Hassan Airport: ವಿಮಾನ ನಿಲ್ದಾಣ ಕಾಮಗಾರಿ ಬಗ್ಗೆ ಸಚಿವ ಶಿವಲಿಂಗೇಗೌಡ ಮಹತ್ವದ ಅಪ್ಡೇಟ್ಸ್
Hassan Airport: ಹಾಸನದಲ್ಲಿ ವಿಮಾನ ನಿಲ್ದಾಣ ಕಾಮಗಾರಿಗೆ ಸಂಬಂಧಿಸಿದಂತೆ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಮಹತ್ವದ ಅಪ್ಡೇಟ್ಸ್ ಕೊಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲಿ ಬಾಕಿಯಿರುವ ನ್ಯಾಯಾಲಯಗಳ ಕಟ್ಟಡ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆಯೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಂ. ಶಿವಲಿಂಗೇಗೌಡ ಅವರು ನಿರ್ದೇಶನ ನೀಡಿದ್ದಾರೆ. ಸೆಪ್ಟಂಬರ್ 20ರಂದು ಅರಸೀಕೆರೆ ಕೋರ್ಟ್ ಉದ್ಘಾಟನೆಗೆ ನಿರ್ದೇಶನ ನೀಡಲಾಗಿದೆ. ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯ ಸಂಕೀರ್ಣ, ವಿಮಾನ ನಿಲ್ದಾಣದ ಕಾಮಗಾರಿ ಮುಂತಾದ ಕಾಮಗಾರಿಗಳಿಗೆ ಅಗತ್ಯ ಬೆಂಬಲ ನೀಡುವುದಾಗಿಯೂ ಹೇಳಿದ್ದಾರೆ.
ನ್ಯಾಯಾಂಗ ಶ್ರೇಷ್ಠ, ನ್ಯಾಯಮೂರ್ತಿಗಳನ್ನು ಗೌರವದಿಂದ ನಡೆಸಿಕೊಳ್ಳಬೇಕು. ನ್ಯಾಯಮೂರ್ತಿಗಳಿಗೆ ಆಭಾಸವಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಬಾಕಿಯಿರುವ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಬೇಕು ಎಂದು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಂ. ಶಿವಲಿಂಗೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಕಾಸಸೌಧದ ಸಭಾಂಗಣದಲ್ಲಿ ಸೋಮವಾರ ಕೆ.ಎಂ. ಶಿವಲಿಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಹೊಸನ್ಯಾಯಾಲಯ ಸಂಕೀರ್ಣ ಅರಸಿಕೆರೆ ಮತ್ತು ಚನ್ನರಾಯಪಟ್ಟಣ ತಾಲ್ಲೂಕು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆವರಣದಲ್ಲಿ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು. 20ನೇ ತಾರೀಕು ಅರಸೀಕೆರೆ ಕೋರ್ಟ್ ಉದ್ಘಾಟನೆಗೆ ನಿರ್ದೇಶನ ನೀಡಿದ ಸಚಿವರು, ಅರಸಿಕೆರೆ ಇತಿಹಾಸದಲ್ಲೇ ಉತ್ತಮ ಕೋರ್ಟ್ ನಿರ್ಮಾಣವಾಗುತ್ತಿರುವುದು ಸಂತಸದ ವಿಚಾರ. ಸೆ. 6ರಂದು ಸಭೆ ಸೇರಿ ಉದ್ಘಾಟನಾ ಕಾರ್ಯಕ್ರಮಗಳ ಅಂತಿಮ ರೂಪುರೇಷೆಗಳನ್ನು ನಿರ್ಧರಿಸೋಣ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ತ್ವರಿತಗತಿಯಲ್ಲಿ ಕೆಲಸಗಳನ್ನು ಮಾಡಬೇಕು. ಈಗಾಗಲೇ ಸಾಕಷ್ಟು ತಡವಾಗಿದೆ. ವಿಳಂಬ ಧೋರಣೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ವಿದ್ಯುತ್ ಸಂಪರ್ಕ, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ಗುಣಮಟ್ಟವನ್ನು ಕಾಪಾಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ಗುತ್ತಿಗೆದಾರರ ಸಮಸ್ಯೆ ಬಗೆಹರಿಸಲು ಸಿದ್ಧನಿದ್ದೇನೆ ಎಂದರು.
