Siddaramaiah: ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮ: ಮಹತ್ವದ ಮಾಹಿತಿ ನೀಡಿದ ಸಿದ್ದರಾಮಯ್ಯ
ಬೆಂಗಳೂರು, ಮೇ 03: ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಧ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ನ್ಯಾಯಾಧೀಕರಣದ ಅಂತಿಮ ತೀರ್ಪು ಕೇಂದ್ರ ಸರ್ಕಾರದ ಗಜೆಟ್ ಅಧಿಸೂಚನೆಗೆ ಒಳಪಟ್ಟಿದ್ದು, ಈ ಕುರಿತಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಇನ್ನೂ ಅಧಿಸೂಚನೆ ಆಗಿರುವುದಿಲ್ಲ. ನ್ಯಾಯಾಧೀಕರಣದ ಅಂತಿಮ ತೀರ್ಪು ನೀಡಿದ ದಿನಾಂಕದಿಂದ ಇದುವರೆಗೂ 15 ವರ್ಷಗಳೇ ಕಳೆದಿವೆ. ಉತ್ತರ ಕರ್ನಾಟಕದ ಯುಕೆಪಿ-3 ಯೋಜನೆಯ ಪ್ರದೇಶದಲ್ಲಿನ ರೈತರು ತಮ್ಮ ಹಕ್ಕಿನ ಪಾಲನ್ನು ಬಳಸಲು ಬಹಳ ವರ್ಷಗಳಿಂದ ಕಾಯುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಕಾವೇರಿ ಜಲವಿವಾದ ನ್ಯಾಯಮಂಡಳಿ ತೀರ್ಪಿಗೆ ಸಂಬಂಧಿಸಿದಂತೆ ಸಿವಿಲ್ ಮೇಲ್ಮನವಿಗಳು ಬಾಕಿ ಇರುವಾಗಲೂ ಕಾವೇರಿ ನ್ಯಾಯಾಧೀಕರಣದ ತೀರ್ಪು ಪ್ರಕಟಿಸಲು ಸುಪ್ರೀಂಕೋರ್ಟ್ ನಿರ್ದೇಶಿಸಿರುತ್ತದೆ. ಇದೇ ರೀತಿ ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಪ್ರಕಟಣೆಗೆ ಸುಪ್ರೀಂಕೋರ್ಟ್ ದಿನಾಂಕ 20-02-2020ರ ತನ್ನ ಆದೇಶದಲ್ಲಿ ನಿರ್ದೇಶಿಸಿದೆ. ಅದರಂತೆ ಈ ಎರಡೂ ನ್ಯಾಯಾಧೀಕರಣಗಳ ತೀರ್ಪನ್ನು ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿರುತ್ತದೆ. ಇದೇ ರೀತಿಯಲ್ಲಿ ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಲಾಯಿತು.
ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ-II ದಿನಾಂಕ 30-12-2010 ರಂದು ಕೃಷ್ಣಾ ನ್ಯಾಯಾಧೀಕರಣ-2 ರ ತೀರ್ಪು ನೀಡಿದ್ದು, ದಿನಾಂಕ 29-11-2013ರಂದು further report ನೀಡಿರುತ್ತದೆ. ನ್ಯಾಯಾಧೀಕರಣದ ಅಂತಿಮ ತೀರ್ಪಿನಡಿ ಕರ್ನಾಟಕ ರಾಜ್ಯಕ್ಕೆ 173 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿರುತ್ತದೆ. ಈ ಪೈಕಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಯೋಜನೆಗೆ 130 ಟಿಎಂಸಿ ಹಂಚಿಕೆ ನಿಗದಿಪಡಿಸಿರುತ್ತದೆ. ಆದರೆ ನ್ಯಾಯಮಂಡಳಿಯ ವರದಿ ಮತ್ತು ನ್ಯಾಯಾಧೀಕರಣದ ಅಂತಿಮ ಆದೇಶ ಪ್ರಶ್ನಿಸಿ ಆಂಧ್ರಪ್ರದೇಶ ಸುಪ್ರೀಂಕೋರ್ಟ್ನಲ್ಲಿ ಎಸ್ಎಲ್ಪಿ ದಾಖಲಿಸಿದೆ. ಈ ಕುರಿತು ಸುಪ್ರೀಂಕೋರ್ಟ್ ತನ್ನ ದಿನಾಂಕ 16-09-2011 ರ ಆದೇಶದಲ್ಲಿ ʻʻತನ್ನ ಮುಂದಿನ ಆದೇಶದವರೆಗೆ ನ್ಯಾಯಾಧೀಕರಣ ತೆಗೆದುಕೊಳ್ಳಬಹುದಾದ ಯಾವುದೇ ನಿರ್ಧಾರಗಳ ಅಧಿಸೂಚನೆ ಪ್ರಕಟಿಸದಂತೆ ಆದೇಶ ನೀಡಿತ್ತು.
