Government: ಹಾಸನ ಐಐಟಿ ಕನಸಿಗೆ ಭೂಮಿ ಸಿದ್ಧ; ರೈತರಿಗೆ ಬಾಕಿ ಪರಿಹಾರಕ್ಕೂ ಸೂಚನೆ: ಬಿಗ್ ಅಪ್‌ಡೇಟ್ ಕೊಟ್ಟ ಶಿವಲಿಂಗೇಗೌಡ
ಬೆಂಗಳೂರು: ಹಾಸನಕ್ಕೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮಂಜೂರಾದರೆ ಅಗತ್ಯವಿರುವ ಭೂಮಿಯನ್ನು ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಐಐಟಿ ಸ್ಥಾಪನೆಗೆ ಅಗತ್ಯ ಭೂಮಿಯನ್ನು ಜಿಲ್ಲಾಡಳಿತದ ವತಿಯಿಂದ ತಿಂಗಳೊಳಗೆ ಒದಗಿಸಲಾಗುವುದು ಎಂದು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಂ. ಶಿವಲಿಂಗೇಗೌಡ ಭರವಸೆ ನೀಡಿದರು.
ವಿಕಾಸಸೌಧದಲ್ಲಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಹಾಸನದಲ್ಲಿ ಐಐಟಿ ಕಾಲೇಜಿಗೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಐಐಟಿ ಸ್ಥಾಪನೆಗೆ ಸಂಬಂಧಿಸಿದ ಭೂಮಿ, ಕೈಗಾರಿಕಾ ಪ್ರದೇಶದ ಅಭಿವೃದ್ಧಿ ಹಾಗೂ ಭೂಸ್ವಾಧೀನಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಚರ್ಚಿಸಲಾಯಿತು.

ಒಂದು ತಿಂಗಳ ಒಳಗೆ ಭೂಮಿ
ಸಭೆಯಲ್ಲಿ ಮಾತನಾಡಿದ ಸಚಿವರು, ಹಾಸನದಲ್ಲಿ ಐಐಟಿ ಸ್ಥಾಪನೆಗೆ ಸರ್ಕಾರ ಅಗತ್ಯ ಸಹಕಾರ ನೀಡಲಿದೆ. ಐಐಟಿ ಮಂಜೂರಾದ ಕೂಡಲೇ ಯಾವುದೇ ವಿಳಂಬವಾಗದಂತೆ ಅಗತ್ಯ ಭೂಮಿಯನ್ನು ಒದಗಿಸಲು ಜಿಲ್ಲಾಡಳಿತ ಸಿದ್ಧವಾಗಿರಬೇಕು ಎಂದು ಸೂಚಿಸಿದರು. ಈ ನಿಟ್ಟಿನಲ್ಲಿ ಒಂದು ತಿಂಗಳೊಳಗೆ ಭೂಮಿ ಒದಗಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ವೇಳೆ, ಕೈಗಾರಿಕಾ ಪ್ರದೇಶದ ಅಭಿವೃದ್ಧಿಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಸ್ವಾಧೀನ ಮಾಡಿಕೊಂಡು ದಶಕಗಳಿಂದ ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳದೆ ಭೂಮಿಯನ್ನು ಉಳಿಸಿಕೊಂಡಿರುವುದು ಸ್ವೀಕಾರಾರ್ಹವಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.
ಭೂಸ್ವಾಧೀನ ಮಾಡಿರುವ ಪ್ರದೇಶದಲ್ಲಿ ಕೈಗಾರಿಕಾ ಚಟುವಟಿಕೆಗಳಿಗೆ ಪೂರಕವಾದ ಮೂಲಸೌಕರ್ಯಗಳನ್ನು ಕಲ್ಪಿಸಿ, ಕೈಗಾರಿಕಾ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಅಗತ್ಯ ಯೋಜನೆಗಳನ್ನು ರೂಪಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ರೈತರಿಗೆ ನ್ಯಾಯ ಸಿಗಬೇಕು
ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಜಮೀನು ಕಳೆದುಕೊಂಡಿರುವ ರೈತರಿಗೆ ನ್ಯಾಯ ದೊರೆಯಬೇಕು ಎಂದು ಸಚಿವ ಶಿವಲಿಂಗೇಗೌಡ ಸ್ಪಷ್ಟಪಡಿಸಿದರು. ಹಲವು ವರ್ಷಗಳಿಂದ ಪರಿಹಾರಕ್ಕಾಗಿ ಕಾಯುತ್ತಿರುವ ರೈತರಿಗೆ ಬಾಕಿ ಇರುವ ಪರಿಹಾರವನ್ನು ಶೀಘ್ರವಾಗಿ ವಿತರಿಸಬೇಕು. ಯಾವುದೇ ಕಾರಣಕ್ಕೂ ಪರಿಹಾರ ನೀಡುವಲ್ಲಿ ವಿಳಂಬವಾಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅಲ್ಲದೆ, ಅಭಿವೃದ್ಧಿಪಡಿಸಿರುವ ನಿವೇಶನಗಳ ಹಂಚಿಕೆ ಕಾರ್ಯವೂ ಬಾಕಿ ಉಳಿಯದಂತೆ ಶೀಘ್ರ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು. ಭೂಸ್ವಾಧೀನ, ಪರಿಹಾರ ವಿತರಣೆ ಮತ್ತು ನಿವೇಶನ ಹಂಚಿಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಅಧಿಕಾರಿಗಳು ಆದ್ಯತೆಯ ಮೇರೆಗೆ ಪರಿಹರಿಸಬೇಕು ಎಂದು ಹೇಳಿದರು.
ಹಾಸನದಲ್ಲಿ ಐಐಟಿ ಸ್ಥಾಪನೆಯ ಸಾಧ್ಯತೆ ಹಿನ್ನೆಲೆಯಲ್ಲಿ ಅಗತ್ಯ ಮೂಲಸೌಕರ್ಯ ಮತ್ತು ಭೂಮಿಯ ಲಭ್ಯತೆ ಕುರಿತು ಸರ್ಕಾರ ಗಮನಹರಿಸುತ್ತಿದೆ. ಐಐಟಿ ಮಂಜೂರಾದ ಸಂದರ್ಭದಲ್ಲಿ ತಕ್ಷಣವೇ ಕಾಮಗಾರಿಗಳಿಗೆ ಪೂರಕ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಹಾಸನ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದು, ಐಐಟಿ ಯೋಜನೆ ಮತ್ತು ಕೈಗಾರಿಕಾ ಪ್ರದೇಶದ ಅಭಿವೃದ್ಧಿಯ ಪ್ರಗತಿ ಕುರಿತು ಸಚಿವ ಕೆ.ಎಂ. ಶಿವಲಿಂಗೇಗೌಡ ಮಾಹಿತಿ ನೀಡಿದರು.


Click it and Unblock the Notifications
