ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; ಜಲಸಂಪನ್ಮೂಲ ಇಲಾಖೆಯ ಖಾಲಿ ಹುದ್ದೆಗಳು ಭರ್ತಿ
ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸುವ ಕುರಿತು ಸಚಿವ ಎನ್. ಚೆಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ.
ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಗಳ ನಿರ್ದೇಶನಾಲಯದ ಸಭೆಯು ಸಚಿವ ಎನ್. ಚೆಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯಿತು. CADA ವ್ಯಾಪ್ತಿಯಲ್ಲಿ ಹಲವು ಹುದ್ದೆಗಳು ಖಾಲಿ ಇರುವ ಪರಿಣಾಮ ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದನ್ನ ಗಂಭೀರವಾಗಿ ಪರಿಗಣಿಸಲಾಗಿದೆ.ಯೋಜನೆಗಳನ್ನ ನಿಗದಿತ ಅವಧಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ, ನಿರ್ದೇಶನಾಲಯದ ವ್ಯಾಪ್ತಿಯಲ್ಲಿರುವ ಎಲ್ಲಾ ಖಾಲಿ ಹುದ್ದೆಗಳನ್ನ ಕೂಡಲೇ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಕುರಿತು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನಿರ್ದೇಶನವೂ ಇರುವ ಹಿನ್ನೆಲೆಯಲ್ಲಿ, ಯಾವುದೇ ವಿಳಂಬಕ್ಕೆ ಅವಕಾಶ ನೀಡದೆ ನೇಮಕಾತಿ ಪ್ರಕ್ರಿಯೆಯನ್ನ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದರು.
ಕೃಷಿ ಉತ್ಪಾದಕತೆ ಹೆಚ್ಚಳಕ್ಕೆ ಸಮಗ್ರ ಕ್ರಮ
ಅಚ್ಚುಕಟ್ಟು ಪ್ರದೇಶಗಳಲ್ಲಿ ನೀರಾವರಿ ಸೌಲಭ್ಯ ದೊರೆಯುವುದರ ಜೊತೆಗೆ ಕೃಷಿ ಉತ್ಪಾದಕತೆ ಹೆಚ್ಚಳ, ಸೂಕ್ತ ಬೆಳೆ ಪದ್ಧತಿಗಳ ಉತ್ತೇಜನ ಹಾಗೂ ರೈತರಿಗೆ ಅಗತ್ಯವಿರುವ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದರು.
ಭೂಮಿಯ ಉತ್ಪಾದಕತೆ ಕುಂಠಿತವಾಗಿರುವ ಪ್ರದೇಶಗಳನ್ನ ಗುರುತಿಸಿ ಭೂಮಿ ಪುನಶ್ಚೇತನ ಕಾರ್ಯಗಳನ್ನ ಕೈಗೊಳ್ಳಬೇಕು. ಅಚ್ಚುಕಟ್ಟು ಪ್ರದೇಶಗಳಲ್ಲಿನ ಸಮಸ್ಯೆಗಳನ್ನ ಸ್ಥಳೀಯವಾಗಿ ಗುರುತಿಸಿ, ಅಗತ್ಯವಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನ ಆದ್ಯತೆಯ ಮೇರೆಗೆ ಕೈಗೊಳ್ಳುವಂತೆ ಸೂಚಿಸಿದರು.