ಕೃಷ್ಣಾ ಜಲವಿವಾದ ನ್ಯಾಯಮಂಡಳಿ -2 ದಿನಾಂಕ 30-12- 2010 ರಲ್ಲಿ ತೀರ್ಪು ನೀಡಿದ ನಂತರ 2013 ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ತದನಂತರ ಈವರೆಗೆ ಕೇಂದ್ರ ಸರ್ಕಾರ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರದ ನೀರಾವರಿ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಿದ ನಂತರ ಸಭೆಯನ್ನು ಕರೆಯಲಾಗಿದೆ.
ಎರಡನೇ ನ್ಯಾಯಾಧಿಕರಣದ ಆದೇಶದಲ್ಲಿ 173 ಟಿ.ಎಂ.ಸಿ ನೀರನ್ನು ಬಳಸಿಕೊಳ್ಳಲು ಸೂಚಿಸಿದೆ. 519 ಮೀಟರ್ ಗಳಿಂದ 524 ಮೀಟರ್ ಗಳಿಗೆ ಅಣೆಕಟ್ಟಿನ ಎತ್ತರವನ್ನು ಹೆಚ್ಚಿಸಿದರೆ ಕರ್ನಾಟಕಕ್ಕೆ ಹಂಚಿಕೆ ಮಾಡಿರುವ ನೀರನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತದೆ. ಅದಕ್ಕಾಗಿ ಗೆಜೆಟ್ ಅಧಿಸೂಚನೆ ಹೊರಡಿಸಬೇಕು. ಸಭೆಯಲ್ಲಿಯೂ ಈ ಬಗ್ಗೆ ಒತ್ತಾಯಿಸಲಾಗುವುದು ಎಂದ ಮುಖ್ಯಮಂತ್ರಿಗಳು ತೆಲಂಗಾಣ ಮತ್ತು ಆಂಧ್ರ ಪ್ರದೇಶ ಕೂಡ ಅರ್ಜಿ ಹಾಕಿಕೊಂಡಿದೆ. ಅವರು ತಮ್ಮ ಪಾಲಿಗೆ ಹಂಚಿಕೆಯಾಗಿರುವದನ್ನು ಬಳಸಿಕೊಳ್ಳಲಿ . ಈ ಬಗ್ಗೆ ನಾವು ಒತ್ತಾಯ ಮಾಡಿದ್ದು, ಸರ್ವೋಚ್ಛ ನ್ಯಾಯಾಲಯದಿಂದ ಯಾವುದೇ ಮಧ್ಯಂತರ ಆದೇಶ ಹೊರಡಿಸದ ಕಾರಣ 524 ಮೀಟರ್‌ಗಳಿಗೆ ಹೆಚ್ಚಿಸುವ ಕೆಲಸವನ್ನು ಮಾಡುತ್ತೇವೆ ಎಂದರು.
