7th Pay Commission: ಬಜೆಟ್‌ನಲ್ಲಿ ಸರ್ಕಾರಿ ನೌಕರರಿಗೆ ಸಿಗಲಿದೆಯಾ ಸಿಹಿ ಸುದ್ದಿ?
ಬೆಂಗಳೂರು, ಫೆಬ್ರವರಿ 13: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರವರಿ 16ರಂದು 2024-25ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಗೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದ ಕಚೇರಿಯಲ್ಲಿ ರಾಜ್ಯ 7ನೇ ವೇತನ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿಯಾಗಿರುವುದು ಕತೂಹಲ ಮೂಡಿಸಿದೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಲಿರುವ ಬಜೆಟ್‌ನಲ್ಲಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ. ಇನ್ನೂ ವೇತನ ಪರಿಷ್ಕರಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಕರ್ನಾಟಕ ರಾಜ್ಯ 7ನೇ ವೇತನ ಆಯೋಗದ ಅಧ್ಯಕ್ಷ ಕೆ.ಸುಧಾಕರ್ ಹಾಗೂ ಸದಸ್ಯರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಅಲ್ಲದೇ ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು, ಕೆಲ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

2024-25 ಸಾಲಿನ ಬಜೆಟ್ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿದ್ದಾರೆ. ಈ ವೇಳೆ, ಏಳನೇ ವೇತನ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಸರ್ಕಾರಿ ನೌಕರರ ನಿರೀಕ್ಷೆ ಹೆಚ್ಚಿಸಿದೆ. ಒಂದು ಮಾಹಿತಿ ಪ್ರಕಾರ ವೇತನ ಪರಿಷ್ಕರಣೆಯ ಕೆಲ ಅಂಶಗಳನ್ನು ಸಿಎಂ ಬಜೆಟ್‌ನಲ್ಲಿ ಘೋಷಿಸಲಿದ್ದಾರೆ ಎಂದು ಹೇಳಲಾಗಿದೆ.
ಇನ್ನೂ 2023 ರ ನವೆಂಬರ್ ನಲ್ಲಿ 7ನೇ ರಾಜ್ಯ ವೇತನ ಆಯೋಗದ ಅವಧಿ ಅಂತ್ಯಗೊಂಡಿತ್ತು. ಆ ವೇಳೆ, ಆಯೋಗದ ಅಧ್ಯಕ್ಷ ಕೆ. ಸುಧಾಕರ್ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹಲವಾರು ವಿಚಾರಗಳ ಕುರಿತು ಚರ್ಚೆ ನಡೆಸಿ, ಅವಧಿ ವಿಸ್ತರಣೆಗೆ ನಿರ್ಧರಿಸಲಾಗಿತ್ತು. ಹೀಗಾಗಿ ಕರ್ನಾಟಕ ರಾಜ್ಯ 7ನೇ ವೇತನ ಆಯೋಗದ ಅವಧಿಯನ್ನು ಮಾಚ್ 15, 2024ರ ತನಕ ವಿಸ್ತರಣೆ ಮಾಡಲಾಗಿದೆ. ಇದೀಗ ಆಯೋಗದ ಅವಧಿ ಅಂತ್ಯಗೊಳ್ಳುವ ಮಾರ್ಚ್ 15ರ ಹೊತ್ತಿಗೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದಿರುವ ನಿರೀಕ್ಷೆ ಇದೆ. ಹೀಗಾಗಿ 2024-25 ರ ಬಜೆಟ್‌ನಲ್ಲಿ ವೇತನ ಆಯೋಗದ ವರದಿ ಕುರಿತು ಯಾವುದಾದರೂ ಘೋಷಣೆ ಮಾಡುವ ಸಾಧ್ಯತೆಗಳಿವೆ.
ಈ ಹಿಂದೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಈ ವೇಳೆ, 7ನೆ ವೇತನ ಆಯೋಗ ರಚನೆಯಾಗಿ 12 ತಿಂಗಳಾಗಿದೆ. ಮಾರ್ಚ್ವರೆಗೆ ಕಾಲಾವಧಿ ವಿಸ್ತರಣೆ ಆಗಿದ್ದು, ಲೋಕಸಭಾ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಮೊದಲೇ ವೇತನ ಪರಿಷ್ಕರಣೆ ಮಾಡಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಲಾಗಿತ್ತು. ಇದೀಗ ಏಳನೇ ವೇತನ ಆಯೋಗದ ಅಧ್ಯಕ್ಷರನ್ನು ಭೇಟಿಯಾಗಿ ಚರ್ಚಿಸಿರುವುದು ಸರ್ಕಾರಿ ನೌಕರರ ಭಾರೀ ಕುತೂಹಲ ಕೆರಳಿಸಿದೆ.












Click it and Unblock the Notifications