Government Employee: ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ವಾಪಸ್
ಬೆಂಗಳೂರು, ಜುಲೈ 25: ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಜುಲೈ 29ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಹೇಳಿದ್ದ ಸರ್ಕಾರಿ ನೌಕರರು ತಮ್ಮ ಮುಷ್ಕರದ ಕರೆಯನ್ನು ವಾಪಸ್ ಪಡೆದಿದ್ದಾರೆ. ಇದರಿಂದಾಗಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮುಜುಗರದಿಂದ ಪಾರಾಗಿದೆ.
ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ವೃಂದಸಂಘಗಳ ಸಭೆಯಲ್ಲಿ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಕರ್ನಾಟಕದ ಸರ್ಕಾರಿ ನೌಕರರು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸು ಜಾರಿಗಾಗಿ ಸರ್ಕಾರವನ್ನು ಒತ್ತಾಯಿಸಿದ್ದರು. ಸರ್ಕಾರ ಈ ಕುರಿತು ತೀರ್ಮಾನ ಕೈಗೊಳ್ಳದ ಕಾರಣ ಅನಿರ್ಧಿಷ್ಟಾವಧಿ ಮುಷ್ಕರದ ಕುರಿತು ಘೋಷಣೆ ಮಾಡಲಾಗಿತ್ತು.
ಚಿಕ್ಕಮಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಜುಲೈ 29ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ತೀರ್ಮಾನವನ್ನು ಕೈಗೊಂಡಿದ್ದರು.
ವೇತನ ಆಯೋಗದ ವರದಿ ಜಾರಿ: ಜುಲೈ 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸು ಜಾರಿಗೆ ಅನುಮೋದನೆ ಸಿಕ್ಕಿದೆ. ಎಲ್. ಅತೀಕ್ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಆರ್ಥಿಕ ಇಲಾಖೆ ಈ ಕುರಿತು ಈಗಾಗಲೇ ಅಧಿಕೃತ ಆದೇಶವನ್ನು ಸಹ ಹೊರಡಿಸಿದ್ದಾರೆ.
ಆದರೆ ಸರ್ಕಾರಿ ನೌಕರರು ನೂತನ ಪಿಂಚಣಿಯ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸುವುದು, ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಉಚಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಸರ್ಕಾರ ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು. ಆದ್ದರಿಂದ 7ನೇ ವೇತನ ಆಯೋಗದ ವರದಿ ಜಾರಿಗೆ ಒಪ್ಪಿಗೆ ಸಿಕ್ಕಿದರೂ ಸಹ ಅನಿರ್ಧಿಷ್ಟಾವಧಿ ಮುಷ್ಕರದ ಕರೆ ವಾಪಸ್ ಪಡೆದಿರಲಿಲ್ಲ.
ಈಗ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ 7ನೇ ವೇತನ ಆಯೋಗದ ಸರ್ಕಾರಿ ಅದೇಶದ ಹಿನ್ನಲೆಯಲ್ಲಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದೆ. ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿಗೊಳಿಸಿರುವ ಮೂರು ರಾಜ್ಯಗಳಿಗೆ ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳನ್ನು ಶೀಘ್ರದಲ್ಲೇ ನಿಯೋಜಿಸಿ ಅವರಿಂದ ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಅಧಿವೇಶನ ಮುಗಿದ ನಂತರ ಅನುಷ್ಠಾನಗೊಳಿಸುವ ಭರವಸೆ ನೀಡಿದೆ.
ಆದ್ದರಿಂದ ಚಿಕ್ಕಮಗಳೂರಿನಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ಚರ್ಚಿಸಿದಂತೆ ಜುಲೈ 29ರಿಂದ ಮುಷ್ಕರ ಮಾಡುವ ನಿರ್ಧಾರವನ್ನು ಕೈ ಬಿಡುವಂತೆ ಜಿಲ್ಲಾಧ್ಯಕ್ಷರು, ವೃಂದ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮನವಿ ಮಾಡಿದ್ದರು. ಆದ್ದರಿಂದ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ.
ಅಲ್ಲದೇ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮುಂದಿನ ತಿಂಗಳಿನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಲು ಅರಮನೆ ಮೈದಾನದಲ್ಲಿ ಬೃಹತ್ ಸಮ್ಮೇಳನವನ್ನು ಆಯೋಜಿಸಲು ತೀರ್ಮಾನವನ್ನು ಕೈಗೊಂಡಿದೆ.












Click it and Unblock the Notifications