ಆಲಮಟ್ಟಿ ಅಣೆಕಟ್ಟೆಯ ಎತ್ತರ ಹೆಚ್ಚಿಸಲು ಆಗ್ರಹ: ಎಚ್.ಕೆ ಪಾಟೀಲ
ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519 ಮೀಟರನಿಂದ 524.256 ವರೆಗೆ ಎತ್ತರಿಸಲು ಕಾನೂನಾತ್ಮಕವಾಗಿ ಯಾವುದೇ ತೊಡಕುಗಳು ಇಲ್ಲದೇ ಇರುವುದರಿಂದ ಅಣೆಕಟ್ಟೆಯ ಎತ್ತರವನ್ನು ಹೆಚ್ಚಳ ಮಾಡಬೇಕೆಂದು ಉತ್ತರ ಕರ್ನಾಟಕದ ಸಚಿವರು ಇಂದಿನ ಸಭೆಯಲ್ಲಿ ಮುಖ್ಯಮಂತ್ರಿಯವರನ್ನು ಒತ್ತಾಯಿಸಿರುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ ರವರು ಇಂದಿಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
"ಕೃಷ್ಣಾ ನ್ಯಾಯಾಧೀಕರಣ-2ರ ಗೆಜೆಟ್ ಅಧಿಸೂಚನೆ" ಮಾನ್ಯ ಕೇಂದ್ರ ಜಲಸಂಪನ್ಮೂಲ ಸಚಿವರು ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಜೊತೆಗೆ ದಿನಾಂಕ: 07.05.2025 ರಂದು ಕರೆದಿರುವ ಸಭೆಯ ಹಿನ್ನೆಲೆಯಲ್ಲಿ ಇಂದು ತಮ್ಮ ನಿವಾಸದಲ್ಲಿ ಕರೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು ಹೆಚ್ಚಿಸಲು ಯಾವುದೇ ಕಾನೂನಿನ ತೊಡಕುಗಳಿಲ್ಲವೆಂದು ಕಾನೂನು ತಜ್ಞರ ಅಭಿಪ್ರಾಯವಾಗಿದೆ.
ಈ ಹಿನ್ನೆಲೆಯಲ್ಲಿ ಹೊಸ ಗೇಟ್ ಅಳವಡಿಸಲು ಯಾವುದೇ ತೊಡಕು ಇಲ್ಲವೆಂದು ಕಾವೇರಿ ಐತೀರ್ಪು ಮತ್ತು ಮಹದಾಯಿ ಐತೀರ್ಪುಗಳು ಗೆಜೆಟ್ ಅಧಿಸೂಚನೆ ಹೊರಡಿಸಿದಂತೆ ಕೃಷ್ಣಾ ಜಲವಿವಾದ ನ್ಯಾಯಾಧೀಕರಣ-2 ಬ್ರಿಜೇಶ್ ಕುಮಾರ ಆಯೋಗದ ಐತೀರ್ಪನ್ನು ಸಹ ಗೆಜೆಟ್ ಪ್ರಕಟಣೆ ಮಾಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತವಾಯಿತೆಂದು ಸಚಿವ ಪಾಟೀಲ ತಿಳಿಸಿದರು.
ಕೃಷ್ಣಾ ಜಲವಿವಾದ ನ್ಯಾಯಾಧೀಕರಣ-2ರ ಐತೀರ್ಪು ಪ್ರಕಟವಾಗಿ 15 ವರ್ಷಗಳು ಗತಿಸಿವೆ. ಐತೀರ್ಪಿನ ಅವಧಿ 40 ವರ್ಷದ್ದಾಗಿದೆ. ಹೀಗೆಯೇ ಇನ್ನೈದು ವರ್ಷ ಕಳೆದರೆ ಐತೀರ್ಪು ಅನುಷ್ಠಾನದ ಅರ್ಧ ಅವಧಿ ಪೂರ್ಣಗೊಳ್ಳುತ್ತದೆ. ಬಾಕಿ ಉಳಿದ ಅವಧಿಯಲ್ಲಿ ಕರ್ನಾಟಕ ತನ್ನ ಹಕ್ಕಿನ ನೀರನ್ನು ಬಳಸಿಕೊಳ್ಳುವಲ್ಲಿ ಯಾವುದೇ ರೀತಿಯಲ್ಲಿ ನ್ಯಾಯ ದೊರಕಿಸಿದಂತಾಗುವುದಿಲ್ಲ ಎಂದು ಸಚಿವರು ಹೇಳಿದರು. ರೈತರ ಹೊಲಗಳಿಗೆ ಹರಿಯಬೇಕಾದ ನೀರು ಸಮುದ್ರಕ್ಕೆ ಹರಿದು ವ್ಯರ್ಥವಾಗುತ್ತಿದೆ.
