Government employee; ಸರ್ಕಾರಿ ನೌಕರರ ವರ್ಗಾವಣೆ ಹೊಸ ಸುತ್ತೋಲೆ
ಬೆಂಗಳೂರು, ಸೆಪ್ಟೆಂಬರ್ 04; ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭಾರೀ ಚರ್ಚೆಗೆ ಕಾರಣವಾಗಿರುವುದು ಸರ್ಕಾರಿ ನೌಕರರ ವರ್ಗಾವಣೆ. ಪ್ರತಿಪಕ್ಷಗಳು ಇದೇ ವಿಚಾರ ಮುಂದಿಟ್ಟುಕೊಂಡು ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿಗಳನ್ನು ನಡೆಸುತ್ತಿದೆ.
ಕರ್ನಾಟಕ ಸರ್ಕಾರದ ಸಚಿವಾಲಯ ಸುತ್ತೋಲೆಯೊಂದನ್ನು ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಪರ ಕಾರ್ಯದರ್ಶಿ ಜಿ. ಡಿ. ಮಧುಚಂದ್ರ ತೇಜಸ್ವಿ ಈ ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆಯಲ್ಲಿ ಸರ್ಕಾರಿ ನೌಕರರ ವರ್ಗಾವಣಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಸೂಚನೆಗಳನ್ನು ನೀಡಲಾಗಿದೆ. ಸರ್ಕಾರಿ ಆದೇಶ 7/6/2013, ಸರ್ಕಾರಿ ಆದೇಶ ದಿನಾಂಕ 30/5/2023 ಮತ್ತು ದಿನಾಂಕ 16/6/2023 ಉಲ್ಲೇಖ ಮಾಡಲಾಗಿದೆ.
ಸುತ್ತೋಲೆಯ ವಿವರಗಳು; ಸರ್ಕಾರದ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ, ಮಾರ್ಗಸೂಚಿಗಳನ್ನು ನಿರ್ದಿಷ್ಟಡಿಸಲಾಗಿದೆ ಎಂದು ಹೇಳಿದೆ. ಸದರಿ ಆದೇಶದ ಕಂಡಿಕೆ 9 (ಆ) ರಲ್ಲಿ ಈ ಕೆಳಗಿನಂತೆ ತಿಳಿಸಲಾಗಿದೆ ಎಂದು ಹೇಳಿದೆ.
ಆದರೆ ಯಾವುದೇ ರೀತಿಯ ಅವಧಿಪೂರ್ವ ವರ್ಗಾವಣೆಗಳನ್ನು ಹಾಗೂ ಸಾಮಾನ್ಯ ವರ್ಗಾವಣಾ ಅವಧಿ ಮುಗಿದ ನಂತರ ಯಾವುದೇ ವರ್ಗಾವಣೆಗಳನ್ನು ಮತ್ತು ಮೇಲೆ ತಿಳಿಸಿರುವಂತೆ ಸರ್ಕಾರಿ ನೌಕರರು ಒಂದು ಸ್ಥಳದಲ್ಲಿರಬಹುದಾದ ಅವಧಿ ವಿಸ್ತರಿಸಿ ಮಾಡುವ ವರ್ಗಾವಣೆಗಳನ್ನು ಮಾಡುವ ಮುನ್ನ ಸಚಿವಾಲಯದ ಆಡಳಿತ ಇಲಾಖೆಗಳು ಮಾನ್ಯ ಮುಖ್ಯಮಂತ್ರಿಯವರ ಅನುಮೋದನೆಯನ್ನು ತಪ್ಪದೇ ನಡೆಯತಕ್ಕದ್ದು.
ಸರ್ಕಾರದ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿಯವರು ಯಾವುದೇ ಪ್ರಸಂಗದಲ್ಲಿ ಮೊದಲು ವರ್ಗಾವಣೆಗಳನ್ನು ಮಾಡಿ ನಂತರ ಮಾನ್ಯ ಮುಖ್ಯ ಮಂತ್ರಿಯವರ ಸ್ಥಿರೀಕರಣ/ಘಟನೋತ್ತರ ಅನುಮೋದನೆ ಪಡೆಯತಕ್ಕದಲ್ಲ ಎಂದು ಸ್ಪಷ್ಟಪಡಿಸಿದೆ.
ಸರ್ಕಾರದ ಆದೇಶಗಳಲ್ಲಿ 2023-24ನೇ ಸಾಲಿಗೆ ಗ್ರೂಪ್ ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ/ ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡ 6 ರಷ್ಟನ್ನು ಮೀರದಂತೆ ದಿನಾಂಕ 1/6/2023 ರಿಂದ 3/7/2023 ರವರೆಗೆ ಸಾರ್ವತ್ರಿಕ ವರ್ಗಾವಣೆಗಳನ್ನು ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರವನ್ನು ಪ್ರತ್ಯಾಯೋಜಿಸಿ ಆದೇಶಿಸಲಾಗಿದೆ.
ಆದರೆ, ನಿಗದಿತ ವರ್ಗಾವಣಾ ಅವಧಿಯ ನಂತರವೂ ಇಲಾಖಾ ಹಂತದಲ್ಲಿ ವರ್ಗಾವಣೆಗಳನ್ನು ಜಾರಿಗೊಳಿಸಿ ನಂತರ ಘಟನೋತ್ತರ ಅನುಮೋದನೆಗಾಗಿ ಪ್ರಸ್ತಾವನೆಗಳನ್ನು ಸನ್ಮಾನ್ಯ ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗುತ್ತಿದ್ದು, ಇದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದೆ.
ಈ ಹಿನ್ನೆಲೆಯಲ್ಲಿ ಸಾರ್ವತ್ರಿಕ ವರ್ಗಾವಣಾ ಅವಧಿ ಮುಗಿದಿರುವುದರಿಂದ ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗಳನ್ನು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಮಾಡುವುದು ಅತ್ಯಗತ್ಯವಾಗಿದ್ದಲ್ಲಿ ಸನ್ಮಾನ ಮುಖ್ಯಮಂತ್ರಿಯವರ ಪೂರ್ವಾನುಮೋದನೆಯನ್ನು ಪಡೆಯತಕ್ಕದ್ದು ಎಂದು ಈ ಮೂಲಕ ಸೂಚಿಸಿದೆ.
ಒಂದು ವೇಳೆ ಪೂರ್ವಾನುಮೋದನೆಯನ್ನು ವಡೆಯದೇ ಯಾವುದೇ ವರ್ಗಾವಣೆಗಳನ್ನು ಮಾಡಿದಲ್ಲಿ ಸಂಬಂಧಪಟ್ಟ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಮರನ್ನು ನೇರ ಜವಾಬ್ದಾರರನ್ನಾಗಿಸಿ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸುತ್ತಾ, ಸರ್ಕಾರದ ಸೂಚನೆಯನ್ನು ಚಾಚೂತಪ್ಪದ ಪಾಲಿಸತಕ್ಕದೊಂದು ಸ್ಪಷ್ಟಪಡಿಸಿದೆ.
ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ; ಕರ್ನಾಟಕ ಸರ್ಕಾರದ ವರ್ಗಾವಣೆ ದಂಧೆ ಬಗ್ಗೆ ಪ್ರತಿಪಕ್ಷ ಬಿಜೆಪಿ ಟ್ವೀಟ್ ಮಾಡಿದೆ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಸೋಮವಾರ ಟ್ವೀಟ್ ಮಾಡಿರುವ ಬಿಜೆಪಿ, 'ತಾವೇ ಸ್ಥಾಪಿಸಿ, ಮುಗಿಲೆತ್ತರಕ್ಕೆ ಬೆಳೆಸಿದ್ದ ವರ್ಗಾವಣೆ ದಂಧೆ ಇಲ್ಲವೇ ಇಲ್ಲ ಎಂದು ವಾದಿಸಿದ್ದ ಸಿಎಂ ಸಿದ್ದರಾಮಯ್ಯ, ಈಗ ವರ್ಗಾವಣೆ ದಂಧೆಯನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದಾರೆ' ಎಂದು ಹೇಳಿದೆ.
'ವರ್ಗಾವಣೆಗಳು ಜೂನ್ 01ಕ್ಕೆ ಆರಂಭವಾಗಿ ಜುಲೈ 03ಕ್ಕೆ ಮುಗಿಯಬೇಕಾಗಿತ್ತು, ಆದರೆ ಈಗಾಗುತ್ತಿರುವುದು!!! ಊರೆಲ್ಲಾ ಕೊಳ್ಳೆ ಹೊಡೆದ ಮೇಲೆ, ದಿಡ್ಡಿ ಬಾಗಿಲು ಹಾಕಿದರಂತೆ ಎಂಬ ಮಾತಿನಂತೆ, ಈಗ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡುವ ನಾಟಕವಾಡುತ್ತಿದ್ದಾರೆ' ಎಂದು ಆರೋಪಿಸಿದೆ.












Click it and Unblock the Notifications