ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಸರ್ಕಾರಿ ನೌಕರರ ಬೇಡಿಕೆ ಏನು?
ಬೆಂಗಳೂರು, ಜನವರಿ 10: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳುವುದು, ಉತ್ತೀರ್ಣರಾಗುವುದು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಈಗ ಸರ್ಕಾರಿ ನೌಕರರು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನೀಡಿದ್ದ ಕಾಲಾವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದಾರೆ.
ಈ ಹಿಂದಿನ ಸರ್ಕಾರದ ಆದೇಶದಲ್ಲಿ ದಿನಾಂಕ 31-12-2023ರವರೆಗೆ ಪರೀಕ್ಷೆ ತೆಗೆದುಕೊಳ್ಳಲು ಮತ್ತು ಉತ್ತೀರ್ಣರಾಗಲು ಸಮಯಾವಕಾಶ ವಿಸ್ತರಿಸಿ ಆದೇಶ ಹೊರಡಿಸಲಾಗಿತ್ತು. ಈಗ ಪರೀಕ್ಷೆ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ ಮಾಡಲು ತೀರ್ಮಾನಿಸಲಾಗಿದೆ.

ಜನವರಿ 9ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಅಜಯ್ ನಾಗಭೂಷಣ್ ಅವರನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಹಾಗೂ ಸಂಘದ ಪದಾಧಿಕಾರಿಗಳು ಭೇಟಿ ಮಾಡಿದ್ದರು. ಆಗ ಈ ಕುರಿತು ಮನವಿ ಮಾಡಲಾಗಿದೆ.
ಸರ್ಕಾರಿ ನೌಕರರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯ ದಿನಾಂಕವನ್ನು ವಿಸ್ತರಿಸುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸರ್ಕಾರದ ಕಾರ್ಯದರ್ಶಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಂಘದ ಮನವಿಯಂತೆ ಶೀಘ್ರದಲ್ಲೇ ಈ ಸಂಬಂಧದ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ಬೇಡಿಕೆಯಂತೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳುವುದು, ಉತ್ತೀರ್ಣರಾಗುವುದಕ್ಕೆ ಎರಡು ಬಾರಿ ಕಾಲಾವಧಿ ವಿಸ್ತರಣೆ ಮಾಡಿತ್ತು. ಈಗ ಪುನಃ ಸರ್ಕಾರಿ ನೌಕರರು ಪರೀಕ್ಷೆ ತಗೆದುಕೊಳ್ಳುವ ಕಾಲಾವಧಿ ವಿಸ್ತರಣೆ ಮಾಡಲು ಮನವಿ ಸಲ್ಲಿಕೆ ಮಾಡಿದ್ದಾರೆ.
ಈ ಹಿಂದೆ 2023ರ ಜೂನ್‌ನಲ್ಲಿ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿತ್ತು. ಇನ್ನೂ ಸುಮಾರು 2,00,000 ಅಧಿಕಾರಿಗಳು ಮತ್ತು ನೌಕರರುಗಳು ಹಾಗೂ ನಿಗಮ-ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಬೇಕಿದೆ ಎಂದು ಹೇಳಿತ್ತು. ಆದ್ದರಿಂದ ದಿನಾಂಕ 31/12/2023ರವರೆಗೆ ಸಮಯಾವಕಾಶ ವಿಸ್ತರಿಸಿ, ಆದೇಶ ಹೊರಡಿಸಿತ್ತು.
ಈ ಸುತ್ತೋಲೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ನಿಗಮ-ಮಂಡಳಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಮತ್ತು ಈಗಾಗಲೇ ಪರೀಕ್ಷೆಯನ್ನು ತೆಗೆದುಕೊಂಡು ಅನುತ್ತೀರ್ಣರಾದವರು, ಮತ್ತೆ ನೋಂದಣಿ ಮಾಡಿಕೊಂಡು ದಿನಾಂಕ 31/12/2023ರ ಒಳಗಾಗಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾಗಿರುತ್ತದೆ ಎಂದು ಹೇಳಿತ್ತು.
ಹೊಸದಾಗಿ ಸರ್ಕಾರಿ ಕೆಲಸಕ್ಕೆ ನೌಕರ/ ಸಿಬ್ಬಂದಿಗಳು ಸಹ ತಮ್ಮ ಪರಿವೀಕ್ಷಣಾ ಅವಧಿಯೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯ. ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗುತ್ತಾರೆ ಎಂದು ಈಗಾಗಲೇ ಸರ್ಕಾರ ಸ್ಪಷ್ಟಪಡಿಸಿದೆ.
ಆಡಳಿತವನ್ನು ಚುರುಕುಗೊಳಿಸುವ ಸಲುವಾಗಿ ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸಿದೆ. ಈ ನಿಟ್ಟಿನಲ್ಲಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಂಡು, ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.
ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಅನ್ನು ಅಧಿಸೂಚನೆ ಸಂಖ್ಯೆ: ಸಿಆಸುಇ 43 ಸೇವನೆ 2008 ದಿನಾಂಕ 7/3/2012ರಲ್ಲಿ ರೂಪಿಸಲಾಗಿದೆ. ಸದರಿ ನಿಯಮಗಳು ದಿನಾಂಕ 22/3/2012ರಿಂದ ಜಾರಿಗೆ ಬಂದಿರುತ್ತದೆ. ಕಾಲ ಕಾಲಕ್ಕೆ ಈ ಪರೀಕ್ಷೆಗಳ ಕುರಿತು ಇಲಾಖೆ ಸ್ಪಷ್ಟನೆಗಳನ್ನು ನೀಡಿದೆ.












Click it and Unblock the Notifications