ಗ್ಯಾರಂಟಿ ರದ್ದು ಹೇಳಿಕೆ; ಬಾಲಕೃಷ್ಣ ಶಾಸಕತ್ವ ರದ್ದುಗೊಳಿಸಲು ಜೆಡಿಎಸ್ ದೂರು
ಬೆಂಗಳೂರು, ಫೆಬ್ರವರಿ 02: ಕರ್ನಾಟಕ ಕಾಂಗ್ರೆಸ್‌ನ 5 ಗ್ಯಾರಂಟಿ ಯೋಜನೆಗಳ ರದ್ದು ಕುರಿತು ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್. ಸಿ. ಬಾಲಕೃಷ್ಣ ನೀಡಿದ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಜೆಡಿಎಸ್ ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಕರ್ನಾಟಕ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಈಗಾಗಲೇ ಜಾರಿ ಮಾಡಿರುವ 5 ಗ್ಯಾರಂಟಿಗಳು ರದ್ದಾಗುತ್ತವೆ ಎಂದು ಚುನಾವಣೆಗೆ ಮೊದಲೇ ಜನತೆಗೆ ಶಾಸಕರು ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಿದೆ.

ಶಾಸಕ ಹೆಚ್. ಸಿ. ಬಾಲಕೃಷ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ವತಿಯಿಂದ ದೂರು ನೀಡಲಾಗಿದ್ದು, ಬಾಲಕೃಷ್ಣ ಅವರ ಶಾಸಕತ್ವವನ್ನು ರದ್ದು ಮಾಡಬೇಕು ಹಾಗೂ ಕಾಂಗ್ರೆಸ್ ಪಕ್ಷದ ಮಾನ್ಯತೆಯನ್ನೂ ರದ್ದುಪಡಿಸಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾಗೆ ಮನವಿ ಸಲ್ಲಿಸಲಾಗಿದೆ.
ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಶಾಸಕರಾದ ಸುರೇಶ್ ಬಾಬು, ಕರೆಮ್ಮ ನಾಯಕ್, ಹೆಚ್. ಟಿ. ಮಂಜುನಾಥ್, ಹರೀಶ್ ಗೌಡ ಸೇರಿದಂತೆ ವಿವಿಧ ನಾಯಕರು ಶುಕ್ರವಾರ ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ ಮಾಡಿದ್ದಾರೆ.
ಶಾಸಕರ ಹೇಳಿಕೆ ಏನು?; ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್. ಸಿ. ಬಾಲಕೃಷ್ಣ, "ರಾಜ್ಯದ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೂ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆಯದಿದ್ದರೆ ಗ್ಯಾರಂಟಿಗಳನ್ನು ರದ್ದು ಮಾಡುವುದೇ ಒಳ್ಳೆಯದು. ಈ ಕುರಿತು ಮುಖ್ಯಮಂತ್ರಿಗಳಿಗೂ ಹೇಳಿದ್ದೇನೆ" ಎಂದು ಹೇಳಿಕೆ ನೀಡಿದ್ದರು.
ಶಾಸಕರು ಮಾಗಡಿ ತಾಲ್ಲೂಕಿನ ತಾಲ್ಲೂಕಿನ ಶ್ರೀಗಿರಿಪುರದಲ್ಲಿ ಮಂಗಳವಾರ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡುವಾಗ, "ಬಿಜೆಪಿಯ ಧರ್ಮ ರಾಜಕಾರಣದ ಮಂತ್ರಾಕ್ಷತೆ ಬೇಕೋ ಅಥವಾ ಜನಸಾಮಾನ್ಯರ ಜೀವನ ಬದಲಿಸುತ್ತಿರುವ ಕಾಂಗ್ರೆಸ್‌ನ ಗ್ಯಾರಂಟಿ ಬೇಕೋ? ಎಂದು ಜನ ಈ ಚುನಾವಣೆಯಲ್ಲಿ ತೀರ್ಮಾನ ಮಾಡಬೇಕು" ಎಂದು ಹೇಳಿದ್ದರು.
