Gram Panchayat: ಗ್ರಾಮ ಪಂಚಾಯಿತಿ ನೌಕರರ ವರ್ಗಾವಣೆ, ಸಿಹಿಸುದ್ದಿ
ಬೆಂಗಳೂರು, ಜೂನ್ 27: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ವರ್ಗಾವಣೆಗೆ ಚಾಲನೆ ನೀಡಿದೆ. ಶೇ 6ರಷ್ಟು ಸರ್ಕಾರಿ ನೌಕರರ ವರ್ಗಾವಣೆ ನಡೆಯಲಿದ್ದು, 15 ದಿನದಲ್ಲಿ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಆದೇಶಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿ ಕಾರ್ಯ ನಿರ್ವಹಣೆ ಮಾಡುವ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿ/ ಸಿಬ್ಬಂದಿಗಳ ವರ್ಗಾವಣೆಗೂ ಚಾಲನೆ ನೀಡಲಾಗಿದೆ. ಈ ಕುರಿತು ಆದೇಶ ಹೊರಡಿಸಲಾಗಿದ್ದು, 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ 237 ಉಲ್ಲೇಖಿಸಲಾಗಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಬಿ. ನವೀನ್ ಕುಮಾರ್ ಉಪ ನಿರ್ದೇಶಕರು ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ (ಗ್ರಾ. ಪಂ) ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ ಆದೇಶವನ್ನು ಹೊರಡಿಸಿದ್ದಾರೆ.
ಆದೇಶ ಗ್ರಾಮ ಪಂಚಾಯಿತಿಗಳ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1) ಮತ್ತು (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ.
ಆದೇಶದ ವಿವರಗಳು: 2024-25 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ:237ರ ಉಪ ಕ್ರಮ ಸಂಖ್ಯೆ: 1ರಲ್ಲಿ, ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಪ್ರಸಕ್ತ ವರ್ಷ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಎಂದು ಘೋಷಿಸಲಾಗಿದೆ.
ಅದರಂತೆ, ಗ್ರಾಮ ಪಂಚಾಯಿತಿಗಳ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್- 1) ಮತ್ತು (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು 2024-25ನೇ ಸಾಲಿನಿಂದ ಕೌನ್ಸಿಲಿಂಗ್ ಮೂಲಕ ಮಾಡಲು ಸರ್ಕಾರವು ನಿರ್ಧರಿಸಿದೆ.
ಅದರಂತೆ ಈ ಕುರಿತು ಆದೇಶಿಸಲಾಗಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಗ್ರಾಮ ಪಂಚಾಯಿತಿಗಳ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1) ಮತ್ತು (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು 2024-25ನೇ ಸಾಲಿನಿಂದ ಕೌನ್ಸಿಲಿಂಗ್ ಮೂಲಕ ಮಾಡಲು ಸರ್ಕಾರವು ಆದೇಶಿಸಿದೆ.
ಈ ಆದೇಶವನ್ನು ಆರ್ಥಿಕ ಇಲಾಖೆಯು ಟಿಪ್ಪಣಿ ದಿನಾಂಕ 28/05/2024ರಲ್ಲಿ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯು ಟಿಪ್ಪಣಿ ದಿನಾಂಕ 24/05/2024ರಂದು ನೀಡಿರುವ ಸಹಮತಿಯನ್ವಯ ಹೊರಡಿಸಿದೆ ಎಂದು ಹೇಳಿದೆ.
ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿಗಳನ್ನು ವೀರಭದ್ರ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು-1) ಹೊರಡಿಸಿದ್ದಾರೆ. ದಿನಾಂಕ 07/06/2013ರ ಸರ್ಕಾರದ ಆದೇಶದಲ್ಲಿ ಹೊರಡಿಸಲಾದ ವರ್ಗಾವಣಾ ಮಾರ್ಗಸೂಚಿಗಳನ್ನು ಪರಿಷ್ಕರಿಸಿ, ಹೊಸದಾದ ವರ್ಗಾವಣಾ ಮಾರ್ಗಸೂಚಿಗಳನ್ನು ಹೊರಡಿಸುವುದು ಅವಶ್ಯವೆಂದು ಹೊಸ ಆದೇಶದಲ್ಲಿ ತಿಳಿಸಲಾಗಿದೆ.












Click it and Unblock the Notifications