಾಗಿದೆ.
ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ/ ಬೋಧಕೇತರ ಸಿಬ್ಬಂದಿಗಳು ಹಾಗು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಉಚಿತವಾಗಿ ಒದಗಿಸಲಾಗುವ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಹಾಗೂ ಸಾಧ್ಯವಾದಷ್ಟು ಮಿತವ್ಯಯ ಸಾಧಿಸಲು ಅಗತ್ಯ ಕ್ರಮವಹಿಸತಕ್ಕದ್ದು ಎಂದು ತಿಳಿಸಿದೆ.
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ 2023ರ ಕನ್ನಡ ರಾಜ್ಯೋತ್ಸವದ ಭಾಷಣದಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ಉಚಿತ ವಿದ್ಯುತ್ ನೀಡುವ ಕುರಿತು ಘೋಷಣೆಯನ್ನು ಮಾಡಿದ್ದರು. ಶಿಕ್ಷಣ ಇಲಾಖೆಯು ಸಲ್ಲಿಕೆ ಮಾಡಿದ್ದ ಮನವಿಯ ಆಧಾರದ ಮೇಲೆ ಮುಖ್ಯಮಂತ್ರಿಗಳು ಉಚಿತ ವಿದ್ಯುತ್ ಘೋಷಣೆ ಮಾಡಿದ್ದರು.












Click it and Unblock the Notifications