Water Supply: ಕರ್ನಾಟಕದ ಈ ಜಿಲ್ಲೆಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್
ಬೆಂಗಳೂರು, ಏಪ್ರಿಲ್ 02: ಬೇಸಿಗೆ ಆರಂಭವಾಗಿ ಎರಡು ತಿಂಗಳು ಕಳೆದಿದೆ. ರಾಜ್ಯದ ವಿವಿಧೆಡೆ ಕುಡಿಯಲು ಹಾಗೂ ಬೆಳೆಗಳಿಗೆ ನೀರಿನ ಸಮಸ್ಯೆ ಉಂಟಾಗಿದೆ. ದನಕರುಗಳು ಬೇಸಿಗೆ ವೇಳೆ ಬಾಯಾಸಿ ಬಸವಳಿಯುತ್ತವೆ. ರೈತರಿಗೆ ಬೇಸಿಗೆ ಬಂತೆಂದರೆ ನೀರಿನದ್ದೆ ಚಿಂತೆಯಾಗುತ್ತದೇ. ಅದರಲ್ಲೂ ಕಲ್ಯಾಣ ಕರ್ನಾಟಕದ ಒಳಗೊಂಡಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಕಂಡು ಬರುತ್ತದೆ. ನೀರಿಗೆ ಹೆಚ್ಚು ಬೇಡಿಕೆ ಇರುವ ರಾಜ್ಯದ ಈ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ನಿಂತ ಬೆಳೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಏ.9 ಅಥವಾ 10ರ ತನಕ ಕಾಲುವೆಗೆ ಮೂರು ಸಾವಿರ ಕ್ಯೂಸೆಕ್ಸ್ ನಂತೆ ನೀರು ಹರಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್. ಎಸ್. ತಂಗಡಗಿ ಅವರು ಮಾಹಿತಿ ನೀಡಿದರು.

ಸರ್ಕಾರದ ಮುಖ್ಯಕಾರ್ಯದರ್ಶಿ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು ತೀರ್ಮಾನ ಕೈಗೊಳ್ಳಲಾಗಿದೆ. ನಮ್ಮ ಸರ್ಕಾರ ರೈತರ ಪರವಾಗಿದೆ. ಕುಡಿಯುವ ನೀರಿಗೂ ಯಾವುದೇ ಸಮಸ್ಯೆಯಾಗದಂತೆ ಕ್ರಮ ವಹಿಸಲಾಗುವುದು ಎಂದರು.
3000 ಕ್ಯೂಸೆಕ್ಸ್ ನೀರು ಹರಿಸಲು ಸೂಚನೆ
ಮಾರ್ಚ್ 21ರಂದು ಬೆಂಗಳೂರಿನಲ್ಲಿ ನಡೆದ ಐಸಿಸಿ ಸಲಹಾ ಸಮಿತಿ ಸಭೆಯಲ್ಲಿ, ತುಂಗಭದ್ರಾ ಎಡದಂಡೆ ಮುಖ್ಯಕಾಲುವೆ ಮೂಲಕ ಏ.9 ಅಥವಾ 10ರವರೆಗೆ ಕುಡಿಯುವ ನೀರು ಒಳಗೊಂಡಂತೆ ಹಾಗೂ ನಿಂತ ಬೆಳೆಗಳ ಸಂರಕ್ಷಣೆಗಾಗಿ 3000 ಕ್ಯೂಸೆಕ್ಸ್ ನಂತೆ ನೀರು ಹರಿಸಲು ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಫಸಲಿಗಾಗಿ ಕಾಯುತ್ತಿರುವ ಬೆಳೆದು ನಿಂತ ಬೆಳೆಗಳಿಗೆ ನೀರು ಒದಗಿಸಲಾಗುವುದು.

ಕೊನೆಯ ಭಾಗದ ರೈತರಿಗೆ ನೀರು ತಲುಪುವಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು. ಈ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದ ರೀತಿಯಲ್ಲಿ ನಿಷೇಧಾಜ್ಞೆ ಮೂಲಕ ನೀರು ಹರಿಸಲಾಗುವುದು. ರೈತರು ಮತ್ತು ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.












Click it and Unblock the Notifications