ಗೌರಿ ಲಂಕೇಶ್ ಪ್ರಕರಣ ಸಿಬಿಐಗೆ, ಸಿದ್ದರಾಮಯ್ಯ ಹೇಳುವುದೇನು?
ಬೆಂಗಳೂರು, ಸೆಪ್ಟೆಂಬರ್ 07 : 'ಗೌರಿ ಲಂಕೇಶ್ ಕುಟುಂಬ ಸದಸ್ಯರು ಒಪ್ಪಿದರೆ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಲು ಸರ್ಕಾರ ಸಿದ್ಧವಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿದ್ದರಾಮಯ್ಯ, 'ಸಿಬಿಐ ತನಿಖೆಗೆ ವಹಿಸುವ ವಿಚಾರದಲ್ಲಿ ಸರ್ಕಾರ ಮುಕ್ತ ಮನಸ್ಸು ಹೊಂದಿದೆ. ತನಿಖೆಗೆ ವಹಿಸುವುದೇ ಇಲ್ಲ ಎಂದು ಹೇಳಿಲ್ಲ' ಎಂದು ಸ್ಪಷ್ಟಪಡಿಸಿದರು.

'ಗೌರಿ ಲಂಕೇಶ್ ಕುಟುಂಬದವರು ಒತ್ತಾಯ ಮಾಡಿದರೆ ಸಿಬಿಐ ತನಿಖೆಗೆ ನೀಡಲು ಸಿದ್ಧ' ಎಂದು ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಸರ್ಕಾರ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಗೆ ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಿದೆ.
ಕುಟುಂಬದವರು ಒತ್ತಾಯಿಸಿದರೆ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ತನಿಖೆಯನ್ನು ಸಿಬಿಐಗೆ ವಹಿಸುವ ಬಗ್ಗೆ ಸರ್ಕಾರ ಮುಕ್ತವಾಗಿದೆ.
— Siddaramaiah (@siddaramaiah) September 7, 2017
ಗೌರಿ ಲಂಕೇಶ್ ಸಹೋದರ ಇಂದ್ರಜಿತ್ ಲಂಕೇಶ್ ಹತ್ಯೆಯ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಹೇಳುತ್ತಿದ್ದಾರೆ. ಕೆಲವು ಬಿಜೆಪಿ ನಾಯಕರು, ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಸಹ ಸಿಬಿಐ ತನಿಖೆಗೆ ಒತ್ತಾಯ ಮಾಡಿದ್ದಾರೆ.
ಸೆ.5ರ ಮಂಗಳವಾರ ರಾತ್ರಿ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸದಲ್ಲಿ ಹತ್ಯೆ ಮಾಡಲಾಗಿತ್ತು. ಗೌರಿ ಲಂಕೇಶ್ ಹತ್ಯೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.












Click it and Unblock the Notifications