Govt School: ಕರ್ನಾಟಕದ ಸರ್ಕಾರಿ ಶಾಲೆಗಳ ವಿಷಯದಲ್ಲಿ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ಸಚಿವ ಮಧು ಬಂಗಾರಪ್ಪ
Govt School: ಕರ್ನಾಟಕದ ಸರ್ಕಾರಿ ಶಾಲೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. 2025-26ನೇ ಸಾಲಿನಲ್ಲಿ ಕರ್ನಾಟಕದ ವಲಯ ಯೋಜನೆಯಡಿ ರಾಜ್ಯದ 1,250 ಸರ್ಕಾರಿ ಶಾಲೆಗಳಲ್ಲಿ 1,582 ಶೌಚಾಲಯಗಳನ್ನು ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.
ವಿಧಾನಸಭೆ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಹಿರೇಕೆರೂರು ಶಾಸಕ ಯು.ಬಿ ಬಣಕಾರ್ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು, 2025-26ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 136 ಶೌಚಾಲಯಗಳು ಮಂಜೂರಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಮುಂದುವರಿದು ಕರ್ನಾಟಕದಲ್ಲಿ ಶಾಲೆಗಳಿಗೆ ಸಂಬಂಧಿಸಿದಂತೆ ಅನುದಾನ ಹಂಚಿಕೆ ವಿಚಾರದ ಬಗ್ಗೆ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು, ಕರ್ನಾಟಕದ ವಲಯ ಯೋಜನೆಯಡಿ ಶೌಚಾಲಯ ನಿರ್ಮಾಣಕ್ಕೆ ಸಂಬಂಧಿಸಿದಂತೆ 504.23 ಲಕ್ಷ ರೂ. ಅನುದಾನ ಮತ್ತು ಶಾಲಾ ಕೊಠಡಿಗಳ ನಿರ್ಮಾಣಕ್ಕೆ 2317.00 ಲಕ್ಷ ರೂ. ಅನುದಾನ ಉಳಿಕೆಯಾಗಿರುತ್ತದೆ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2025-26ನೇ ಸಾಲಿನಲ್ಲಿ ಶೌಚಾಲಯ ನಿರ್ಮಾಣಕ್ಕೆ 544.00 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. 2025-26ನೇ ಸಾಲಿನಲ್ಲಿ ಪಿ.ಎಂ ಶ್ರೀ ಯೋಜನೆಯಡಿ 216 ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4854.60 ಲಕ್ಷ ರೂ. ಮಂಜೂರಾಗಿರುತ್ತದೆ ಎಂದೂ ಇದೇ ಸಂದರ್ಭದಲ್ಲಿ ವಿವರಿಸಿದ್ದಾರೆ.
ಮೊದಲ ಹಂತದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಗೆಳಿಗೆ ಆದ್ಯತೆ ನೀಡಿ ಪರಿಗಣಿಸಿರುವ ಕಾರಣ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಅನುದಾನ ಮಂಜೂರು ಆಗಿಲ್ಲ.
ಉಳಿಕೆ ಇರುವ ಅನುದಾನದಲ್ಲಿ ಹಿರೇಕೆರೂರು ವಿಧಾನಸಭಾ ಕ್ಷೇತ್ರದ 2 ಶಾಲೆಗಳಲ್ಲಿ 2 ಬಾಲಕರ ಶೌಚಾಲಯ ಹಾಗೂ 7 ಶಾಲೆಗಳಲ್ಲಿ 13 ಬಾಲಕಿಯರ ಶೌಚಾಲಯ ನಿರ್ಮಾಣ ಕಾಮಗಾರಿಗಳಿಗೆ ಪ್ರತಿ ಘಟಕಕ್ಕೆ 2 ಲಕ್ಷ ರೂ. ವೆಚ್ಚದಲ್ಲಿ ಒಟ್ಟು 30 ಲಕ್ಷ ರೂ. ಮೊತ್ತದಲ್ಲಿ ಕಾಮಗಾರಿ ಕೈಗೊಳ್ಳುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಅವರು ಸದನದಲ್ಲಿ ಉತ್ತರಿಸಿದರು.
₹5,300 ಕೋಟಿ ಮೇಲ್ದಂಡೆ ಭದ್ರಾ ಯೋಜನೆಗೆ ಘೋಷಿಸಲಾಗಿದ್ದ ಅನುದಾನ ಬಿಡುಗಡೆಗೆ ಸಿಎಂ ಶಿವಕುಮಾರ್ ಆಗ್ರಹ
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿರುವ 5,300 ಕೋಟಿ ರೂಪಾಯಿ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವರು ಕೇಂದ್ರ ಬಜೆಟ್‌ನಲ್ಲಿ 5,300 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದರು. ಆದರೆ ಸಂಸತ್ತಿನಲ್ಲಿ ಘೋಷಣೆಯಾದರೂ ಈವರೆಗೆ ಹಣ ಬಿಡುಗಡೆಯಾಗಿಲ್ಲ. ಇದರಿಂದ ಯೋಜನೆಯ ಅನುಷ್ಠಾನಕ್ಕೆ ತೊಂದರೆಯಾಗುತ್ತಿದೆ ಎಂದು ಹೇಳಿದರು.
ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವರು ಮೇಲ್ದಂಡೆ ಭದ್ರಾ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ 5,300 ಕೋಟಿ ರೂ. ಘೋಷಿಸಿದ್ದರು. ಸಂಸತ್ತಿನಲ್ಲೇ ಘೋಷಣೆ ಮಾಡಿದರೂ ಈ ಹಣವನ್ನು ಈವರೆಗೆ ಬಿಡುಗಡೆ ಮಾಡಿಲ್ಲ. ಇದರಿಂದ ಯೋಜನೆಗೆ ತೊಂದರೆಯಾಗುತ್ತಿದೆ. ದಯವಿಟ್ಟು ಅನುದಾನವನ್ನು ಶೀಘ್ರ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.
ಖಾಸಗಿ ವಲಯದ ಕಂಪನಿಗಳು ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ತಮ್ಮ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯನ್ನು ಬಳಸುತ್ತಿರುವ ರೀತಿಯ ಬಗ್ಗೆಯೂ ಶಿವಕುಮಾರ್ ಕಳವಳ ವ್ಯಕ್ತಪಡಿಸಿದರು. ರಾಜ್ಯದ ಸ್ಥಳೀಯ ಆದ್ಯತೆಗಳಿಗೆ ಅನುಗುಣವಾಗಿ CSR ನಿಧಿಯನ್ನು ಎಲ್ಲಿ ಬಳಸಬೇಕು ಎಂಬುದನ್ನು ರಾಜ್ಯ ಸರ್ಕಾರ ನಿರ್ಧರಿಸುವಂತಾಗಲು ಸೂಕ್ತ ನೀತಿ ಅಥವಾ ನಿಯಮ ರೂಪಿಸಬೇಕು. ಅವರು ಒಂದು ರಾಜ್ಯದಲ್ಲಿ ವ್ಯವಹಾರ ಮಾಡುತ್ತಾರೆ, ಆದರೆ ಬೇರೆಡೆ ಹೂಡಿಕೆ ಮಾಡುತ್ತಾರೆ. ನಮಗೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಆದ್ಯತೆ ಇದೆ. ಹೀಗಾಗಿ CSR ನಿಧಿಯನ್ನು ಎಲ್ಲಿ ಮತ್ತು ಹೇಗೆ ಖರ್ಚು ಮಾಡಬೇಕು ಎಂಬುದನ್ನು ರಾಜ್ಯ ಸರ್ಕಾರ ನಿರ್ಧರಿಸುವಂತಾಗಬೇಕು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಅಮಿತ್ ಶಾ ಅವರು ಶಿವಕುಮಾರ್ ಅವರ ಸಲಹೆಯನ್ನು ಭಾಗಶಃ ಒಪ್ಪಿಕೊಂಡರು. ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಮುಖ್ಯಸ್ಥರಾಗಿರುವ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚಿಸುವಂತೆ ಸೂಚಿಸಿದರು. ನಾವು ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಯಾವುದೇ ರಾಜಕೀಯ ನೇಮಕಾತಿ ಮಾಡಿಲ್ಲ. ಐಎಎಸ್ ಅಧಿಕಾರಿಗಳೇ ಅವುಗಳ ಮುಖ್ಯಸ್ಥರಾಗಿದ್ದಾರೆ. ನಿಮಗೆ ಅವರೊಂದಿಗೆ ಉತ್ತಮ ಬಾಂಧವ್ಯವಿದೆ. ನೀವು ಅವರೊಂದಿಗೆ ಮಾತನಾಡಿ. ನಾನೂ ಅವರೊಂದಿಗೆ ಮಾತನಾಡುತ್ತೇನೆ ಎಂದರು.
ಶಿವಕುಮಾರ್ ಅವರು ಪ್ರಸ್ತಾಪಿಸಿದ ಕ್ಷೇತ್ರಗಳ ಪುನರ್‌ವಿಂಗಡಣೆ (Delimitation) ವಿಚಾರಕ್ಕೆ ಪ್ರತಿಕ್ರಿಯಿಸಿದ ಶಾ, ಇದು ಕಾಂಗ್ರೆಸ್ ಪಕ್ಷ ಎತ್ತಿರುವ ರಾಜಕೀಯ ವಿಚಾರವಾಗಿದ್ದು, ದಕ್ಷಿಣ ವಲಯ ಮಂಡಳಿಯ ಚರ್ಚೆಯೊಂದಿಗೆ ಅದನ್ನು ಬೆರೆಸಬಾರದು. ಇದು ರಾಜಕೀಯ ವಿಚಾರ. ಇದನ್ನು ಇಲ್ಲಿನ ಚರ್ಚೆಯೊಂದಿಗೆ ಬೆರೆಸಬೇಡಿ ಎಂದೂ ಅಮಿತ್ ಶಾ ಅವರು ಇಲ್ಲಿ ಹೇಳಿದರು.


Click it and Unblock the Notifications
