ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ; ನೇಮಕಾತಿ ಪತ್ರ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯದ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ ಮನೆಮಾತಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಸೇವೆಯಲ್ಲಿರುವಾಗಲೇ ನಿಧನ ಹೊಂದಿದ್ದ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯಾ ಎಂ.ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹಸ್ತಾಂತರಿಸಿದರು.
ಕುಟುಂಬದ ಭದ್ರತೆಗೆ ಅನುಕಂಪದ ನೇಮಕಾತಿ
ಈ ವೇಳೆ ಮಾತನಾಡಿದ ಮುಖ್ಯಮಂತ್ರಿ, ತಮ್ಮ ತಂದೆಯಂತೆ ಸಮಾಜಮುಖಿಯಾಗಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ಚೈತನ್ಯಾ ಅವರಿಗೆ ಶುಭ ಕೋರಿದರು. ಸರ್ಕಾರದ ನೌಕರನಾಗಿ ಮಹಾಂತೇಶ್ ಬೀಳಗಿ ಅವರು ಸಲ್ಲಿಸಿದ್ದ ಸೇವೆಯನ್ನು ಸ್ಮರಿಸಿದ ಸಿಎಂ ಸಿದ್ದರಾಮಯ್ಯ ಅವರು, ಬೀಳಗಿ ಅವರ ಅಕಾಲಿಕ ನಿಧನದಿಂದ ಕುಟುಂಬಕ್ಕೆ ಉಂಟಾದ ನೋವನ್ನು ಸರ್ಕಾರ ಮನಗಂಡಿದ್ದು, ಕುಟುಂಬದ ಭದ್ರತೆಗೆ ಅನುಕಂಪದ ನೇಮಕಾತಿ ನೀಡಲಾಗಿದೆ ಎಂದು ಹೇಳಿದರು. ಈ ವೇಳೆ ಸಚಿವರಾದ ಹೆಚ್.ಕೆ. ಪಾಟೀಲ್, ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು.

ಹಿರಿಯ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಸೇವೆಯಲ್ಲಿದ್ದಾಗಲೇ ರಸ್ತೆ ಅಪಘಾತದಲ್ಲಿ ಅಕಾಲಿಕವಾಗಿ ನಿಧನರಾಗಿದ್ದರು. ಅವರ ನಿಧನದಿಂದ ಉಂಟಾದ ಕುಟುಂಬದ ಆರ್ಥಿಕ ಸಂಕಷ್ಟವನ್ನು ಮನಗಂಡು, ಕರ್ನಾಟಕ ಸರ್ಕಾರವು ಅವರ ಪುತ್ರಿ ಚೈತನ್ಯಾ ಎಂ.ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲು ಈ ಹಿಂದೆ ಆದೇಶಿಸಿತ್ತು.
ಸಚಿವಾಲಯದಲ್ಲಿ ಸಹಾಯಕ ಹುದ್ದೆ
ಕರ್ನಾಟಕ ನಾಗರಿಕ ಸೇವೆಗಳು (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996ರ ನಿಯಮ 6(1)ರ ಅನ್ವಯ, ಚೈತನ್ಯಾ ಎಂ.ಬೀಳಗಿಯನ್ನು ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಸಹಾಯಕ ಹುದ್ದೆಗೆ ನೇಮಕ ಮಾಡಲಾಗಿದ್ದು, ಈ ನೇಮಕಾತಿ ಎರಡು ವರ್ಷಗಳ ಪರೀಕ್ಷಾರ್ಥ ಅವಧಿಗೆ ಹಾಗೂ ಸರ್ಕಾರ ನಿಗದಿಪಡಿಸಿದ ಷರತ್ತುಗಳಿಗೆ ಒಳಪಟ್ಟು ಇರಲಿದೆ. ನೇಮಕಾತಿ ಪತ್ರ ಸ್ವೀಕರಿಸಿದ ದಿನದಿಂದ 15 ದಿನಗಳ ಒಳಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಳ್ಳಿ ಕ್ರಾಸ್ ಬಳಿ ನಡೆದ ಕಾರು ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಅವರು ಮೃತಪಟ್ಟಿದ್ದರು. ಆಗ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರ ಸೇವೆಯನ್ನು ಗೌರವಿಸಿ, ಕುಟುಂಬಕ್ಕೆ ನ್ಯಾಯ ಒದಗಿಸುವ ಉದ್ದೇಶದಿಂದ ಈ ಅನುಕಂಪದ ಉದ್ಯೋಗ ನೀಡಬೇಕು ಎಂಬ ಆಗ್ರಹ ಕೇಳಿಬಂದಿತ್ತು. ಈ ಸಂಬಂಧ ಜನವರಿ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅವರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ಇದೀಗ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲೂ ಮೆಚ್ಚುಗೆ ವ್ಯಕ್ತವಾಗಿದೆ.












Click it and Unblock the Notifications