ರಾಜ್ಯ ಸರ್ಕಾರಕ್ಕೆ ಹಿನ್ನಡೆ; ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಕಳುಹಿಸಿದ ರಾಜ್ಯಪಾಲರು: ಕಾರಣವೇನು?
ಬೆಂಗಳೂರು, ಮಾರ್ಚ್ 26 : ರಾಮನಗರ ಜಿಲ್ಲೆ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಹಿನ್ನಡೆ ಅನುಭವಿಸಿದ್ದ ಕರ್ನಾಟಕ ಸರ್ಕಾರಕ್ಕೆ ಇದೀಗ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ವಿಚಾರದಲ್ಲೂ ಭಾರೀ ಹಿನ್ನಡೆಯಾಗಿದೆ. ಕಳೆದ ವಿಧಾನಮಂಡಲದ ಉಭಯ ಸದನಗಳ ಅಂಗೀಕಾರದ ಬಳಿಕ ಒಪ್ಪಿಗೆಗಾಗಿ ಕಳುಹಿಸಿದ್ದ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸ್ಪಷ್ಟನೆ ಕೇಳಿ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಅವರು, ರಾಜ್ಯಪಾಲರು ಕೆಲವು ಸ್ಪಷ್ಟನೆಗಳನ್ನು ಕೋರಿ ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ. ಸ್ಪಷ್ಟನೆಗಳೊಂದಿಗೆ ಪುನಃ ಒಪ್ಪಿಗೆ ಕೋರಿ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ. 2023ರ ಆಗಸ್ಟ್ ನಿಂದ ಈವರೆಗೆ 119 ಮಸೂಸೆಗಳಿಗೆ ಅಂಗೀಕಾರ ನೀಡಲಾಗಿದೆ. ಈ ಪೈಕಿ 83 ಮಸೂದೆಗಳನ್ನು ಕಾಯ್ದೆಯಾಗಿ ಜಾರಿಗೊಳಿಸಲಾಗಿದೆ. ನಾಲ್ಕು ಮಸೂದೆಗಳು ರಾಜ್ಯಪಾಲರ ಬಳಿ ಇವೆ. ಏಳು ಮಸೂದೆಗಳ ಕುರಿತು ಸ್ಪಷ್ಟೀಕರಣ ಕೇಳಿದ್ದಾರೆ. ನಾಲ್ಕು ರಾಜ್ಯಪಾಲರ ಬಳಿ ಇವೆ. ಐದು ಮಸೂದೆಗಳನ್ನು ರಾಷ್ಟ್ರಪತಿಯವರಿಗೆ ಕಳುಹಿಸಿದ್ದಾರೆ ಎಂದು ಹೇಳಿದರು.

ಇನ್ನೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲರು ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ. ಬಿಬಿಎಂಪಿ ವಿಭಜನೆ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧದ ನಡುವೆಯೂ ರಾಜ್ಯ ಸರ್ಕಾರ ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಬಿಲ್ ಪಾಸ್ ಮಾಡಿಕೊಂಡಿತ್ತು. ಆದ್ರೆ, ಇದೀಗ ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ ಅವರು ಗ್ರೇಟರ್ ಬೆಂಗಳೂರು ವಿಧೇಯಕವನ್ನು ವಾಪಸ್ ಕಳುಹಿಸಿದ್ದಾರೆ. ಇದರಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ ಎಂದು ಹೇಳಲಾಗಿದೆ.
ಈಗಾಗಲೇ ಬಿಬಿಎಂಪಿ ಚುನಾವಣೆ ನಡೆದು ಬರೋಬ್ಬರಿ ಐದು ವರ್ಷವೇ ಕಳೆದಿದೆ. ಇದೀಗ ರಾಜ್ಯ ಸರ್ಕಾರ ಬಿಬಿಎಂಪಿ ವಿಭಜನೆ ಮಾಡಿ ಬೆಂಗಳೂರು ನಗರ ವಿಸ್ತೀರ್ಣ ಮಾಡುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಜಾರಿಗೆ ಮುಂದಾಗಿತ್ತು. ಬಜೆಟ್ ಅಧಿವೇಶನದಲ್ಲಿ ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಈ ಮಸೂದೆ ಅಂಗೀಕಾರವಾಗಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಇನ್ನೂ ಗ್ರೇಟರ್ ಬೆಂಗಳೂರು ವಿಧೇಯಕದ ವಿರುದ್ಧ ವಿಪಕ್ಷಗಳು ಸಹ ಈ ಹಿಂದೆ ರಾಜ್ಯಪಾಲರನ್ನ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಆದರೆ, ಇದೀಗ ರಾಜ್ಯಪಾಲರು ಅಂಕಿತ ಹಾಕಲು ನಿರಾಕರಿಸಿ ಬಿಲ್ ವಾಪಸ್ ಕಳುಹಿಸಿದ್ದಾರೆ. ಹೀಗಾಗಿ ವಿಪಕ್ಷಗಳ ಮನವಿಯನ್ನು ರಾಜ್ಯಪಾಲರು ಪುರಸ್ಕರಿಸಿದ್ದಾರೆ ಎಂದು ಹೇಳಲಾಗಿದೆ.
ಯಾವುದೇ ಕಾರಣಕ್ಕೂ ಗ್ರೇಟರ್ ಬೆಂಗಳೂರು ಬಿಲ್ಗೆ ಒಪ್ಪಿಗೆ ನೀಡಬೇಡಿ ಎಂದು ಬಿಜೆಪಿ ಹಾಗೂ ಜೆಡಿಎಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯಪಾಲರು ಗ್ರೇಟರ್ ಬೆಂಗಳೂರು ಮಸೂಧೆಯನ್ನು ವಾಪಸ್ ಕಳುಹಿಸಿದ್ದಾರೆ. ಇದೀಗ ಬೆಂಗಳೂರನ್ನು ಏಳು ಭಾಗವಾಗಿ ಅಥವಾ ಇರುವ ಒಂದು ಪಾಲಿಕೆಯನ್ನು 7 ಪಾಲಿಕೆಗಳನ್ನಾಗಿ ಮಾಡಲು ಸರ್ಕಾರ ಮುಂದಾಗಿದೆ. ಈ ಬೆಳವಣಿಗೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಅನ್ನು ಸರ್ಕಾರ ಪರಿಚಯಿಸಿದೆ. ಇದರ ಅಡಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಲು ಮುಂದಾಗಿದ್ದು, ಬೆಂಗಳೂರಿಗೆ ಮೂರು ಹಂತದ ಆಡಳಿತ ನೀಡುವುದು ಇದರ ಉದ್ದೇಶವಾಗಿದೆ.












Click it and Unblock the Notifications