Global Investors' Meet: ರಾಜ್ಯಕ್ಕೆ 5 ಲಕ್ಷ ಕೋಟಿ ರೂ. ಬಂಡವಾಳ ನಿರೀಕ್ಷೆ: ಮುರುಗೇಶ್ ನಿರಾಣಿ
ಬೆಂಗಳೂರು, ಅಕ್ಟೋಬರ್.20: ರಾಜ್ಯ ರಾಜಧಾನಿ ಬೆಂಗಳೂರು ನವೆಂಬರ್‌ನಲ್ಲಿ ಕರ್ನಾಟಕದಲ್ಲಿ ಬೃಹತ್ ಬಂಡವಾಳ ಹೂಡಿಕೆದಾರರ ನಿರ್ಧಾರಗಳು, ಅದರ ಮೇಲೆ ಸರ್ಕಾರ ಹಮ್ಮಿಕೊಳ್ಳಲಿರುವ ಯೋಜನೆಗಳಿಗೆ, ಕೈಗಾರಿಕೆ ಅಭಿವೃದ್ಧಿ ಚಿಂತನೆಗಳಿಗೆ ಸಾಕ್ಷಿಯಾಗಲಿದೆ.
''ನವೆಂಬರ್ 2ರಿಂದ 4ರವರೆಗೆ ಮೂರು ದಿನ ಬೆಂಗಳೂರಿನಲ್ಲಿ 'ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ'ಕ್ಕೆ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಎಲ್ಲ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ'' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ ಹೇಳಿದರು.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ ಅವರು, ''ಪ್ರಧಾನಿ ನರೇಂದ್ರ ಮೋದಿ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಸಮಾವೇಶವನ್ನು ಉದ್ಘಾಟನೆ ಮಾಡಿ ಭಾಷಣ ಮಾಡಲಿದ್ದಾರೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಭಗವಂತ ಖೂಬಾ, ನಿತಿನ್ ಗಡ್ಕರಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ'' ಎಂದರು.

'ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ'ಕ್ಕೆ ಪೂರ್ವಭಾವಿಯಾಗಿ ಗುರುವಾರ ದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಹಾಗೂ ದೇಶೀಯ ರೋಡ್ ಶೋ ಯಶಸ್ವಿಯಾಗಿದೆ. ರೋಡ್ ಶೋ ವೇಳೆ ಉದ್ಯಮಿಗಳ ಜತೆ ನಡೆಸಿದ ಮಾತುಕತೆ ಫಲಪ್ರದವಾಗಿದೆ. ಹೈದರಾಬಾದ್ ಹಾಗೂ ಮುಂಬಯಿ ರೋಡ್ ಶೋ ವೇಳೆ ಉದ್ಯಮಿಗಳಿಂದ ಉತ್ತಮ ಸ್ಪಂದನೆ ದೊರೆತಿದೆ. ಅಂತಾರಾಷ್ಟ್ರೀಯ ರೋಡ್‌ಶೋ ಭಾಗವಾಗಿ ಜಪಾನ್, ದಕ್ಷಿಣ ಕೊರಿಯಾ, ಅಮೆರಿಕ ಹಾಗೂ ಯೂರೋಪ್‌ಗೆ ಭೇಟಿ ನೀಡಲಾಗಿದೆ. ಈ ದೇಶಗಳಿಂದ ದೊಡ್ಡ ಮಟ್ಟದ ವಿದೇಶಿ ಬಂಡವಾಳ ಹರಿದು ಬರುವ ನಿರೀಕ್ಷೆ ಇದೆ ಎಂದು ಅವರು ವಿವರಿಸಿದರು.
5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ
ಸಮಾವೇಶದಲ್ಲಿ 5,000ಕ್ಕೂ ಹೆಚ್ಚು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗುವ ಸಾಧ್ಯತೆ ಇದ್ದು, ಅದು ಸಾಧ್ಯವೇ ಆದಲ್ಲಿ ಒಟ್ಟು ಸುಮಾರು 5 ಲಕ್ಷ ಮಂದಿಗೆ ಉದ್ಯೋಗ ದೊರೆಯಲಿದೆ. ಜಾಗತಿಕ ಹೂಡಿಕೆದಾರರ ಸಮಾವೇಶ 'ಬಿಲ್ಡ್ ಫಾರ್ ದ ವರ್ಲ್ಡ್' ಎಂಬ ಪರಿಕಲ್ಪನೆಯಡಿ ಅನಾವರಣಗೊಳ್ಳುತ್ತಿದೆ. ಅತ್ಯುತ್ತಮ ಕೈಗಾರಿಕಾ ಪರಿಸರ ವ್ಯವಸ್ಥೆ ಹೊಂದಿರುವ ಕರ್ನಾಟಕ, ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣ ಎಂಬುದು ಸಂತಸದ ವಿಷಯ ಎಂದು ಹೇಳಿದರು.
ಸಮಾವೇಶದ ಸಂದರ್ಭದಲ್ಲಿ ಭೂ ಹಂಚಿಕೆಗೆ ಅನುಕೂಲವಾಗುವಂತೆ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಬಂಡವಾಳ ಹೂಡಿಕೆಯಲ್ಲಿ ಮುಂದು
ನಮ್ಮ ಸರ್ಕಾರದ ಹಲವು ಸುಧಾರಣಾ ಕ್ರಮಗಳ ಪರಿಣಾಮವಾಗಿ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರ ಹೊಮ್ಮಿದೆ. ನೂತನ ಕೈಗಾರಿಕಾ ನೀತಿ ಹಾಗೂ ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅಧಿನಿಯಮದಲ್ಲಿನ ತಿದ್ದುಪಡಿಗಳಿಂದ ಕರ್ನಾಟಕ ಉದ್ಯಮ ಸ್ನೇಹಿ ರಾಜ್ಯಗಳ ಪಟ್ಟಿಯಲ್ಲಿ ಅತ್ಯಂತ ಪ್ರಮುಖ ಸ್ಥಾನ ಪಡೆದುಕೊಂಡಿದೆ. 2021ರ ಏಪ್ರಿಲ್ 21ರಿಂದ 2022ರ ಮಾರ್ಚ್ ಅವಧಿಯಲ್ಲಿ 1.76 ಲಕ್ಷ ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಆಕರ್ಷಿಸುವಲ್ಲಿ ರಾಜ್ಯವು ಯಶಸ್ವಿಯಾಗಿದೆ. 2021ರ ಜುಲೈ ನಂತರದಲ್ಲಿ ಬರೋಬ್ಬರಿ 3 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆ ಪ್ರಸ್ತಾವನೆಗಳು ರಾಜ್ಯಕ್ಕೆ ಬಂದಿವೆ.
ಗ್ರೀನ್ ಹೈಡ್ರೋಜನ್, ಎಲೆಕ್ಟ್ರಾನಿಕ್ಸ್ ಉತ್ಪಾದನೆ, ನವೀಕರಿಸಬಹುದಾದ ಇಂಧನಗಳು, ಏರೋಸ್ಪೇಸ್ ಮತ್ತು ಡಿಫೆನ್ಸ್, ಇ-ಮೊಬಿಲಿಟಿ ಮತ್ತು ಮೂಲಸೌಕರ್ಯಗಳ ವಲಯಗಳಲ್ಲಿ 4 ಲಕ್ಷ ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದು ಮುರಗೇಶ ನಿರಾಣಿ ತಿಳಿಸಿದರು.












Click it and Unblock the Notifications