Siddaramaiah: ಪ್ರಾಸಿಕ್ಯೂಷನ್‌ಗೆ ಅನುಮತಿ, ಕೂಡಲೇ ಸಿದ್ದರಾಮಯ್ಯ ರಾಜೀನಾಮೆ ನೀಡಲಿ
ಬೆಂಗಳೂರು, ಆಗಸ್ಟ್ 17: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣ ಸಂಕಷ್ಟ ತಂದಿದೆ. ಮುಖ್ಯಮಂತ್ರಿಗಳ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಪ್ರತಿಪಕ್ಷಗಳು ಸಿದ್ದರಾಮಯ್ಯ ವಿರುದ್ಧ ಮುಗಿ ಬಿದ್ದಿವೆ.
ರಾಜ್ಯಪಾಲರ ಥಾವರಚಂದ್ ಗೆಹ್ಲೋಟ್ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನಲೆಯಲ್ಲಿ ಪ್ರತಿಪಕ್ಷ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆಗೆ ಒಳಪಡಲಿ ಎಂದು ಒತ್ತಾಯಿಸಿದೆ.

ಬಿಜೆಪಿ ತನ್ನ ಪೋಸ್ಟ್‌ನಲ್ಲಿ, 'ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಅತ್ಯಂತ ಸ್ವಾಗತಾರ್ಹ. ದಲಿತರ ಭೂಮಿಯನ್ನು ನುಂಗಿ, ಅಕ್ರಮವಾಗಿ ಅತ್ಯಂತ ಬೆಲೆಬಾಳುವ 14 ಸೈಟುಗಳನ್ನು ಕಬಳಿಸಿರುವ ಸಿದ್ದರಾಮಯ್ಯ ಅವರು ಸಿಎಂ ಕುರ್ಚಿಯಲ್ಲಿ ಮುಂದುವರೆಯಲು ಅರ್ಹರಲ್ಲ' ಎಂದು ಹೇಳಿದೆ.
'ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ತನಿಖೆಗೆ ಒಳಗಾಗಲಿ' ಎಂದು ಬಿಜೆಪಿ ಒತ್ತಾಯಿಸಿದೆ. ಅಲ್ಲದೇ #CongressFailsKarnataka, #CMmustResign, #ResignCM ಎಂಬ ಹ್ಯಾಷ್ ಟ್ಯಾಗ್ ಅನ್ನು ಬಿಜೆಪಿ ಬಳಕೆ ಮಾಡಿದೆ.
ಬಿ. ವೈ. ವಿಜಯೇಂದ್ರ ಪೋಸ್ಟ್: ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕುರಿತು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಪೋಸ್ಟ್ ಹಾಕಿದ್ದಾರೆ. 'ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ' ಎಂದು ಹೇಳಿದ್ದಾರೆ.
'ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದ ಸಿದ್ದರಾಮಯ್ಯನವರು ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ' ಎಂದು ಒತ್ತಾಯಿಸಿದ್ದಾರೆ.
ಯತ್ನಾಳ್ ಪೋಸ್ಟ್: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, 'ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸ್ವಾಗತಾರ್ಹ. ಅಧಿಕಾರದ ದುರುಪಯೋಗ, ನಿಯಮಾವಳಿಗಳ ಉಲ್ಲಂಘನೆ, ಅರ್ಹ ನಿವೇಶನದಾರರ ಹಿತಾಸಕ್ತಿಯನ್ನು ಬಲಿಕೊಟ್ಟು, ತಮ್ಮ ಸ್ವಹಿತಾಸಕ್ತಿಗಳಿಗೆ ನಿಯಮಾವಳಿಗಳನ್ನು ಉಲ್ಲಂಘಿಸಿ ಬದಲಿ ನಿವೇಶನಗಳನ್ನು ಮಂಜೂರು ಮಾಡಿಸಿಕೊಂಡ ಮುಖ್ಯ ಮಂತ್ರಿಗಳ ತನಿಖೆ ಎದುರಿಸಬೇಕು. ಈ ಕೂಡಲೇ ಸಿದ್ದರಾಮಯ್ಯ ನವರು ರಾಜೀನಾಮೆ ನೀಡುವ ಮೂಲಕ ತನಿಖೆ ಎದುರಿಸಬೇಕು' ಎಂದು ಆಗ್ರಹಿಸಿದ್ದಾರೆ.
