ಗೃಹ ಲಕ್ಷ್ಮೀ ಯೋಜನೆಗೆ ನಕಲಿ ಅರ್ಜಿಗಳ ಹಾವಳಿ; ಲಕ್ಷ್ಮಿ ಹೆಬ್ಬಾಳ್ಕರ್ ಕೊಟ್ಟ ಎಚ್ಚರಿಕೆ ಏನು?
ಬೆಂಗಳೂರು, ಜುಲೈ 18: ರಾಜ್ಯ ಸರ್ಕಾರದ ಗ್ಯಾರಂಟಿ ಘೋಷಣೆಯಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ 2000 ರೂಪಾಯಿ ನೀಡುವ ಯೋಜನೆಗೆ ಸರ್ಕಾರ ಸಿದ್ದತೆಯನ್ನ ನಡೆಸಿದ್ದು,ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿವೆ ಈ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಯಾವುದೇ ಅರ್ಜಿಗಳು ಇರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ನಕಲಿ ಅರ್ಜಿ ಗಳ ಮೂಲಕ ಕೆಲ ಕಿಡಿ ಗಳು ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಕಲಿ ಅರ್ಜಿ ಹಾವಳಿ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಇನ್ನೂ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಬೆಂಗಳೂರು ಓನ್, ಗ್ರಾಮ ಓನ್, ಬಸವ ಸೇವಾ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಪ್ರಜಾಪ್ರತಿನಿಧಿಗಳ ಬಳಿ ಮಾತ್ರ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಈಗಾಗಲೇ ಐದು ಗ್ಯಾರಂಟಿ ಘೋಷಣೆಗಳಲ್ಲಿ ಶಕ್ತಿ ಯೋಜನೆ ಹಾಗೂ ಅನ್ನ ಭಾಗ್ಯ ಯೋಜನೆ ಜಾರಿಯಾಗಿದ್ದು, ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ಮನೆಯ ಯಜಮಾನಿಗೆ ಎರಡು ಸಾವಿರ ಉಚಿತವಾಗಿ ನೀಡುವ ಯೋಜನೆ ಬುಧವಾರ ಜಾರಿಯಾಗಲಿದ್ದು, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ಗೃಹ ಲಕ್ಷ್ಮೀ ಯೋಜನೆ ಕಾರ್ಯಕ್ರಮದಲ್ಲಿ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ.












Click it and Unblock the Notifications