Government Employee; OPS, ನೌಕರರು ಹೋರಾಟಕ್ಕೆ ಸಜ್ಜು
ಬೆಂಗಳೂರು, ಫೆಬ್ರವರಿ 20; ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್ ಮಂಡಿಸಿದರು. ಆದರೆ ಬಜೆಟ್‌ನಲ್ಲಿ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾದ 7ನೇ ವೇತನ ಆಯೋಗದ ವರದಿ ಅನುಷ್ಠಾನ ಹಾಗೂ ಹಳೆ ಪಿಂಚಣಿ ಯೋಜನೆ ಮರು ಸ್ಥಾಪನೆ ಕುರಿತು ಯಾವುದೇ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ.
ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಇದನ್ನು ಖಂಡಿಸಿದೆ. ಈ ಕುರಿತು ಹೋರಾಟ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಹಳೆ ಪಿಂಚಣಿ ಯೋಜನೆ ಜಾರಿ ಬಗ್ಗೆ ಘೋಷಣೆ ಮಾಡದ ಕಾರಣ ಸರ್ಕಾರಿ ನೌಕರರು, ಪಾಲಿಕೆ ನೌಕರರು, ಸ್ಥಳೀಯ ಪುರಸಭೆ, ನಗರಸಭೆ ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ಕಾರಕ್ಕೆ ಪತ್ರ: ಈ ಕುರಿತು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎ. ಅಮೃತ್ ರಾಜ್ ಮಾತನಾಡಿದ್ದು, "2024-25ನೇ ಸಾಲಿನ ಬಜೆಟ್‌ನಲ್ಲಿ 7ನೇ ವೇತನ ಆಯೋಗ ಮತ್ತು ಹಳೆ ಪಿಂಚಣಿ ಯೋಜನೆ ಜಾರಿಯ ಕುರಿತು ಘೋಷಣೆ ಮಾಡುವ ನಿರೀಕ್ಷೆ ಇತ್ತು" ಎಂದರು.
"ಸರ್ಕಾರಿ ನೌಕರರು, ಪಾಲಿಕೆ ನೌಕರರು ಮತ್ತು ಸ್ಥಳೀಯ ಸಂಸ್ಥೆ, ಪುರಸಭೆ, ನಗರಸಭೆ ನೌಕರರು 7ನೇ ವೇತನ ಆಯೋಗದ ವರದಿ ಜಾರಿ, ಹಳೆಯ ಪಿಂಚಣಿ ಯೋಜನೆ ಅನುಷ್ಠಾನದ ಕುರಿತು ಬಜೆಟ್‌ನಲ್ಲಿ ಘೋಷಣೆ ಮಾಡುವ ನಿರೀಕ್ಷೆಯಲ್ಲಿದ್ದರು. ಆದ್ದರಿಂದ ನೌಕರರು ಸೂಕ್ತ ತೀರ್ಮಾನ ಕೈಗೊಂಡು ಹೋರಾಟ ಹಮ್ಮಿಕೊಳ್ಳುತ್ತೇವೆ" ಎಂದು ಹೇಳಿದರು.
"ಹೋರಾಟ ಆರಂಭಿಸುವುದಕ್ಕೂ ಮುನ್ನ ಸರ್ಕಾರಕ್ಕೆ ಸಹ ಪತ್ರವನ್ನು ಬರೆದು ನಮ್ಮ ನಿಲುವನ್ನು ತಿಳಿಸುತ್ತೇವೆ" ಎಂದು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಮೃತ್ ರಾಜ್ ತಿಳಿಸಿದ್ದಾರೆ.
ಫೆಬ್ರವರಿ 16ರಂದು ಸಿದ್ದರಾಮಯ್ಯ 3,71,383 ಕೋಟಿ ರೂ. ಮೊತ್ತದ ಬಜೆಟ್ ಮಂಡಿಸಿದರು. ಆದರೆ ಬಜೆಟ್ ಭಾಷಣದಲ್ಲಿ 7ನೇ ರಾಜ್ಯ ವೇತನ ಆಯೋಗದ ಕುರಿತು ಉಲ್ಲೇಖಿಸಿದರು. ಆದರೆ ಹಳೆ ಪಿಂಚಣಿ ವ್ಯವಸ್ಥೆ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಲಿಲ್ಲ. ಇದರಿಂದಾಗಿ ನೌಕರರು ಆಕ್ರೋಶಗೊಂಡಿದ್ದಾರೆ.
ಭಾಷಣದಲ್ಲಿ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ ವೇತನ ಆಯೋಗವನ್ನು ರಚಿಸಲಾಗಿದ್ದು, ಆಯೋಗದ ವರದಿ ಸ್ವೀಕರಿಸಿದ ನಂತರ ಪರಿಶೀಲಿಸಿ ಕ್ರಮವಹಿಸಲಾಗುತ್ತದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ 7ನೇ ರಾಜ್ಯ ವೇತನ ಆಯೋಗ ರಚನೆ ಮಾಡಲಾಗಿತ್ತು. ಈಗಿನ ಕಾಂಗ್ರೆಸ್ ಸರ್ಕಾರ 2023ರ ನವೆಂಬರ್‌ನಲ್ಲಿ ರಾಜ್ಯ 7ನೇ ವೇತನ ಆಯೋಗದ ಅವಧಿಯನ್ನು 15/3/2024ರ ತನಕ ವಿಸ್ತರಣೆ ಮಾಡಿದೆ. ಆದರೆ ಈ ಬಾರಿಯ ಬಜೆಟ್‌ನಲ್ಲಿ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಯಾವುದೇ ಅನುದಾನವನ್ನು ಮೀಸಲಿಟ್ಟಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಅಧಿವೇಶನದಲ್ಲಿ ಜೆಡಿಎಸ್, ಬಿಜೆಪಿ ಸದಸ್ಯರು ಹಳೆ ಪಿಂಚಣಿ ಯೋಜನೆ ಕುರಿತು ಕೇಳಿದ್ದ ಪ್ರಶ್ನೆಗೆ ವಿಧಾನ ಪರಿಷತ್‌ನಲ್ಲಿ ಉತ್ತರ ನೀಡಿದ್ದರು. ರಾಜ್ಯದಲ್ಲಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದು ಪಡಿಸುವ ಸಂಬಂಧ ಈಗಾಗಲೇ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಯೋಜನೆಯನ್ನು ಅನುಷ್ಠಾನ ಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಕೆ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ತಮ್ಮ ಉತ್ತರದಲ್ಲಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ 5,09,384 ಸರ್ಕಾರಿ ನೌಕರರು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಹಳೆ ಪಿಂಚಣಿ ಯೋಜನೆಗೆ 2,41,260 ನೌಕರರು ಒಳಪಟ್ಟಿದ್ದಾರೆ. ರಾಷ್ಟ್ರೀಯ ಪಿಂಚಣಿ ಯೋಜನೆಗೆ 2,68,124 ನೌಕರರು ಒಳಪಟಿದ್ದಾರೆ ಎಂದು ವಿವರ ನೀಡಿದ್ದಾರೆ.












Click it and Unblock the Notifications