16 ಸಾವಿರ ಕೋಟಿ ರೂಪಾಯಿಯ ಬಂಡವಾಳ ಹೂಡಿ ಕೃಷ್ಣಾ ಮೇಲ್ದಂಡೆ ಯೋಜನೆ-3 ಅಡಿಯಲ್ಲಿ ಕಾಲುವೆ ಜಾಲ ನಿರ್ಮಾಣ ಮಾಡಲಾಗಿದೆ. ಆದರೆ, ಈ ಕಾಲುವೆಯ ಜಾಲ ವ್ಯರ್ಥವಾಗುತ್ತಿದೆ ಎಂದು ತಿಳಿಸಿದರು. ಕರ್ನಾಟಕದ ನ್ಯಾಯಯುತ ಹಕ್ಕಿಗೆ ಕೇಂದ್ರ ಸರ್ಕಾರ ಕೊಡಲಿಪೆಟ್ಟು ಹಾಕಿ ರಾಜ್ಯದ ಹಕ್ಕನ್ನು ನಿರಾಕರಿಸಿ ಕೆಳದಂಡೆ ರಾಜ್ಯಗಳಾದ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳು ಕರ್ನಾಟಕದ ಪಾಲಿನ ನೀರನ್ನು ಬಳಕೆ ಮಾಡಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸುತ್ತಿದೆ ಎಂದು ಆರೋಪಿಸಿದರು.
ಪ್ರವಾಹ ಪರಿಸ್ಥಿತಿಯು ಸಹ ನಮ್ಮನ್ನು ಬಾಧಿಸುತ್ತಿದ್ದು, ಕಳೆದ 5 ವರ್ಷಗಳಲ್ಲಿ ಐದೂ ವರ್ಷವು ಪ್ರವಾಹದಿಂದ ಕೃಷ್ಣಾ ನದಿ ಪಾತ್ರದ ಬಹುತೇಕ ಭಾಗ ಪ್ರವಾಹಪೀಡಿತವಾಗಿ ಜನತೆ ಸಂಕಷ್ಟಕ್ಕೀಡಾಗಿದ್ದಾರೆ. ಪ್ರವಾಹ ನಿರ್ವಹಣೆಗಾಗಿ ನಾವು ಈ ನೀರನ್ನು ಕಾಲುವೆಗೆ ಹರಿಸಿಕೊಳ್ಳಬಹುದು ಎಂಬ ರಚನಾತ್ಮಕ ಸಲಹೆಯನ್ನು ಸಭೆಯಲ್ಲಿ ನೀಡಿರುವುದಾಗಿ ಮಾನ್ಯ ಸಚಿವರು ತಿಳಿಸಿದರು. ಈ ಸಭೆಯಲ್ಲಿ ಉತ್ತರ ಕರ್ನಾಟಕದ ಸಚಿವರಾದ ಎಂ.ಬಿ ಪಾಟೀಲ, ಶಿವಾನಂದ ಪಾಟೀಲ ಮತ್ತು ಆರ್.ಬಿ ತಿಮ್ಮಾಪೂರ ಹಾಗೂ ಶರಣಬಸಪ್ಪ ದರ್ಶನಾಪೂರ ಅವರು ಉಪಸ್ಥಿತರಿದ್ದು, ಸರ್ವಾನುಮತದಿಂದ ಉತ್ತರ ಕರ್ನಾಟಕದ ಹಿತರಕ್ಷಣೆಯ ಬಗ್ಗೆ ಮಾತನಾಡಿದರು ಎಂದು ಸಚಿವರಾದ ಹೆಚ್ ಕೆ ಪಾಟೀಲ್ ಅವರು ತಿಳಿಸಿದರು.
ಇನ್ನೂ ಸಭೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪುರ್, ಶರಣಬಸಪ್ಪ ಗೌಡ ದರ್ಶನಾಪುರ, ಮಹಾದೇವಪ್ಪ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ನ್ಯಾಯವಾದಿ ಮೋಹನ್ ಕಾತರ್ಕಿ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications