ಗಣೇಶ ಹಬ್ಬ:ಕೆಎಸ್‌ಆರ್‌ಟಿಸಿಯಿಂದ ಪ್ರಯಾಣಿಕರಿಗಾಗಿ 500 ಹೆಚ್ಚುವರಿ ಬಸ್
ಬೆಂಗಳೂರು, ಆಗಸ್ಟ್ 25: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ)ವು ಪ್ರಯಾಣಿಕರ ಅನುಕೂಲಕ್ಕಾಗಿ ಆಗಸ್ಟ್ 29 ಮತ್ತು 30ರಂದು ವಿವಿಧ ಸ್ಥಳಗಳಿಗೆ 500ವಿಶೇಷ ಬಸ್‌ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ.
ಈ ಹೆಚ್ಚುವರಿ ಬಸ್‌ಗಳು ಈ ಎರಡು ದಿನ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ಸಂಚರಿಸಲಿವೆ. ಇದರ ಜತೆಗೆ ಕರ್ನಾಟಕದಿಂದ ಹೊರ ರಾಜ್ಯಗಳಿಗೆ ನಿಗಮದಿಂದ ಹೆಚ್ಚುವರಿ ಬಸ್ ಸಂಚರಿಲಿವೆ ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ನಡೆಸಲಿವೆ.
ಇನ್ನೂ ನಗರದಲ್ಲಿರುವ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಬಸ್ ಸಂಚರಿಸಲಿವೆ.

ಬೆಂಗಳೂರಿನ ವಿವಿಧೆಡೆಯಿಂದ ಸಾರಿಗೆ ವ್ಯವಸ್ಥೆ
ಬೆಂಗಳೂರು ನಗರದ ವಿಜಯನಗರ, ಜಯನಗರ ೪ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ನೆರೆ ರಾಜ್ಯಗಳಿಗೆ ಸಾಗಲಿರುವ ಕೆಎಸ್‌ಆರ್‌ಟಿಸಿ ಬಸ್
ನೆರೆ ರಾಜ್ಯಗಳಾದ ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಸಾಗಲಿವೆ.
ಇನ್ನು ಪ್ರಯಾಣಿಕರಿಗೆ ತೊಂದರೆ ಟಿಕೆಟ್ ಪಡೆಯಲು ತೊಂದರೆ ಆಗದಂತೆ ಎಚ್ಚರ ವಹಿಸಿರುವ ನಿಗಮವು ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆನ್‌ಲೈನ್ ಮೂಲಕ ಆಸನಗಳನ್ನು ಕಾಯ್ದಿರಿಸಲು ಅವಕಾಶ ಕಲ್ಪಿಸಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಿರುವ ಬಸ್ ನಿಲ್ದಾಣ ಇಲ್ಲವೇ ಪಿಕ್ ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಮನವಿ ಮಾಡಲಾಗಿದೆ.

ಆನ್‌ಲೈನ್ ಮೂಲಕ ಟಿಕೆಟ್ ಕಾಯ್ದಿರಿಸಿ
ಇ-ಟಿಕೇಟ್ ಬುಕಿಂಗ್ ಅನ್ನು www ksrtc.karnataka.gov.in ವೆಬ್‌ಸೈಟ್ ಮೂಲಕ ಮಾಡಬಹುದು. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರ ರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನ ಕಾಯ್ದಿರಿಸಬಹುದಾಗಿದೆ.

ಪ್ರಯಾಣಿಕರಿಗೆ ಶೇ.10ರಷ್ಟು ರಿಯಾಯಿತಿ
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸಿದರೆ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು. ಎರಡು ಬದಿ ಟಿಕೇಟ್ ಅವರು ಕಾಯ್ದಿರಿಸಿದ್ದರೆ ಶೇ.10 ರಷ್ಟು ರಿಯಾಯಿತಿ ಪಡೆಯಬಹುದು.
ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ. ಆಗಮಿಸುವ ಪ್ರಯಾಣಿಕರು ಆರೋಗ್ಯ ದೃಷ್ಟಿಯಿಂದ ಕೋವಿಡ್ ಮಾರ್ಗಸೂಚಿ ಅನುಸಿರಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.












Click it and Unblock the Notifications