ಗಣೇಶೋತ್ಸವ ಗಲಭೆ: "ಅಲ್ಪಸಂಖ್ಯಾತರ ಹೆಸರಿನ ಪುಂಡರ ಅಟ್ಟಹಾಸ"
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ ಹಬ್ಬಗಳು, ಗಣಪತಿ ಉತ್ಸವ ಹಾಗೂ ಮೆರವಣಿಗೆಗಳನ್ನು ನೆಮ್ಮದಿಯಾಗಿ ಆಚರಿಸಲಾಗದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ. ಗಣೇಶ ವಿಸರ್ಜನೆಯ ಮೆರವಣಿಗೆಯ ಸಂದರ್ಭದಲ್ಲಂತೂ ಮತಾಂಧ ಪುಂಡರು ಗುಂಪು ಕಟ್ಟಿಕೊಂಡು ಕಲ್ಲು ತೂರುವ ಘಟನೆಗಳು ಮಂಡ್ಯ, ಧಾರವಾಡ, ಬಾಗಲಕೋಟೆ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಿಂದ ವರದಿಯಾಗುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾನುವಾರ (ಸೆಪ್ಟೆಂಬರ್ 07)ರಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳು ಮೆರವಣಿಗೆ ವೇಳೆ ನಿರಂತರ ಕಲ್ಲು ತೂರಿ ಪ್ರಕ್ಷುಬ್ಧ ವಾತಾವರಣ ನಿರ್ಮಿಸಿದ್ದಾರೆ, ಕಲ್ಲು ತೂರಾಟದಲ್ಲಿ ಮಹಿಳೆಯರು ಹಾಗೂ ಪೊಲೀಸರು ತೀವ್ರವಾಗಿ ಗಾಯಗೊಂಡಿರುವ ಘಟನೆ ಅತ್ಯಂತ ಆತಂಕಕಾರಿಯಾಗಿದ್ದು ಬಿಜೆಪಿ ಕರ್ನಾಟಕ ಇದನ್ನು ಅತ್ಯುಗ್ರವಾಗಿ ಖಂಡಿಸುತ್ತದೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿಯೂ ಗಣಪತಿ ಮೂರ್ತಿಯನ್ನು ಮಲಿನಗೊಳಿಸಿರುವ ಸುದ್ದಿಯೂ ವರದಿಯಾಗಿದೆ. ಅಲ್ಪಸಂಖ್ಯಾತರ ಹೆಸರಿನ ಪುಂಡರ ಈ ಪರಿಯ ಅಟ್ಟಹಾಸ ಹಿಂದೂ ಧರ್ಮಿಯರಲ್ಲಿ ಅದರಲ್ಲೂ ಮಹಿಳೆಯರಲ್ಲಿ ಭಯಗ್ರಸ್ತ ವಾತಾವರಣವನ್ನು ಉಂಟುಮಾಡಿದೆ.

ತಪ್ಪಿತಸ್ಥ ಕಿಡಿಗೇಡಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಪೊಲೀಸರ ಕೈ ಕಟ್ಟಿ ಹಾಕಿದೆ. ಪೊಲೀಸ್ ಠಾಣೆಗಳು ಹಾಗೂ ಪೊಲೀಸರ ಮೇಲೆ ದಾಳಿ ನಡೆದರೂ ಕಠಿಣ ಕ್ರಮಕ್ಕೆ ಪೊಲೀಸರು ಮುಂದಾಗದ ಪರಿಸ್ಥಿತಿಯನ್ನು ನೋಡುತ್ತಿದ್ದರೆ ರಾಜ್ಯದಲ್ಲಿ 'ಮೊಘಲ್ ಪ್ರೇರಣೆಯ' ಆಡಳಿತ ನಡೆಯುತ್ತಿರುವಂತೆ ಭಾಸವಾಗುತ್ತಿದೆ. ಸರ್ಕಾರದ ಈ ಪಕ್ಷಪಾತ ಹಾಗೂ ಮೃದುಧೋರಣೆ ರಾಜ್ಯದಲ್ಲಿ ಅರಾಜಕತೆ ಉಂಟಾಗಲು ಕಾರಣವಾಗುತ್ತಿದೆ. ಮದ್ದೂರಿನ ಹಾಗೂ ಸಾಗರದ ಘಟನೆಯ ಕುರಿತು ಸರ್ಕಾರ ಕಠಿಣ ನಿಲುವು ತೆಗೆದುಕೊಳ್ಳದಿದ್ದರೆ, ಮತಾಂಧ ದುಷ್ಕರ್ಮಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸದಿದ್ದರೆ ರಾಜ್ಯದ ಜನರೇ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಈ ವಿಚಾರವಾಗಿ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್‌ನ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು, ಮದ್ದೂರಿನಲ್ಲಿ ನಡೆದ ಲಾಠಿಚಾರ್ಜ್ ಖಂಡಿಸುತ್ತೇನೆ. ಇಂದು ಮಧ್ಯಾಹ್ನ ಮದ್ದೂರು ನಗರಕ್ಕೆ ಭೇಟಿ ನೀಡಲಿದ್ದೇನೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಹಿಂದೂ ಹಬ್ಬಗಳು, ಗಣಪತಿ ಉತ್ಸವ ಮೆರವಣಿಗೆಗಳನ್ನು ನೆಮ್ಮದಿಯಾಗಿ ಆಚರಿಸಲಾಗದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ.
ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟದಲ್ಲಿ ಮಹಿಳೆಯರು ಹಾಗೂ ಪೊಲೀಸರೇ ಗಾಯಗೊಂಡಿರುವುದು ಕಾನೂನು-ಸುವ್ಯವಸ್ಥೆಯು ರಾಜ್ಯದಲ್ಲಿ ಸಂಪೂರ್ಣ ಕುಸಿದಿರುವುದನ್ನು ತೋರಿಸುತ್ತದೆ. ಈ ಘಟನೆಯಲ್ಲಿ ಮಹಿಳೆಯರ ಮೇಲೆ ಕೂಡ ಪೊಲೀಸರು ಲಾಠಿಚಾರ್ಜ್ ಮಾಡಿರುವುದು ನಿಜಕ್ಕೂ ಖಂಡನೀಯ. ಅಸಮರ್ಥ ಗೃಹ ಮತ್ತು ಉಸ್ತುವಾರಿ ಸಚಿವರು ಈ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.












Click it and Unblock the Notifications