ಗ್ಯಾರಂಟಿಗಳ ಭರವಸೆ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಜುಲೈ 28; ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಆಮಿಷವೊಡ್ಡಿದ್ದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯರನ್ನು ಶಾಸಕ ಸ್ಥಾನದಿಂದ ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಮೈಸೂರಿನ ವರುಣ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆ. ಎಂ. ಶಂಕರ್ ಸಲ್ಲಿಕೆ ಮಾಡಿರುವ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ವರುಣ ಕ್ಷೇತ್ರದ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ನೋಟಿಸ್ ನೀಡಿದೆ. ಕರ್ನಾಟಕದ ಕಾಂಗ್ರೆಸ್ ಘಟಕದ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಈ ಗ್ಯಾರಂಟಿ ಕಾರ್ಡ್‌ಗಳಲ್ಲಿ ಸಿದ್ದರಾಮಯ್ಯ ಸಹಿ ಇದೆ ಎಂಬುದು ತರಕಾರು ಆಗಿದೆ.

ಜೂನ್ 21ರಂದು ಕೆ. ಎಂ. ಶಂಕರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರ ನ್ಯಾಯಪೀಠ ಜುಲೈ 28ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿತ್ತು. ಹೈಕೋರ್ಟ್ ಕಚೇರಿ ಎತ್ತಿರುವ ಹಲವು ಆಕ್ಷೇಪಣೆಗಳನ್ನು ನಿವಾರಿಸುವಂತೆ ಸೂಚಿಸಿತ್ತು. ಇಂದು ಪುನಃ ಅರ್ಜಿಯ ವಿಚಾರಣೆ ನಡೆಯಿತು.
ಶಾಸಕ ಸ್ಥಾನದಿಂದ ಅಸಿಂಧುಗೊಳಿಸಿ; 2023ರ ವಿಧಾನಸಭೆ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿ, ಸದ್ಯ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿಯನ್ನು ಸಲ್ಲಿಕೆ ಮಾಡಲಾಗಿದೆ.
ಕಾಂಗ್ರೆಸ್ ವತಿಯಿಂದ ನೀಡಿರುವ ಗ್ಯಾರಂಟಿ ಕಾರ್ಡ್‌ಗಳ ಮೂಲಕ ಚುನಾವಣೆ ಸಮಯದಲ್ಲಿ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಇದು ಲಂಚಕ್ಕೆ ಸಮವಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 (1) ಪ್ರಕಾರ ಮತ್ತು ಸೆಕ್ಷನ್ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧವಾಗಿದೆ ಎಂದು ಅರ್ಜಿಯಲ್ಲಿ ಕೆ. ಎಂ. ಶಂಕರ್ ಹೇಳಿದ್ದಾರೆ.
ಕರ್ನಾಟಕ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿ ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ, ಶಕ್ತಿ ಬಗ್ಗೆ ಗ್ಯಾರಂಟಿ ಕಾರ್ಡ್‌ಗಳನ್ನು ಪ್ರಕಟಿಸಲಾಗಿತ್ತು. ಇದರಲ್ಲಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಹಿ ಮಾತಿ ಮನೆ-ಮನೆಗೆ ಹಂಚಿಕೆ ಮಾಡಿದ್ದರು. ಇದು ಮತದಾರರಿಗೆ ವೊಡ್ಡಿರುವ ಆಮಿಷ ಎಂದು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಆಮಿಷವೊಡ್ಡುವುದು ಚುನಾವಣಾ ಅಕ್ರಮವಾದ ಕಾರಣ ವರುಣ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಕ್ಷ ಮತ್ತು ಅಭ್ಯರ್ಥಿ ಸಿದ್ದರಾಮಯ್ಯ ಪ್ರಕಟಿಸಿದ ಗ್ಯಾರಂಟಿ ಯೋಜನೆಗಳು ಕೊಡುಗೆ ಹಾಗೂ ಭರವಸೆ ಸ್ವರೂಪದ್ದಾಗಿವೆ ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರ ಸಮ್ಮತಿಯೊಂದಿಗೆ ಪ್ರಕಟಿಸಲಾಗಿದೆ. ಅವರು ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿದೆ. ಆ ಮೂಲಕ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಅಕ್ರಮಗಳನ್ನು ಎಸಗಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಇದು ಪ್ರಜಾಪ್ರತಿನಿಧಿ ಕಾಯ್ದೆಯ ಅನ್ವಯ ಅಪರಾಧವಾಗಿದ್ದು, ಚುನಾವಣಾ ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯೂ ಆಗಿದೆ. ಆದ್ದರಿಂದ ಸಿದ್ದರಾಮಯ್ಯ ವರುಣದಿಂದ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯ ವರುಣದಿಂದ 119816 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಅವರ ಎದುರಾಳಿ ಬಿಜೆಪಿಯ ವಿ. ಸೋಮಣ್ಣ 73653 ಮತಗಳನ್ನು ಪಡೆದಿದ್ದರು. ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಗೊಂಡಿದ್ದಾರೆ.












Click it and Unblock the Notifications