ಕಳಂಕ ತರುವ ಕೆಲಸ: ಬೀದರ್ ಸಂಸದ ಸಾಗರ್ ಖಂಡ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಸಿದ್ದಾರೆ. 'ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರದ ದ್ವೇಷ ರಾಜಕಾರಣದಿಂದಾಗಿ ರಾಜಭವನವನ್ನು ದುರುಪಯೋಗಪಡಿಸಿಕೊಂಡು ಮಾನ್ಯ ಮುಖ್ಯಮಂತ್ರಿಗಳ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. 134 ಸೀಟ್ ಗೆದ್ದು ಬಹುಮತದಿಂದ ಅಧಿಕಾರಕ್ಕೆ ಬಂದ ಚುನಾಯಿತ ಸರ್ಕಾರವನ್ನು ಉರುಳಿಸುವ ಬಿಜೆಪಿ ಹಾಗೂ ಜೆಡಿಎಸ್ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ' ಎಂದು ಹೇಳಿದ್ದಾರೆ.
'ಮುಡಾ ಇಲ್ಲಿ ಯಾವುದೇ ಹಗರಣ ನಡೆದಿಲ್ಲ ಸೈಟ್ ಹಂಚಿಕೆಯಾದಾಗ ಸಿದ್ದಾರಾಮಯ್ಯ ಅವರು ಅಧಿಕಾರದಲ್ಲಿ ಇರಲಿಲ್ಲ ಆವಾಗ ಬಿಜೆಪಿ ಅಧಿಕಾರದಲ್ಲಿ ಇತ್ತು, ಇದರಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಏನು ಇಲ್ಲ ಎಂಬುದು ಸ್ಪಷ್ಟವಾಗಿ ಗೊತ್ತಿದ್ದರೂ ಅಧಿಕಾರ ದುರ್ಬಳಕೆ ಮಾಡಿಕೊಂಡು ಮುಖ್ಯಮಂತ್ರಿಗಳ ಹೆಸರಿಗೆ ಕಳಂಕ ತರುವ ಕೆಲಸ ಕೇಂದ್ರ ಸರ್ಕಾರ ಹಾಗೂ ರಾಜ್ಯದ ವಿರೋಧ ಪಕ್ಷದವರು ಮಾಡುತ್ತಿದ್ದಾರೆ' ಎಂದು ಆರೋಪಿಸಿದ್ದಾರೆ.
'ಹಿಂದುಳಿದ, ಶೋಷಿತ ವರ್ಗದವರು, ಬಡವರು, ನಿರ್ಗತಿಕರು ಹಾಗೂ ಸಾಮಾಜಿಕ ನ್ಯಾಯದ ತತ್ವ ಸಿದ್ಧಾಂತದ ಮೇಲೆ ರಾಜ್ಯದ ಎಲ್ಲಾ ಸಮುದಾಯಗಳ ಏಳಿಗೆಗಾಗಿ ಹಗಲಿರುಳು ಶ್ರಮ ವಹಿಸುತ್ತಿರುವ ಮಾನ್ಯ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಹಣಿಯಲು ಆಗದೆ ಹೀಗೆ ಅಧಿಕಾರ ದುರ್ಬಳಕೆ ಮಾಡಿಕೊಂಡು ಅವರ ವಿರುದ್ಧ ಮಾಡುತ್ತಿರುವ ಷಡ್ಯಂತ್ರವನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಜನರೇ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ' ಎಂದು ಹೇಳಿದ್ದಾರೆ.












Click it and Unblock the Notifications