ಉದ್ಘಾಟನೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಸಿದ್ಧತೆ ನಡೆಸಿ, ಅಗತ್ಯ ಸಹಕಾರ ಮಾಡಲು ಸಿದ್ಧನಿದ್ದೇನೆ. ಕಾರ್ಯಕ್ರಮವನ್ನು ಬಹಳ ಚೆನ್ನಾಗಿ ನಡೆಸಬೇಕು ಎಂದು ನಿರ್ದೇಶನ ನೀಡಿದರು. ಇದೇ ವೇಳೆ, ಹಾಸನ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಆದ್ಯತೆ ನೀಡಿದ್ದೇನೆ. ಪ್ರಮುಖವಾಗಿ ವಿಮಾನ ನಿಲ್ದಾಣ, ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ ಮತ್ತಿತರ ಮಹತ್ವದ ಕಾರ್ಯಕ್ರಮಗಳನ್ನು ನಡೆಸುವ ನಿಟ್ಟಿನಲ್ಲಿ ಗಮನಹರಿಸಬೇಕಿದೆ ಎಂದರು.
ಸಭೆಯಲ್ಲಿ ಹಾಸನ ಜಿಲ್ಲಾಧಿಕಾರಿ ಕೆ. ಎಸ್. ಲತಾಕುಮಾರಿ, ವಕೀಲರ ಪ್ರತಿನಿಧಿಗಳು ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಹಾಜರಿದ್ದರು.
ನಮ್ಮ ಸರ್ಕಾರಕ್ಕೆ ಪ್ರತಿಷ್ಠೆಯ ವಿಚಾರ
ಇನ್ನು ಜಿಲ್ಲಾಧಿಕಾರಿ ಕಚೇರಿಯನ್ನು ಶೀಘ್ರದಲ್ಲೇ ಉದ್ಘಾಟಿಸಿ, ಸಾರ್ವಜನಿಕ ಬಳಕೆಗೆ ಅನುವು ಮಾಡಿಕೊಡುವುದಾಗಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ಮಾತು ನೀಡಿದ್ದೇನೆ. ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕಿದೆ. ಇದು ನಮ್ಮ ಸರ್ಕಾರದ ಪ್ರತಿಷ್ಠೆಯ ವಿಚಾರವಾಗಿದೆ. ಹಾಗಾಗಿ ಅಧಿಕಾರಿಗಳು ಪರಿಸ್ಥಿತಿಯನ್ನು ಅರ್ಥೈಸಿಕೊಂಡು ಕೆಲಸ ಮಾಡಬೇಕು. ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ಮಂಜೂರಾದ ಅನುದಾನಕ್ಕಿಂತ ಹೆಚ್ಚುವರಿಯಾಗಿ ಹಣ ಖರ್ಚಾಗಿರುವ ಸಮಸ್ಯೆ ಬಗ್ಗೆ ಅಧಿಕಾರಿಗಳು ಗಮನಸೆಳೆದಾಗ, ಹೆಚ್ಚುವರಿ ಮೊತ್ತವನ್ನು ಲೋಕೋಪಯೋಗಿ ಮತ್ತು ಕಂದಾಯ ಇಲಾಖೆಯಿಂದ ತಲಾ ಶೇ. 50ರಷ್ಟು ಭರಿಸುವಂತೆ ಸೂಚನೆ ನೀಡಿದರು. ತಕ್ಷಣ ಉಭಯ ಇಲಾಖೆಯ ಅಧಿಕಾರಿಗಳು ಒಪ್ಪಿಗೆ ಸೂಚಿಸಿದರು. ಹೆಚ್ಚುವರಿ ಖರ್ಚಾಗಿರುವ ವೆಚ್ಚದ ಕುರಿತು ಸಮಗ್ರ ಮಾಹಿತಿ ಒದಗಿಸುವಂತೆಯೂ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪ್ರಸ್ತುತ 2 ಮಹಡಿ ಕಟ್ಟಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, 3ನೇ ಮಹಡಿ ನಿರ್ಮಾಣಕ್ಕೆ ಸಂಬಂಧಿಸಿ ಕೆಲಸಗಳು ಪ್ರಗತಿಯಲ್ಲಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು. ಈ ಸಂದರ್ಭ ಸಚಿವರು, ಸ್ಥಳಕ್ಕೆ ಖುದ್ದು ಭೇಟಿನೀಡಿ ಪರಿಶೀಲನೆ ನಡೆಸುತ್ತೇನೆ. ಕಟ್ಟಡದ ಮೂರನೇ ಮಹಡಿಯ ಅಗತ್ಯತೆಯ ಹಾಗೂ ಮೂಲಭೂತ ಸೌಕರ್ಯಗಳ ಗುಣಮಟ್ಟದ ಕುರಿತು ಪರಿಶೀಲನೆ ನಡೆಸುತ್ತೇನೆ ಎಂದರು.


Click it and Unblock the Notifications
