188 ಹೊಸ ಇಂದಿರಾ ಕ್ಯಾಂಟೀನ್ ಆರಂಭ, ಮೆನು ಶೀಘ್ರವೇ ಬದಲು
ಬೆಂಗಳೂರು, ಆಗಸ್ಟ್ 20: ಇಂದಿರಾ ಕ್ಯಾಂಟೀನ್ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಸಿನ ಯೋಜನೆ. ಬಡವರಿಗೆ, ಕಾರ್ಮಿಕರಿಗೆ ಅನುಕೂಲವಾಗಲು ಕಡಿಮೆ ದರದಲ್ಲಿ ಉಪಹಾರ, ಊಟ ನೀಡುವ ಯೋಜನೆ ಇದು. ಮೊದಲ ಬಾರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಯೋಜನೆಗೆ ಚಾಲನೆ ನೀಡಲಾಗಿತ್ತು.
ಹಲವಾರು ಕಡೆ ಇಂದಿರಾ ಕ್ಯಾಂಟೀನ್ ಚೆನ್ನಾಗಿ ನಡೆಯತ್ತಿದೆ. ಆದರೆ ಕೆಲವು ಕಡೆ ಮುಚ್ಚಿ ಹೋಗುವ ಹಂತಕ್ಕೆ ಬಂದಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಸರ್ಕಾರ ರಚನೆ ಮಾಡಿ, ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಿದ್ದಾರೆ.

ಈಗ ಇಂದಿರಾ ಕ್ಯಾಂಟೀನ್ ಯೋಜನೆಗೆ ಮತ್ತೆ ಚಾಲನೆ ನೀಡಲಾಗುತ್ತದೆ. ಅಲ್ಲದೇ ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದ ಇತರ ಕಡೆ 188 ಹೊಸ ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡಲು ಸಹ ಕರ್ನಾಟಕ ಸರ್ಕಾರ ತೀರ್ಮಾನ ಕೈಗೊಂಡಿದೆ.
ಸಚಿವ ಸಂಪುಟ ಸಭೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶನಿವಾರ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಇತರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್‌ಗಳನ್ನ ಆರಂಭಿಸಲು ಒಪ್ಪಿಗೆ ನೀಡಲಾಗಿದೆ.
ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಕಾನೂನು & ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್. ಕೆ. ಪಾಟೀಲ್, "ಈಗ ರಾಜ್ಯದಲ್ಲಿ 197 ಇಂದಿರಾ ಕ್ಯಾಂಟೀನ್‌ಗಳಿವೆ. ಅವುಗಳ ಜೊತೆಗೆ ಹೊಸದಾಗಿ 188 ಕ್ಯಾಂಟೀನ್‌ಗಳ ಆರಂಭಕ್ಕೆ ವಿಸ್ತ್ರತ ಯೋಜನಾ ವರದಿ ರೂಪಿಸುವಂತೆ ನಗರಾಭಿವೃದ್ಧಿ ಇಲಾಖೆಗೆ ಸೂಚಿಸಲಾಗಿದೆ" ಎಂದರು.
ಸಭೆಯಲ್ಲಿ ಇಂದಿರಾ ಕ್ಯಾಂಟೀನ್‌ನಲ್ಲಿ ಹೊಸ ಮೆನು ಪರಿಚಯಿಸಲು ಸಹ ತೀರ್ಮಾನಿಸಲಾಗಿದೆ. ಇಂದಿರಾ ಕ್ಯಾಂಟೀನ್‌ಗಳಲ್ಲಿ ಒಂದು ದಿನಕ್ಕೆ ಒಬ್ಬರಿಗೆ ಆಹಾರ ಪೂರೈಕೆಗೆ 62 ರೂ. ದರವನ್ನು ನಿಗದಿ ಮಾಡಲಾಗಿದೆ. ಇದರಲ್ಲಿ ಎರಡು ಊಟ, ಒಂದು ಹೊತ್ತಿನ ಉಪಹಾರ ಸೇರಿದೆ. ಗ್ರಾಹಕರು 25 ರೂ. ಪಾವತಿಸಬೇಕು, ಸರ್ಕಾರ 37 ರೂ. ಸಹಾಯಧನ ನೀಡಲಿದೆ.
ಸ್ಥಳೀಯವಾಗಿ ಹೆಚ್ಚು ಬಳಕೆ ಮಾಡುವ ಆಹಾರ ಪದಾರ್ಥಗಳನ್ನು ಊಟದಲ್ಲಿ ಪೂರೈಕೆ ಮಾಡಲಾಗುತ್ತದೆ. ಇದಕ್ಕೆ ಅನುಗುಣವಾಗಿ ಇಂದಿರಾ ಕ್ಯಾಂಟೀನ್‌ನ ಮೆನುವನ್ನು ಬದಲಾವಣೆ ಮಾಡಲಾಗುತ್ತದೆ. ಈಗಾಗಲೇ ಇರುವ 197 ಇಂದಿರಾ ಕ್ಯಾಂಟೀನ್‌ಗಳ ದುರಸ್ತಿಗಾಗಿ 21.29 ಕೋಟಿ ಅನುದಾನ ಒದಗಿಸುವ ಪ್ರಸ್ತಾಪಕ್ಕೆ ಸಹ ಸಚಿವ ಸಂಪುಟ ಸಭೆ ಒಪ್ಪಿಗೆ ಕೊಟ್ಟಿದೆ.
ದರ ಪರಿಷ್ಕರಣೆ ಇಲ್ಲ; ಸಿದ್ದರಾಮಯ್ಯ 2ನೇ ಬಾರಿಗೆ ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಇಂದಿರಾ ಕ್ಯಾಂಟೀನ್‌ಗಳ ಪುನಶ್ಚೇತನಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಕ್ಯಾಂಟೀನ್ ಆಹಾರ ಕ್ರಮದಲ್ಲಿ ಬದಲಾವಣೆ ಮಾಡಲಾಗುತ್ತದೆ. ಆದರೆ ಉಪಹಾರ, ಊಟದ ದರವನ್ನು ಪರಿಷ್ಕರಣೆ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.
ಈ ಕುರಿತು ಸರಣಿ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, 'ಇಂದಿರಾ ಕ್ಯಾಂಟೀನ್‌ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಕರೆಯಲಾಗುವ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನ: ಚಾಲನೆ ನೀಡಲಾಗುವುದು' ಎಂದು ಹೇಳಿದ್ದರು.
'ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ. 70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ. 30 ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ' ಎಂದು ಟ್ವೀಟ್ ಮಾಡಿದ್ದರು.












Click it and Unblock the Notifications