ಯೋಜನೆಗಳ ಅನುಷ್ಠಾನಕ್ಕೆ ನಿರಂತರ ನಿಗಾ
CADA ವ್ಯಾಪ್ತಿಯಲ್ಲಿ ಕೈಗೊಳ್ಳುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ವಾರ್ಷಿಕ ಕ್ರಿಯಾ ಯೋಜನೆಗಳನ್ನ ಸಮರ್ಪಕವಾಗಿ ರೂಪಿಸಿ, ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳಿಸಬೇಕು. ಕಾಮಗಾರಿಗಳ ಗುಣಮಟ್ಟ ಹಾಗೂ ಪ್ರಗತಿಯ ಮೇಲೆ ನಿರಂತರ ನಿಗಾ ವಹಿಸುವಂತೆ ಸಚಿವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
CADA ಪ್ರಾಧಿಕಾರಗಳು ಸಂಬಂಧಿಸಿದ ಇಲಾಖೆಗಳು, ನೀರಾವರಿ ಬಳಕೆದಾರರ ಸಂಘಗಳು ಹಾಗೂ ತಾಂತ್ರಿಕ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು. ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿಯನ್ನ ನೀರಿನ ಸಮರ್ಪಕ ಬಳಕೆ, ಕೃಷಿ ಉತ್ಪಾದನೆ ಹೆಚ್ಚಳ ಮತ್ತು ರೈತರ ಹಿತಾಸಕ್ತಿಯನ್ನ ಕೇಂದ್ರವಾಗಿಟ್ಟುಕೊಂಡು ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಕೃಷಿ ಉತ್ಪಾದಕತೆ ಹೆಚ್ಚಳ
ರಾಜ್ಯದ ನೀರಾವರಿ ಯೋಜನೆಗಳ ಅಚ್ಚುಕಟ್ಟು ಪ್ರದೇಶಗಳಲ್ಲಿ ನೀರಿನ ಸಮರ್ಪಕ ಬಳಕೆ, ಕೃಷಿ ಉತ್ಪಾದಕತೆ ಹೆಚ್ಚಳ ಹಾಗೂ ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗುವಂತೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಗಳ (CADA) ಕಾರ್ಯಚಟುವಟಿಕೆಗಳನ್ನ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಲಸಂಪನ್ಮೂಲ ಸಚಿವ ಎನ್. ಚೆಲುವರಾಯಸ್ವಾಮಿ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ CADA ಪ್ರಾಧಿಕಾರಗಳ ಕಾರ್ಯನಿರ್ವಹಣೆ, ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿ, ನೀರಾವರಿ ವ್ಯವಸ್ಥೆಯ ಸಮರ್ಪಕ ನಿರ್ವಹಣೆ, ನೀರಾವರಿ ಬಳಕೆದಾರರ ಸಂಘಗಳ ಬಲವರ್ಧನೆ ಹಾಗೂ ರೈತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕುರಿತು ವಿವರವಾಗಿ ಚರ್ಚಿಸಿದರು ಹಾಗೂ ಈಗಾಗಲೇ ಕಾಮಗಾರಿ ನಡೆದಿರುವ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡಿ ಕಾಮಗಾರಿ ಪರಿಶೀಲಿಸುತ್ತೇನೆ ಎಂದು ತಿಳಿಸಿದರು.
ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿ ಕಾಮಗಾರಿಗಳು ಕೇವಲ ಮೂಲಸೌಕರ್ಯ ನಿರ್ಮಾಣಕ್ಕೆ ಸೀಮಿತವಾಗದೆ, ರೈತರಿಗೆ ನೇರವಾಗಿ ಪ್ರಯೋಜನವಾಗುವ ರೀತಿಯಲ್ಲಿ ಹಾಗೂ ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಪೂರಕವಾಗುವಂತೆ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
government jobs: WUCSಗಳ ಬಲವರ್ಧನೆಗೆ ಒತ್ತು
ನೀರಾವರಿ ಬಳಕೆದಾರರ ಸಂಘಗಳು ಅಚ್ಚುಕಟ್ಟು ಪ್ರದೇಶಗಳ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಅವುಗಳ ಕಾರ್ಯಚಟುವಟಿಕೆಗಳನ್ನ ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಸಚಿವರು ತಿಳಿಸಿದರು.
ನೀರಿನ ಸಮರ್ಪಕ ಹಂಚಿಕೆ ಮತ್ತು ಬಳಕೆಯಲ್ಲಿ ರೈತರ ಪಾಲ್ಗೊಳ್ಳುವಿಕೆಯನ್ನ ಹೆಚ್ಚಿಸುವುದು, ನೀರಿನ ಮಿತವ್ಯಯದ ಬಳಕೆ ಕುರಿತು ಜಾಗೃತಿ ಮೂಡಿಸುವುದು ಹಾಗೂ ಅಚ್ಚುಕಟ್ಟು ಪ್ರದೇಶಗಳ ನಿರ್ವಹಣೆಯಲ್ಲಿ ರೈತರ ಸಹಭಾಗಿತ್ವವನ್ನ ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


Click it and Unblock the Notifications
