'ಗೃಹಜ್ಯೋತಿ' ಯೋಜನೆ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
ಬೆಂಗಳೂರು, ಜೂನ್ 14; ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿದ 5 ಗ್ಯಾರಂಟಿಗಳಲ್ಲಿ 'ಗೃಹ ಜ್ಯೋತಿ' ಸಹ ಒಂದು. ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗೆ ಉಚಿತವಾಗಿ ವಿದ್ಯುತ್ ನೀಡಲಾಗುತ್ತದೆ. ಈ ಯೋಜನೆ ಫಲಾನುಭವಿಗಳಾಗಲು ಜೂನ್ 15 ರಿಂದ ಅರ್ಜಿ ಸಲ್ಲಿಸಬೇಕಿತ್ತು.
ಗೃಹಜ್ಯೋತಿ ಯೋಜನೆ ಫಲಾನುವಿಯಾಗಲು ಜನರು ಅಗತ್ಯ ದಾಖಲೆಗಳ ಜೊತೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಕೆ ಮಾಡುವ ದಿನಾಂಕ ಮುಂದೂಡಿಕೆ ಮಾಡಲಾಗಿದೆ. ಜೂನ್ 18ರಿಂದ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ದಿನಾಂಕ 20/05/2023ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ 'ಗೃಹ ಜ್ಯೋತಿ' ಯೋಜನೆಯಡಿ ಉಚಿತ ವಿದ್ಯುತ್ ಒದಗಿಸಲು ತಾತ್ವಿಕ ಅನುಮೋದನೆ ನೀಡಲಾಗಿತ್ತು. ಬಳಿಕ ಯೋಜನೆಯ ಷರತ್ತುಗಳ ಸಹಿತ ಅಧಿಕೃತ ಆದೇಶವನ್ನು ಪ್ರಕಟಿಸಲಾಗಿತ್ತು.
ಆದೇಶ ಏನಿದೆ?; 'ಗೃಹ ಜ್ಯೋತಿ' ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇಕಡ 10 ರಷ್ಟು ಹೆಚ್ಚಿನ ವಿದ್ಯುತ್ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸಂಪುಟ ಸಭೆಯು ಅನುಮೋದಿಸಿತ್ತು.
ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ಸಹಾಯಧನ ಮೊತ್ತವನ್ನು ಹಾಗೂ ಮುಂದಿನ ಮಾಹೆಗಳಲ್ಲಿ ನಿಗದಿಯಾಗುವ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚದ ಹೊಂದಾಣಿಕೆ ಶುಲ್ಕ (FPPCA - Fuel and Power Purchase Cost Adjustment) ದರಕ್ಕೆ ಸಂಬಂಧಿಸಿದ ಸಹಾಯಧನವನ್ನು ಒಳಗೊಂಡಂತೆ ಒಟ್ಟು ಸಹಾಯಧನವನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರದಿಂದ ಮುಂಗಡವಾಗಿ ಒದಗಿಸಲಾಗುವುದು ಎಂದು ಸರ್ಕಾರ ಹೇಳಿತ್ತು.

ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ/ ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯಡಿಯ ಫಲಾನುಭವಿಗಳನ್ನು ಗೃಹಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡೆಗೊಳಿಸಲಾಗಿದೆ ಎಂದು ಸರ್ಕಾರ ಹೇಳಿತ್ತು ಮತ್ತು ಯೋಜನೆಯ ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು.
ಈ ಯೋಜನೆಯನ್ನು ಜುಲೈ 2023ರ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ 2023ರ ತಿಂಗಳಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಷರತ್ತುಗಳೊಂದಿಗೆ ಜಾರಿಗೆ ತರಲು ಆದೇಶ ನೀಡಲಾಗಿದೆ. ಆದರೆ ಗ್ರಾಹಕರು ಈ ಹಿಂದೆ ಬಾಕಿ ಉಳಿಸಿಕೊಂಡಿರುವ ಎಲ್ಲಾ ಬಿಲ್‌ಗಳನ್ನು ಪಾವತಿ ಮಾಡಬೇಕಿದೆ.
ಷರತ್ತುಗಳು
* ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ. ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ.
* ಪ್ರತಿ ತಿಂಗಳು ಮೀಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ ಅನ್ನು ನಮೂದಿಸುವುದು.
* ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್‌ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ net bill ನೀಡುವುದು ಹಾಗೂ ಗ್ರಾಹಕರು net bill ಅನ್ನು ಪಾವತಿಸುವುದು.
* ಅರ್ಹ ಯೂನಿಟ್/ ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ ಅನ್ನು ನೀಡಲಾಗುವುದು.
* ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.
* ಪ್ರತಿ ಫಲಾನುಭವಿಯು ತನ್ನ Customer ID/ Account ID ಅನ್ನು ಆಧಾರ್‌ಗೆ ಕಡ್ಡಾಯವಾಗಿ ಜೋಡಣೆ ಮಾಡುವುದು.
* ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ/ ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿ ಗ್ರಾಹಕರುಗಳನ್ನು ಗೃಹಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸುವುದು.
* ದಿನಾಂಕ 30/06/2023ರ ಅಂತ್ಯಕ್ಕೆ (ಜೂನ್ 2023ರ ಮಾಹೆಯಲ್ಲಿ ಬಳಸಿದ ವಿದ್ಯುತ್ ಪ್ರಮಾಣಕ್ಕೆ ಜುಲೈ 2023ರಲ್ಲಿ ವಿತರಿಸಿದ ಬಿಲ್ಲಿನ ಮೊತ್ತ ಒಳಗೊಂಡಂತೆ) ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದ್ದು, ಬಾಕಿ ಮೊತ್ತವನ್ನು ನಿಗದಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರ ವಿದ್ಯುತ್ ಸ್ಥಾವರಗಳ ಸಂಪರ್ಕವನ್ನು ಕಡಿತಗೊಳಿಸಲಾಗುವುದು.
* ಗೃಹ ವಿದ್ಯುತ್ ಗ್ರಾಹಕರ ಸ್ಥಾವರಗಳಿಗೆ ಮಾಪಕವನ್ನು ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ.
* ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು ಎಂದು ಸರ್ಕಾರ ಹೇಳಿತ್ತು.











Click it and Unblock the Notifications