ಸರ್ಕಾರಿ ನೌಕರರ ವರ್ಗಾವಣೆಗೆ ಷರತ್ತು ಬದ್ಧ ಅನುಮತಿ
ಬೆಂಗಳೂರು, ಮೇ 31; ಕರ್ನಾಟದಲ್ಲಿ ಅಧಿಕಾರಕ್ಕೆ ಬಂದಿರುವ ಹೊಸ ಸರ್ಕಾರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ. ಒಂದು ಕಡೆ ಡಿಎ ಹೆಚ್ಚಳ ಮಾಡಿದೆ, ಮತ್ತೊಂದು ಕಡೆ ಸರ್ಕಾರಿ ನೌಕರರ ವರ್ಗಾವಣೆಗೆ ಷರತ್ತು ಬದ್ಧ ಅನುಮತಿ ನೀಡಿದೆ. ಆದರೆ ಶಿಕ್ಷಕರ ವರ್ಗಾವಣೆಗೆ ಒಪ್ಪಿಗೆ ಕೊಟ್ಟಿಲ್ಲ.
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ (ಪ್ರ.) ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವಾ ನಿಯಮಗಳು-1) ಹೇಮಲತ ಜಿ. ಈ ಕುರಿತು ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ಆದೇಶ ಸಂಖ್ಯೆ ದಿನಾಂಕ 7/6/2013ರ ಉಲ್ಲೇಖಿಸಿ ಈ ಆದೇಶ ಹೊರಡಿಸಲಾಗಿದೆ. 2023-24ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗಳು ಎಂಬ ವಿಷಯವನ್ನು ಈ ಆದೇಶ ಒಳಗೊಂಡಿದೆ.
ಆದೇಶದ ವಿವರ; ಸರ್ಕಾರಿ ನೌಕರರ ವರ್ಗಾವಣೆ ಕುರಿತಂತೆ ವಿಸ್ತ್ರತವಾದ ಮಾರ್ಗಸೂಚಿಗಳನ್ನು ನೀಡಲಾಗಿದೆ. ಈ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಸದರಿ ಮಾರ್ಗಸೂಚಿಗಳಲ್ಲಿರುವ ಷರತ್ತುಗಳಿಗೊಳಪಟ್ಟು ಮಾಡಬಹುದಾಗಿದೆ.

2023-24ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ/ ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6ರನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲು ನಿರ್ಧರಿಸಿರುವುದರಿಂದ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ ಎಂದು ಹೇಳಿದೆ.
ಸರ್ಕಾರಿ ಆದೇಶ ಸಂಖ್ಯೆ 30/5/2023ರಂತೆ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ಆದೇಶದಲ್ಲಿ ನಮೂದಿಸಿರುವ ಷರತ್ತುಗಳಿಗೊಳಪಟ್ಟು 2023-24ನೇ ಸಾಲಿಗೆ ಗ್ರೂಪ್-ಎ, ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ/ ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6 ರಷ್ಟನ್ನು ಮೀರದಂತೆ ದಿನಾಂಕ 01/06/2023 ರಿಂದ ದಿನಾಂಕ 15/06/2023ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖೆ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ ಎಂದು ತಿಳಿಸಿದೆ.
ಶಿಕ್ಷಕರ ವರ್ಗಾವಣೆ; ಶೇಕಡಾ 6 ರಷ್ಟು ಸರ್ಕಾರಿ ನೌಕರರ ವರ್ಗಾವಣೆ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ. ಈಗಾಗಲೇ ರಾಜ್ಯದಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದೆ. ಬುಧವಾರದಿಂದ ಮಕ್ಕಳು ಶಾಲೆಗೆ ಆಗಮಿಸುತ್ತಿದ್ದಾರೆ. ಆದ್ದರಿಂದ ಶಿಕ್ಷಕರಿಗೆ ವರ್ಗಾವಣೆ ಇಲ್ಲದಂತಾಗಿದೆ.
ಮಾರ್ಚ್ 29ರಂದು ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿತ್ತು. ಆದರೆ ಚುನಾವಣಾ ಆಯೋಗದ ಅನುಮತಿ ಪಡೆದು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳುವುದಾಗಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಭರವಸೆ ನೀಡಿದ್ದರು.
ರಿತೇಶ್ ಕುಮಾರ್ ಸಿಂಗ್ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚುನಾವಣಾ ಆಯೋಗಕ್ಕೆ ಶಿಕ್ಷಕರ ವರ್ಗಾವಣೆ ಕುರಿತು ಪತ್ರ ಬರೆದಿದ್ದಾರೆ. ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗಳಡಿಯಲ್ಲಿ ವರ್ಗಾವಣೆಗಾಗಿ ಶಿಕ್ಷಕರಿಂದ 88,324 ಅರ್ಜಿಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣಾ ಮಾರ್ಗಸೂಚಿಯನ್ವಯ ಹಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಹಾಗೂ ಸಾಮಾನ್ಯ ವರ್ಗಾವಣೆ (ಕೌನ್ಸಿಲಿಂಗ್ ಮುಖಾಂತರ ಮಾತ್ರ) ಪ್ರಕ್ರಿಯೆಯನ್ನು ಮುಂದುವರೆಸಲು ಸಕ್ಷಮ ಪ್ರಾಧಿಕಾರ ಒಪ್ಪಿಗೆ ನೀಡಿದೆ ಎಂದು ಹೇಳಿದ್ದರು.
ಚುನಾವಣಾ ಆಯೋಗ ರಿತೇಶ್ ಕುಮಾರ್ ಸಿಂಗ್ ಅವರ ಪತ್ರಕ್ಕೆ ಮೌಖಿಕ ಸೂಚನೆ ನೀಡಿತ್ತು. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈಗ ವರ್ಗಾವಣೆ ಪ್ರಕ್ರಿಯೆ ಬೇಡ ಎಂದು ಹೇಳಿತ್ತು. ರಾಜ್ಯದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಮೇ 14ರಂದು ತೆರವುಗೊಂಡಿದೆ. ಈಗ ಹೊಸ ಸರ್ಕಾರ ರಚನೆಗೊಂಡಿದೆ. ಆದರೆ ಶೈಕ್ಷಣಿಕ ವರ್ಷ ಆರಂಭಗೊಂಡಿದೆ.











Click it and Unblock the Notifications