ಗ್ಯಾರಂಟಿಗಳು ಪಕ್ಷದ ಪ್ರಣಾಳಿಕೆ: ಸಿದ್ದರಾಮಯ್ಯ ವೈಯಕ್ತಿಕ ಘೋಷಣೆಯಲ್ಲ
ಬೆಂಗಳೂರು, ಮಾರ್ಚ್ 26: 5 ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಅಂಶಗಳೇ ಹೊರತು, ಅವು ಮುಖ್ಯಮಂತ್ರಿ ಸಿದ್ದರಾಮಯ್ಯ ವೈಯಕ್ತಿಕವಾಗಿ ಘೋಷಿಸಿರುವ ಅಂಶಗಳಲ್ಲ. ಹೀಗೆಂದು ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮಾ ಕುಮಾರ್ ಕರ್ನಾಟಕ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದರು. ಮತದಾರರಿಗೆ ಆಮಿಷವೊಡ್ಡಿ ಸಿದ್ದರಾಮಯ್ಯ ಚುನಾವಣೆಯಲ್ಲಿ ಅಕ್ರಮ ಎಸಗಿ ಜಯಗಳಿಸಿದ್ದಾರೆಂದು ಆರೋಪಿಸುವುದು ಸರಿಯಲ್ಲ ಎಂದು ವಕೀಲರು ವಾದಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಚಿತ ಗ್ಯಾರಂಟಿಗಳ ಆಮಿಷವೊಡ್ಡುವ ಮೂಲಕ ಚುನಾವಣೆಯಲ್ಲಿ ಗೆದ್ದಿದ್ದಾರೆ ಹಾಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ವರುಣಾ ಹೋಬಳಿಯ ಕೊಡನಹಳ್ಳಿ ಕೆ. ಎಂ. ಶಂಕರ್ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಪಕ್ಷದ ಪ್ರಣಾಳಿಕೆ: ಸಿದ್ದರಾಮಯ್ಯ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ 2023ರ ವಿಧಾನಸಭಾ ಚುನಾವಣೆಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರಚಾರ ಮಾಡಲಾಗಿರುತ್ತದೆ. ಈ 5 ಗ್ಯಾರೆಂಟಿ ಯೋಜನೆಗಳು ಪಕ್ಷದ ವತಿಯಿಂದ ಘೋಷಿಸಲಾಗಿರುತ್ತದೆ ಹೊರತು, ಸಿದ್ದರಾಮಯ್ಯನವರು ವೈಯಕ್ತಿಕವಾಗಿ ಘೋಷಿಸಿದ ಗ್ಯಾರಂಟಿ ಯೋಜನೆಗಳಲ್ಲ ಎಂದು ವಿವರಿಸಿದರು.
ಅಲ್ಲದೆ, ಈ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರದ ಹಣವನ್ನು ಬಳಸಲಾಗುತ್ತಿದೆ ಹೊರತು ಪ್ರತಿವಾದಿಗಳ ವೈಯಕ್ತಿಕ ಆದಾಯವನ್ನಲ್ಲ. "ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು ಪ್ರತಿವಾದಿಗಳು ವೈಯಕ್ತಿಕವಾಗಿ ಘೋಷಿಸಿ ಚುನಾವಣಾ ಅಕ್ರಮವೆಸಗಿ ಚುನಾವಣೆಯಲ್ಲಿ ಜಯಗಳಿಸಿದ್ದಾರೆಂದು ಚುನಾವಣಾ ತಕರಾರು ಅರ್ಜಿ ಸಲ್ಲಿಸಿರುವುದು ಸರಿಯಲ್ಲ" ಎಂದು ವಾದ ಮಂಡಿಸಿದರು.
ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ಪ್ರಕರಣ ಸಂಬಂಧ ಕೆಲವು ದಾಖಲೆಗಳನ್ನು ಸಲ್ಲಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಪ್ರತಿವಾದಿಗಳ ಪರ ವಕೀಲರಿಗೆ 15 ದಿನಗಳ ಕಾಲಾವಕಾಶ ನೀಡಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.












Click it and Unblock the Notifications