ವಿಜಯೇಂದ್ರ ಟೀಕೆ; ಕಾಂಗ್ರೆಸ್ ಶಾಸಕರ ಹೇಳಿಕೆ ಬಗ್ಗೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದರು. "ಮೋದಿಯವರ ಅಭಿವೃದ್ಧಿ ಕಾರ್ಯ, ಶ್ರೀರಾಮನ ಜೈಕಾರ, ಕೇಸರಿಯ ವಿಸ್ತಾರ ಕಾಂಗ್ರೆಸ್ಸಿಗರನ್ನು ಕಂಗೆಡಿಸಿದೆ, ಅಖಾಡಕ್ಕೆ ಬರುವ ಮುನ್ನವೇ ಸೋಲೊಪ್ಪಿಕೊಳ್ಳುವಂತೆ ಮಾಡಿದೆ" ಎಂದು ಹೇಳಿದ್ದರು.
"ಓಟಿಗಾಗಿ ನೋಟು ಎನ್ನುತ್ತಿದ್ದ ಕಾಂಗ್ರೆಸ್ಸಿಗರು ಕಳೆದ ಚುನಾವಣೆಯಲ್ಲಿ ಓಟಿಗಾಗಿ ಬಿಟ್ಟಿ ಗ್ಯಾರಂಟಿ ಎಂದರು, ಇದೀಗ ಓಟು ಕೊಡದಿದ್ದರೆ ಗ್ಯಾರಂಟಿ ನಿಲ್ಲಿಸುವ ಏಟು ಕೊಡುವುದಾಗಿ ಮತದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ, ಏಟಿಗೆ ಎದಿರೇಟು ಕೊಡುವ ತಾಕತ್ತು ನಮ್ಮ ಮತದಾರರಿಗಿದೆ" ಎಂದು ಪೋಸ್ಟ್ ಹಾಕಿದ್ದರು.
"ಪ್ರಬುದ್ಧತೆಗೆ ಹೆಸರಾದ ನಮ್ಮ ಕರ್ನಾಟಕದ ಮತದಾರರನ್ನುಆಮಿಷಗಳಿಗೆ ಬಲಿಯಾಗುವ ದುರ್ಬಲ ಮನಸ್ಸಿನವರು ಎಂದು ಭಾವಿಸಿರುವ ಕಾಂಗ್ರೆಸ್ ತಮ್ಮ ಶಾಸಕರೊಬ್ಬರ ಮೂಲಕ ಮತದಾರರನ್ನು ಭಿಕ್ಷುಕರಂತೆ ಬೆದರಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಪಮಾನಿಸುವ ಹೇಳಿಕೆ ಕೊಡಿಸಿರುವುದು ಅಕ್ಷಮ್ಯ ಅಪರಾಧ. ಈ ಕೂಡಲೇ ಕಾಂಗ್ರೆಸ್ ಜನರ ಬಳಿ ಬೇಷರತ್ ಕ್ಷಮೆಯಾಚಿಸಬೇಕು" ಎಂದು ವಿಜಯೇಂದ್ರ ಒತ್ತಾಯಿಸಿದ್ದರು.
"ಯಾರದೋ ದುಡ್ಡು ಯಲ್ಲಮನ ಜಾತ್ರೆಯ ರೀತಿ ಜನರ ತೆರಿಗೆಯಿಂದ ರಾಜ್ಯದ ಬೊಕ್ಕಸ ಸೇರುವ ಹಣವನ್ನು ಬಿಟ್ಟಿ ಭಾಗ್ಯದ ಹೆಸರಿನ ಯೋಜನೆಗಳಿಗೆ ಸರ್ಕಾರ ಬಳಸಿಕೊಂಡರೂ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಲು ಸಾಧ್ಯವಾಗದೇ ಪರದಾಡುತ್ತಿದೆ. ಈ ನಡುವೆ ಫಲಾನುಭವಿ ಜನರನ್ನು ಹಂಗಿಸಿ ಬೆದರಿಸಿ ಕರ್ನಾಟಕದ ಮಾನ ಕಳೆಯುತ್ತಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಕಾಂಗ್ರೆಸ್ ಶಾಸಕರೇ ಗ್ಯಾರಂಟಿ ರದ್ದು ಬಗ್ಗೆ ಮಾತನಾಡಿದ್ದು ಅಚ್ಚರಿಗೆ ಕಾರಣವಾಗಿತ್ತು. ಕರ್ನಾಟಕದ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಇದೇ ವಿಚಾರ ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಟೀಕೆಗಳನ್ನು ಮಾಡುತ್ತಿವೆ.












Click it and Unblock the Notifications