ಸುದೀರ್ಘ ಅವಧಿಯ ಕೆಪಿಸಿಸಿ ಅಧ್ಯಕ್ಷರಾಗಿದ್ದ ಪರಮೇಶ್ವರ ರಾಜೀನಾಮೆ
ಬೆಂಗಳೂರು, ಮೇ 23 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಡಾ.ಜಿ.ಪರಮೇಶ್ವರ ಅವರು ರಾಜೀನಾಮೆ ನೀಡಿದ್ದಾರೆ. ಅತಿ ಹೆಚ್ಚು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಅವರು ದಾಖಲೆ ಬರೆದಿದ್ದಾರೆ.
ಬುಧವಾರ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಡಾ.ಜಿ.ಪರಮೇಶ್ವರ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅದಕ್ಕೂ ಮೊದಲು ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
'ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗಲಿದೆ. ನನಗಿಂತ ಉತ್ತಮರನ್ನು ಹೈಕಮಾಂಡ್ ಆಯ್ಕೆ ಮಾಡಲಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ' ಎಂದು ಡಾ.ಜಿ.ಪರಮೇಶ್ವರ ಹೇಳಿದರು.
'ಉಪ ಮುಖ್ಯಮಂತ್ರಿಯಾದ ಬಳಿಕ ಸರ್ಕಾರದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಬೇಕು. ಎರಡೂ ಹುದ್ದೆಯನ್ನು ಏಕಕಾಲದಲ್ಲಿ ನಿಭಾಯಿಸಲು ಸಾಧ್ಯವಿಲ್ಲ. ಸುಧೀರ್ಘವಾಗಿ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದಗಳು' ಎಂದರು.
ಕೆಪಿಸಿಸಿ ಅಧ್ಯಕ್ಷರಾಗಿ ಯಾರು ನೇಮಕವಾಗಲಿದ್ದಾರೆ? ಎಂಬುದು ಸದ್ಯ ಕುತೂಹಲ ಮೂಡಿಸಿರುವ ಪ್ರಶ್ನೆ. ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಅವರು ಅಧ್ಯಕ್ಷರಾಗಬಹುದು ಎಂಬ ಸುದ್ದಿಗಳು ಹಬ್ಬಿವೆ.

ಸುದೀರ್ಘ ಅವಧಿಯ ಅಧ್ಯಕ್ಷರು
ಕೆಪಿಸಿಸಿ ಅಧ್ಯಕ್ಷರಾಗಿ ಸುದೀರ್ಘ ಕಾಲ ಕಾರ್ಯ ನಿರ್ವಹಿಸಿದ ದಾಖಲೆಯನ್ನು ಡಾ.ಜಿ.ಪರಮೇಶ್ವರ ಅವರು ಮಾಡಿದ್ದಾರೆ. 2010ರ ಅ.29ರಿಂದ ಮೇ 23, 2018ರ ತನಕ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದದ್ದರು.
2013ರ ವಿಧಾನಸಭೆ ಚುನಾವಣೆ, 2014ರ ಲೋಕಸಭೆ ಚುನಾವಣೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಅವರು ಪಕ್ಷವನ್ನು ಮುನ್ನಡೆಸಿದ್ದಾರೆ. ಹಲವಾರು ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಶ್ರಮವಹಿಸಿದ್ದಾರೆ.

ವಿಧಾನಪರಿಷತ್ ಸದಸ್ಯರಾದರು
2013ರ ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಡಾ.ಜಿ.ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಪಕ್ಷ ಚುನಾವಣೆಯಲ್ಲಿ ಬಹುಮತ ಪಡೆದು ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರು.
ಆದರೆ, ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಡಾ.ಜಿ.ಪರಮೇಶ್ವರ ಅವರು 54,074 ಮತಗಳನ್ನು ಪಡೆದು ಜೆಡಿಎಸ್‌ನ ಸುಧಾಕರಲಾಲ್ ವಿರುದ್ಧ ಸೋಲು ಅನುಭವಿಸಿದರು. 2014ರ ಜುಲೈ 1ರಂದು ಅವರನ್ನು ವಿಧಾನಪರಿಷತ್ ಸದಸ್ಯರಾಗಿ ಆಯ್ಕೆ ಮಾಡಲಾಯಿತು.

ಗೃಹ ಮಂತ್ರಿಯಾದರು
2013ರ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿದ ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಹಲವು ಚರ್ಚೆಗಳು ನಡೆದವು. ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ ಮೇಲೆ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂಬ ಬೇಡಿಕೆ ಕೇಳಿಬಂದಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಮೇಶ್ವರ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡು ರಾಜ್ಯದ ಪ್ರಭಾವಿ ಗೃಹ ಖಾತೆಯನ್ನು ಅವರಿಗೆ ನೀಡಿದರು. ಆದರೆ, ಕೆಪಿಸಿಸಿ ಅಧ್ಯಕ್ಷರಾಗಿ ಅವರನ್ನು ಮುಂದುವರೆಯುವಂತೆ 2017ರಲ್ಲಿ ಹೈಕಮಾಂಡ್ ಸೂಚಿಸಿದ ಕಾರಣ ಗೃಹ ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷರು ಯಾರು?
'ನನಗಿಂತ ಉತ್ತಮರನ್ನು ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಿದೆ' ಎಂದು ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಹಾಗಾದರೆ ಕೆಪಿಸಿಸಿಯನ್ನು ಮುನ್ನೆಡೆಸುವ ಜವಾಬ್ದಾರಿ ಯಾರ ಹೆಗಲಿಗೆ ಹೋಗಲಿದೆ? ಎಂಬುದು ಕುತೂಹಲದ ಪ್ರಶ್ನೆ.
ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಬಹುದು ಎಂಬ ಸುದ್ದಿ ಹಬ್ಬಿದೆ. ಎಸ್.ಆರ್.ಪಾಟೀಲ್ ಅವರ ಹೆಸರು ಸಹ ಕೇಳಿಬರುತ್ತಿದೆ. ಯಾರು ಅಧ್ಯಕ್ಷರಾಗಲಿದ್ದಾರೆ? ಎಂದು ಕಾದು ನೋಡಬೇಕು.












Click it and Unblock the Notifications